ಚಿತ್ರದುರ್ಗ : ನಟಿ ಪವಿತ್ರ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ ಹಿನ್ನೆಲೆಯಲ್ಲಿ ನಟ ದರ್ಶನ್ ಹಾಗೂ ಆತನ ಆಪ್ತರು ಸೇರಿ ರೇಣುಕಾಸ್ವಾಮಿ ಕೊಲೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ನಾಳೆ ಚಿತ್ರದುರ್ಗದಲ್ಲಿ ವೀರಶೈವ ಸಮಾಜ, ವೀರಶೈವ ಲಿಂಗಾಯತ ಮಹಾಸಭಾ, ಜಂಗಮ ಸೇರಿದಂತೆ ವಿವಿಧ ಸಂಘಟನೆಗಳು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲು ನಿರ್ಧರಿಸಿವೆ.
ಚಿತ್ರದುರ್ಗದ ನೀಲಕಂಠೇಶ್ವರ ದೇಗುಲದಿಂದ ಡಿಸಿ ಕಚೇರಿವರೆಗೆ ಪ್ರತಿಭಟನಾ ರ್‍ಯಾಲಿ ನಡೆಯಲಿದ್ದು, ಬಳಿಕ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವಂತೆ ಸರ್ಕಾರವನ್ನು ಒತ್ತಾಯಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗುತ್ತಿದೆ. ರೇಣುಕಾ ಸ್ವಾಮಿ ಹತ್ಯೆಯನ್ನು ಈಗಾಗಲೇ ಜಿಲ್ಲಾ ವೀರಶೈವ ಸಮಾಜ ಖಂಡಿಸಿದ್ದು, ನಾಳೆ ಜಿಲ್ಲೆಯ ಪ್ರಮುಖ ವೀರಶೈವ ನೇತಾರರು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ.
ಮೃತ ರೇಣುಕಾಸ್ವಾಮಿ ಮೂಲತಃ ಚಿತ್ರದುರ್ಗದವರು. ರೇಣುಕಾಸ್ವಾಮಿ ಚಿತ್ರದುರ್ಗದಲ್ಲಿ ಅಪಾರವಾದಂತಹ ಬಂಧು ಬಳಗ ಹಾಗೂ ಸ್ನೇಹಿತರನ್ನು ಹೊಂದಿದ್ದಾರೆ. ಅವರು ಅಲ್ಲೇ ಮೆಡಿಕಲ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದ್ದು, ಕಳೆದ ವರ್ಷ ಅಷ್ಟೇ ಅವರ ಮದುವೆಯಾಗಿದ್ದು ಇದೀಗ ರೇಣುಕಾಸ್ವಾಮಿ ಪತ್ನಿ 5 ತಿಂಗಳ ಗರ್ಭಿಣಿಯಾಗಿದ್ದಾರೆ. ಈಗ ಕುಟುಂಬದಲ್ಲಿ ದುಃಖ ಮಡುಗಟ್ಟಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್ ನಲ್ಲಿ ವಿಚಾರಣೆ ನಡೆಸಿದ ನ್ಯಾಯಾಧೀಶರು, ನಟ ದರ್ಶನ್ ಹಾಗೂ ಪವಿತ್ರ ಗೌಡ ಸೇರಿದಂತೆ 13 ಆರೋಪಿಗಳನ್ನು 6 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಇದೀಗ ಆದೇಶ ಹೊರಡಿಸಿದೆ.