ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವನೆ ಪ್ರಕರಣದಲ್ಲಿ ಸಿಬಿಐ ತನಿಖೆ ಆರಂಭಿಸಿದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ಸಲ್ಲಿಸುವಂತೆ ಸಚಿವ.ಬಿ.ನಾಗೇಂದ್ರಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನದ ವೇಳೆಗೆ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ ನೀಡುವ ಸಾಧ್ಯತೆ ಇದೆ.
ಬುಧವಾರ ತಡರಾತ್ರಿ ಹಿರಿಯ ಸಚಿವರೊಂದಿಗೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿದ್ದು, ಈ ಸಭೆಗೆ ನಾಗೇಂದ್ರ ಅವರನ್ನೂ ಕರೆಸಿಕೊಂಡಿದ್ದರು. ಈ ವೇಳೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಡಗಳ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಎಸ್ ಐಟಿ ಈಗಾಗಲೇ ತನಿಖೆ ನಡೆಸುತ್ತಿದೆ. ಅದರ ಜೊತೆಗೆ 50 ಕೋಟಿ ರೂ. ಗೂ ಹೆಚ್ಚಿನ ಹಣ ದುರಪಯೋಗವಾಗಿರುವ ಕಾರಣದಿಂದ ಸಿಬಿಐ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದೆ.