ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ 187 ಕೋಟಿ ರೂಪಾಯಿಗಳ ಬೃಹತ್ ಹಗರಣಕ್ಕೆ ಸಂಬಂಧಿಸಿದಂತೆ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಬಿ ನಾಗೇಂದ್ರ ಸೇರಿದಂತೆ ಐವರ ವಿರುದ್ಧ ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕ ಹಾಗೂ ಭ್ರಷ್ಟಾಚಾರ ವಿರೋಧಿ ವೇದಿಕೆಯ ಅಧ್ಯಕ್ಷ ರಮೇಶ್ ಎನ್.ಆರ್ ED ಕಚೇರಿಯಲ್ಲಿ ನಾಳೆ ದೂರು ದಾಖಲಿಸಲಿದ್ದಾರೆ.
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ 187 ಕೋಟಿ ರೂಪಾಯಿಗಳ ಬೃಹತ್ ಹಗರಣ ಮತ್ತು ಕರ್ನಾಟಕ ರಾಜ್ಯ ಸರ್ಕಾರದ ಅಧೀನದಲ್ಲಿರುವ ನಿಗಮದ ಖಾತೆಯಿಂದ ತೆಲಂಗಾಣ ರಾಜ್ಯದ ಹೈದರಾಬಾದ್ ನಗರದಲ್ಲಿ ಇರುವ ರತ್ನಾಕರ ಬ್ಯಾಂಕ್ ಲಿಮಿಟೆಡ್ ಎಂಬ ಖಾಸಗಿ ಬ್ಯಾಂಕಿನಲ್ಲಿ ಖಾತೆಗಳನ್ನು ಹೊಂದಿರುವ 10 ಖಾಸಗಿ ಕಾರ್ಪೊರೇಟ್ ಕಂಪೆನಿಗಳ ಹೆಸರುಗಳಲ್ಲಿರುವ ಖಾತೆಗಳಿಗೆ 89.62 ಕೋಟಿ ರೂಪಾಯಿ ಗಳಷ್ಟು ಹಣ ಅಕ್ರಮವಾಗಿ ವರ್ಗಾವಣೆ ಆಗಿತ್ತು.
ಅಂತರ ರಾಜ್ಯಗಳ ಬೃಹತ್ ಹಗರಣಕ್ಕ ಸಂಬಂಧಿಸಿದಂತೆ, ಸ್ವತಃ ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಬಿ. ನಾಗೇಂದ್ರ ನಿಗಮದ ವ್ಯವಸ್ಥಾಪಕ ನಿರ್ದೇಶಕ ಜೆ.ಜಿ.ಪದ್ಮನಾಭ, ನಿಗಮದ ಲೆಕ್ಕಾಧಿಕಾರಿ ಪರಶುರಾಮ್ ಜಿ. ದುರಗಣ್ಣನವರ್ ಮತ್ತು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ದ M.G.ರಸ್ತೆ ಶಾಖೆಯ ಮುಖ್ಯ ವ್ಯವಸ್ಥಾಪಕಿ ಶುಚಿಸ್ಮಿತ ಸೇರಿದಂತೆ ಈ ಹಗರಣದಲ್ಲಿ ಭಾಗಿಯಾಗಿರುವ ಎಲ್ಲಾ ವಂಚಕರ ವಿರುದ್ಧ ಅಧಿಕಾರ ದುರುಪಯೋಗ, ವಂಚನೆ, ನಕಲಿ ದಾಖಲೆ ತಯಾರಿಕೆ, ಅಕ್ರಮ ಹಣ ವರ್ಗಾವಣೆ ಮತ್ತು ಸರ್ಕಾರಿ ಹಣ ದುರ್ಬಳಕೆ ಪ್ರಕರಣಗಳನ್ನು ದಾಖಲಿಸಿಕೊಂಡು ತನಿಖೆ ನಡೆಸಬೇಕೆಂದು ಕೋರಿ ನಾಳೆ ಜಾರಿ ನಿರ್ದೇಶನಾಲಯ (ED) ದಲ್ಲಿ ದೂರನ್ನು ದಾಖಲಿಸಲಿದ್ದಾರೆ.