ಹುಬ್ಬಳ್ಳಿ : ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿ ಅಂಜಲಿ ಅಂಬಿಗೇರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಕೇಸನ್ನು ಸಿಐಡಿ ಗೆ ವಹಿಸಿ ಎಂದು ಕಾರ್ಮಿಕ ಸಚಿವ ಸಂತೋಷದ ಆಗ್ರಹಿಸಿದರು.
ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿರುವ ಅಂಜಲಿ ಅಂಬಿಗರ ನಿವಾಸಕ್ಕೆ ಭೇಟಿ ನೀಡಿದ ಸಂತೋಷ್ ಲಾಡ್, ನಗರದಲ್ಲಿ ನಡೆದ ಅಂಜಲಿ ಅಂಬಿಗೇರ ಹತ್ಯೆ ಪ್ರಕರಣವನ್ನು ಸರ್ಕಾರ ಸಿಐಡಿಗೆ ವಹಿಸುವಂತೆ ಸರ್ಕಾರಕ್ಕೆ ಹಾಗೂ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗುತ್ತದೆ ಎಂದು ತಿಳಿಸಿದರು.
ನನಗೆ ಅನಾರೋಗ್ಯದ ಕಾರಣಕ್ಕೆ ಘಟನೆ ನಡೆದ ದಿನ ಅಂಜಲಿ ನಿವಾಸಕ್ಕೆ ಭೇಟಿ ನೀಡಲು ಸಾಧ್ಯವಾಗಲಿಲ್ಲ. ಆದರೆ, ಈ ವಿಷಯದಲ್ಲಿ ಬಿಜೆಪಿಯವರು ನೀಡುತ್ತಿರುವ ಹೇಳಿಕೆಗಳು ಸರಿಯಲ್ಲ. ನಾನು ಬಿಜೆಪಿಯವರು ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸುವುದಿಲ್ಲ. ಅವರ ಆರೋಪಕ್ಕೆ ನಾನು ತಕ್ಕ ಉತ್ತರ ನೀಡಿದ್ದೇನೆ ಎಂದು ತಿರುಗೇಟು ನೀಡಿದರು.
ನೇಹಾ ಹಿರೇಮಠ ಕೊಲೆ ಘಟನೆ ನಂತರ ಇನ್ನೊಂದು ಅಂತಹದ್ದೆ ಘಟನೆ ನಡೆದಿರುವುದು ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ. ಸಮಾಜದಲ್ಲಿ ಶಾಂತಿ ಕದಡುವ ಹಾಗೂ ಅಹಿತಕರ ಚಟುವಟಿಕೆಯಲ್ಲಿ ಭಾಗವಹಿಸುವ ಮೂಲಕ ಯುವಕರು ಬಲಿಯಾಗುತ್ತಿದ್ದಾರೆ. ಇಂತಹ ಚಟುವಟಿಕೆಗಳಲ್ಲಿ ಭಾಗಿಯಾಗದಂತೆ ಯುವಕರಿಗೆ ಜಾಗೃತಿ ಮೂಡಿಸುವ ಕಾರ್ಯವಾಗಬೇಕಿದೆ ಎಂದರು.
ಇದೇ ಸಂದರ್ಭದಲ್ಲಿ ಸಂತೋಷ ಲಾಡ್ ಫೌಂಡೇಶನ್ ವತಿಯಿಂದ ಮೃತ ಅಂಜಲಿಯ ಅಜ್ಜಿ ಗಂಗಮ್ಮಳಿಗೆ ಸಚಿವ ಸಂತೋಷ ಲಾಡ್ ರೂ.2 ಲಕ್ಷ ಸಹಾಯಧನದ ಚೆಕ್ ವಿತರಿಸಿದರು.ಈ ವೇಳೆ ಶಾಸಕ ಪ್ರಸಾದ ಅಬ್ಬಯ್ಯ, ವಿನೋದ ಅಸೂಟಿ ಸೇರಿದಂತೆ ಹಲವರಿದ್ದರು.