ಬೆಂಗಳೂರು: ಬಿಬಿಎಂಪಿ ಚುನಾವಣೆ ಯಾವಾಗ ಎನ್ನುವುದೇ ಅನೇಕರ ಕುತೂಹಲವಾಗಿದೆ. ಈ ಬಗ್ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಬಿಗ್ ಅಪ್ ಡೇಟ್ ಒಂದನ್ನು ಕೊಟ್ಟಿದ್ದಾರೆ. ಅದೇನು ಅಂತ ಮುಂದೆ ಓದಿ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಪಕ್ಷದ ಬೆಂಗಳೂರು ನಗರದ ಬ್ಲಾಕ್ ನಾಯಕರ ಜತೆ ಪಾಲಿಕೆ ಚುನಾವಣೆ ಸಿದ್ಧತೆ ಬಗ್ಗೆ ಸಭೆ ಮಾಡಿದ್ದೇವೆ. ಖಾಲಿ ಇರುವ ಪದಾಧಿಕಾರಿಗಳ ಹುದ್ದೆ ತುಂಬಲು, ನಿಷ್ಕ್ರಿಯರಾಗಿರುವ ಪದಾಧಿಕಾರಿಗಳ ಜಾಗಕ್ಕೆ ಬೇರೆಯವರನ್ನು ನೇಮಿಸುವಂತೆ ಸೂಚನೆ ನೀಡಿದ್ದು ಒಂದು ತಿಂಗಳ ಕಾಲಾವಕಾಶ ನೀಡಿದ್ದೇವೆ. ಪಾಲಿಕೆ ಚುನಾವಣೆ ಶೀಘ್ರವೇ ಪ್ರಕಟವಾಗಲಿದ್ದು, ಅಷ್ಟರ ಹೊತ್ತಿಗೆ ಪಕ್ಷವನ್ನು ಸಜ್ಜುಗೊಳಿಸಬೇಕು. ಬೆಂಗಳೂರು ನಗರದಲ್ಲಿ ನಾಲ್ಕು ಲೋಕಸಭಾ ಕ್ಷೇತ್ರಗಳನ್ನು ನಾವು ಸೋತಿರಬಹುದು, ಆದರೆ ಪಾಲಿಕೆ ಚುನಾವಣೆಯಲ್ಲಿ ನಾವು ಚೇತರಿಸಿಕೊಳ್ಳುವ ವಿಶ್ವಾಸ ನನಗಿದೆ ಎಂದರು.
ಯಡಿಯೂರಪ್ಪ ಅವರ ಪ್ರಕರಣದಲ್ಲಿ ದ್ವೇಷ ರಾಜಕಾರಣ ನಡೆಯುತ್ತಿದೆ ಎಂಬ ಬಿಜೆಪಿ ಆರೋಪದ ಬಗ್ಗೆ ಕೇಳಿದಾಗ, “ಇದು ಕಾನೂನಿನ ಪ್ರಕ್ರಿಯೆ. ಬಿಜೆಪಿ ನಾಯಕರು ನಮ್ಮ ಹೆಸರು ಯಾಕೆ ತೆಗೆದುಕೊಳ್ಳುತ್ತಿದ್ದಾರೆ ಎಂದು ತಿಳಿದಿಲ್ಲ. ಇದರಲ್ಲಿ ನಮ್ಮ ಹಸ್ತಕ್ಷೇಪವಿಲ್ಲ ಎಂದು ಅವರಿಗೂ ಗೊತ್ತಿದೆ. ಆದರೂ ಈ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಕಾನೂನು ಪ್ರಕ್ರಿಯೆ ನಡೆಯುತ್ತಿದ್ದು ಈ ವಿಚಾರವಾಗಿ ನಾವು ಮಾತನಾಡುವುದು ಸರಿಯಲ್ಲ” ಎಂದರು.
ಅಶೋಕ್ ಅವರ ಟೀಕೆ ಬಗ್ಗೆ ಕೇಳಿದಾಗ, “ಅಶೋಕ್ ಅವರು ಒಬ್ಬ ಸುಳ್ಳುಗಾರ ಹಾಗೂ ಜೋಕರ್. ಅವರು ಯಾವುದಾದರೂ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದೂರು ನೀಡಲಿ. ತಮ್ಮ ಸರ್ಕಾರದ ಅವಧಿಯಲ್ಲಿ ಮಾಡಿದ ಅನುಭವವನ್ನು ಈಗ ಹೇಳುತ್ತಿದ್ದಾರೆ” ಎಂದರು.
ನೀರಿನ ಅಭಾವದ ಕುರಿತಾಗಿ ಕೇಳಿದಾಗ, “ಬೆಂಗಳೂರಿನಲ್ಲಿ ಈಗ ನೀರಿನ ಸಮಸ್ಯೆ ಇಲ್ಲ. ಎಲ್ಲಾ ಸಮಸ್ಯೆಗಳಿಗೆ ಪರಿಹಾರ ನೀಡಲಾಗಿದೆ” ಎಂದರು.
‘ಕಾವೇರಿ ನದಿ’ ನೀರು ಹಂಚಿಕೆ ವಿವಾದಕ್ಕೆ ‘ಪ್ರಧಾನಿ ಮೋದಿ’ ಜೊತೆ ಚರ್ಚಿಸಿ ಪರಿಹಾರ: ಕೇಂದ್ರ ಸಚಿವ HDK
ಪೆಟ್ರೋಲ್, ಡೀಸೆಲ್ ದರ ಏರಿಸುವ ಮೂಲಕ ಜನಸಾಮಾನ್ಯರಿಗೆ ಬರೆ ಎಳೆದ ಸರ್ಕಾರ: ಎಎಪಿ ಜಗದೀಶ್ ಆಕ್ರೋಶ