ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಲೋಕಸಭೆಗೆ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರು ಪೂರ್ಣಾವಧಿ ರಾಜಕೀಯದಲ್ಲಿ ತೊಡಗಿಸಿಕೊಳ್ಳುವುದಾಗಿ ಹೇಳಿದ್ದಾರೆ.
ನಾನು ಪೂರ್ಣ ಸಮಯ ರಾಜಕೀಯದಲ್ಲಿ ತೊಡಗಿಸಿಕೊಳ್ಳಲು ನಿರ್ಧರಿಸಿದ್ದೇನೆ. ಹಾಗಾಗಿ, ನನಗೆ ರಾಜಕೀಯದಲ್ಲಿ ಹೆಚ್ಚಿನ ಜವಾಬ್ದಾರಿ ಇರುವುದರಿಂದ ಸ್ವಲ್ಪ ಸಮಯದವರೆಗೆ ಚಿತ್ರರಂಗದಿಂದ ವಿರಾಮ ತೆಗೆದುಕೊಳ್ಳುತ್ತಿದ್ದೇನೆ” ಎಂದು ನಿಖಿಲ್ ಹೇಳಿದರು. ಅವರು ಶನಿವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು.
ಕುಮಾರಸ್ವಾಮಿ ಪ್ರತಿನಿಧಿಸುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧಿಸುವಿರಾ ಎಂಬ ಪ್ರಶ್ನೆಗೆ ಉತ್ತರಿಸಿದ ನಿಖಿಲ್, ಜೆಡಿಎಸ್-ಬಿಜೆಪಿ ಮೈತ್ರಿಕೂಟದ ನಾಯಕರು ಅಭ್ಯರ್ಥಿಯನ್ನು ನಿರ್ಧರಿಸುತ್ತಾರೆ ಎಂದು ಹೇಳಿದರು.
ಎಚ್.ಡಿ.ಕುಮಾರಸ್ವಾಮಿ ಕೇಂದ್ರ ಸಚಿವರಾಗುತ್ತಾರಾ?
ಜೆಡಿಎಸ್ ಹಿರಿಯ ನಾಯಕರ ಪ್ರಕಾರ, ಪಕ್ಷದ ಕಾರ್ಯಕರ್ತರು ಈ ಕ್ಷೇತ್ರವನ್ನು ಬಿಜೆಪಿಗೆ ಬಿಟ್ಟುಕೊಡಲು ಬಯಸುವುದಿಲ್ಲ ಮತ್ತು ನಿಖಿಲ್ ಅಥವಾ ಅನಿತಾ ಕುಮಾರಸ್ವಾಮಿ ಈ ಕ್ಷೇತ್ರದಿಂದ ಸ್ಪರ್ಧಿಸಬೇಕೆಂದು ಒತ್ತಾಯಿಸುತ್ತಿದ್ದಾರೆ.
2023 ರ ವಿಧಾನಸಭಾ ಚುನಾವಣೆಯಲ್ಲಿ ರಾಮನಗರದಲ್ಲಿ ನಿಖಿಲ್ ಕಾಂಗ್ರೆಸ್ ವಿರುದ್ಧ ಸೋತಿದ್ದನ್ನು ಇಲ್ಲಿ ಸ್ಮರಿಸಬಹುದು. ಪಕ್ಷದ ಕಾರ್ಯಕರ್ತರು ಮತ್ತು ಕುಟುಂಬ ಸದಸ್ಯರ ಒತ್ತಡದ ಹೊರತಾಗಿಯೂ ಅವರು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಿಂದ ಸ್ಪರ್ಧಿಸಲು ನಿರಾಕರಿಸಿದ್ದರು.
ಏತನ್ಮಧ್ಯೆ, ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡ ಅವರು ನಿಖಿಲ್ ಅವರನ್ನು ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡುವ ಸಾಧ್ಯತೆಗಳಿವೆ.