ಬೆಂಗಳೂರು : ಲೋಕಸಭೆ ಚುನಾವಣೆಯಲ್ಲಿ ಹುಬ್ಬಳ್ಳಿ ಭಾಗದಲ್ಲಿ ಕಾಂಗ್ರೆಸ್ ಹಿನ್ನಡೆಗೆ ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹತ್ಯೆ ಪ್ರಮುಖ ಕಾರಣ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಡಿ.ಕೆ.ಸುರೇಶ್ ಅವರು ಸೋತಿದ್ದಾರೆ ಎನ್ನುವುದು ನಿಜ. ಆದರೆ ಬಳ್ಳಾರಿ, ಬೀದರ್, ಚಾಮರಾಜನಗರ, ಚಿಕ್ಕೋಡಿ, ದಾವಣಗೆರೆ, ಕಲ್ಬುರ್ಗಿ, ಮತ್ತು ರಾಯಚೂರುಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನೂ ನಮ್ಮ ಪಕ್ಷದ ಅಭ್ಯರ್ಥಿಗಳು ಸೋಲಿಸಿದ್ದಾರೆ. ಹುಬ್ಬಳ್ಳಿಯ ಅಮಾಯಕ ಹೆಣ್ಣೊಬ್ಬಳ ಹತ್ಯೆಯನ್ನು ನಿಮ್ಮ ಪಕ್ಷ ರಾಜಕೀಯ ಲಾಭಕ್ಕಾಗಿ ಬಳಸಿಕೊಂಡ ಕಾರಣಕ್ಕಾಗಿ ನಮಗೆ ಆ ಭಾಗದಲ್ಲಿ ಹಿನ್ನಡೆಯಾಯಿತು. ಇಲ್ಲದೆ ಇದ್ದರೆ ನಿಮ್ಮ ಪಕ್ಷ ಒಂದಂಕಿಗೆ ಇಳಿಯುತ್ತಿತ್ತು. ನಿಮ್ಮ ದೆಹಲಿ ನಾಯಕರ ರೀತಿಯಲ್ಲಿ ಸುಳ್ಳು ಸುದ್ದಿಗಳನ್ನು ಹರಡಬೇಡಿ ಎಂದು ಹೇಳಿದ್ದಾರೆ.
ಕೇವಲ ರಾಜಕೀಯ ಲಾಭದ ಉದ್ದೇಶದಿಂದ ಗ್ಯಾರಂಟಿ ಯೋಜನೆಗಳನ್ನು ನಾವು ಜಾರಿಗೆ ತಂದಿಲ್ಲ, ಅದು ನಮ್ಮ ಬದ್ಧತೆ ಮತ್ತು ರಾಜ್ಯದ ಜನರ ಮೇಲಿನ ಕಾಳಜಿ. ಕೇಂದ್ರ ಸರ್ಕಾರದ ದುರಾಡಳಿತದಿಂದ ನೆಲ ಹಿಡಿದಿರುವ ಜನತೆಗೆ ನೆರವಾಗುವ ಉದ್ದೇಶದಿಂದ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಕೇಂದ್ರದ ಸರ್ಕಾರಿ ಯಂತ್ರದ ದುರುಪಯೋಗ, ಮೋದಿ ನಾಮ ಬಲ, ಅಪಾರವಾದ ಸಂಪನ್ಮೂಲಗಳ ಹೊರತಾಗಿಯೂ ಜನತೆ ನಮಗೆ ಆಶೀರ್ವಾದ ಮಾಡಿದ್ದಾರೆ ಎಂದರು.