ಬೆಂಗಳೂರು : ವಾಲ್ಮೀಕಿ ನಿಗಮದಲ್ಲಿ ನಡೆದಂತ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ SIT ತನಿಖೆಯನ್ನು ಚುರುಕುಗೋಳಿಸಿದ್ದು, ಅಕ್ರಮ ಹಣ ವರ್ಗಾವಣೆಯಾಗಿದ್ದ 18 ನಕಲಿ ಬ್ಯಾಂಕ್ ಖಾತೆಗಳನ್ನು ತೆರೆದಿದ್ದ ಆರೋಪಿಯನ್ನು ಹೈದರಾಬಾದ್ನಲ್ಲಿ ಬಂಧಿಸಿದೆ ಎಂದು ತಿಳಿದುಬಂದಿದೆ.
ಬಂಧಿತನನ್ನು ಸತ್ಯನಾರಾಯಣ ವರ್ಮ ಎಂದು ತಿಳಿದುಬಂದಿದ್ದು, ಆತನಿಂದ 16 ಕೆಜಿ ಚಿನ್ನ, 10 ಕೋಟಿ ರೂಪಾಯಿ ನಗದು ಕೂಡ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.ಬಹುಕೋಟಿ ರೂಪಾಯಿ ವಾಲ್ಮೀಕಿ ನಿಗಮ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ SIT ಮತ್ತೊಂದು ಬೇಟೆಯಾಡಿದ್ದು, ನಕಲಿ ಖಾತೆ ತೆರೆದಿದ್ದ ಆರೋಪಿಯನ್ನು ಬಂಧಿಸಿದೆ.
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ ನಿಯಮಿತಕ್ಕೆ ಸಂಬಂಧಿಸಿದ ಬ್ಯಾಂಕ್ ಖಾತೆಯಿಂದ 18 ಖಾತೆಗಳಿಗೆ ಬರೋಬ್ಬರಿ 94.73 ಕೋಟಿ ರೂಪಾಯಿ ಅಕ್ರಮವಾಗಿ ವರ್ಗಾವಣೆಯಾಗಿತ್ತು. ಅಕೌಂಟ್ ನಂಬರ್ ಪರಿಶೀಲನೆ ವೇಳೆ ನಕಲಿ ಖಾತೆ ತೆರೆದಿರುವುದು ಖಚಿತವಾಗಿತ್ತು. ಇದರ ಬೆನ್ನಲ್ಲೇ ನಕಲಿ ಖಾತೆ ತೆರೆದ ವ್ಯಕ್ತಿ ಬಗ್ಗೆ ಮಾಹಿತಿ ಸಂಗ್ರಹಿಸಿದ್ದ ಎಸ್‌ಐಟಿ, ಆತನ ಪತ್ತೆಗೆ ಬಲೆ ಬೀಸಿತ್ತು.
ಬಂಧಿತ ಸತ್ಯನಾರಾಯಣ ಬಳಿಯಿಂದ 16 ಕೆಜಿ ಚಿನ್ನ, 10 ಕೋಟಿ ನಗದು ಜಪ್ತಿ ಮಾಡಲಾಗಿದೆ. ಇಂದು ಸತ್ಯನಾರಾಯಣನನ್ನು ಎಸ್‌ಐಟಿ ಅಧಿಕಾರಿಗಳು ಬೆಂಗಳೂರಿಗೆ ಕರೆತರಲಿದ್ದಾರೆ.ಹಗರಣ ಸಂಬಂಧ ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ, ಲೆಕ್ಕಾಧಿಕಾರಿ ಪರಶುರಾಮ್, ಮಾಜಿ ಸಚಿವ ಬಿ. ನಾಗೇಂದ್ರ ಅವರ ಅಪ್ತ ಎನ್ನಲಾದ ನಾಗರಾಜ್ ನೆಕ್ಕುಂಟಿ, ನಾಗೇಶ್ವರ್ ರಾವ್ ಎಂಬುವವರನ್ನು ಈಗಾಗಲೇ ಎಸ್‌ಐಟಿ ಬಂಧಿಸಿದ್ದು ವಿಚಾರಣೆಗೆ ಒಳಪಡಿಸಿದೆ.ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಚಿವ ಸ್ಥಾನಕ್ಕೆ ಬಿ ನಾಗೇಂದ್ರ ಅವರು ಕೂಡ ರಾಜೀನಾಮೆ ನೀಡಿದ್ದಾರೆ