ತುಮಕೂರು: ಜಿಲ್ಲೆಯ ಮಧುಗಿರಿ ತಾಲೂಕಿನ ಚಿನ್ನೇನಹಳ್ಳಿಯಲ್ಲಿ ಕಲುಷಿತ ನೀರು ಸೇವಿಸಿ ಓರ್ವ ಸಾವನ್ನಪ್ಪಿ, ಹಲವರು ಅಸ್ವಸ್ಥಗೊಂಡ ಘಟನೆ ನಡೆದಿತ್ತು. ಈಗ ಚಿನ್ನೇನಹಳ್ಳಿಯಲ್ಲಿ ವ್ಯಕ್ತಿಯೊಬ್ಬರಿಗೆ ಕಾಲರಾ ದೃಢಪಟ್ಟಿದೆ.
ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಮಿಡಿಗೇಶಿ ಹೋಬಳಿಯ ಚಿನ್ನೇನಹಳ್ಳಿ ಗ್ರಾಮದಲ್ಲಿ ಕಲುಷಿತ ನೀರಿನ ಸೇವನೆ ಮತ್ತು ಸೇವಿಸಿರುವ ಆಹಾರದಿಂದಾಗಿ ಒಟ್ಟು 98 ಜನರು ಅಸ್ವಸ್ತರಾಗಿದ್ದು, ಅದರಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ 39 ಜನರು ತಾಲ್ಲೂಕು ಮತ್ತು ಜಿಲ್ಲಾ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುತ್ತಾರೆ.
ಸಚಿವ ಪ್ರಿಯಾಂಕ್ ಖರ್ಗೆ ಸೂಚನೆಯ ಮೇರೆಗೆ ಚಿನ್ನೇನಹಳ್ಳಿ ಗ್ರಾಮದ ಶಾಲೆಯಲ್ಲಿಯೇ 6 ಹಾಸಿಗೆಗಳ ತುರ್ತು ಚಿಕಿತ್ಸಾ ಕೇಂದ್ರವನ್ನು ತೆರೆಯಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಅಗತ್ಯವಾದ ಎಲ್ಲಾ ಚಿಕಿತ್ಸೆಗಳನ್ನು ನೀಡಲು ವೈದ್ಯಕೀಯ ಸಿಬ್ಬಂದಿಗಳು ಸ್ಥಳದಲ್ಲಿಯೇ ಮೊಕ್ಕಾಂ ಹೂಡಿದ್ದಾರೆ.
ಚಿನ್ನೇನಹಳ್ಳಿ ಗ್ರಾಮದಲ್ಲಿ ಇರುವ ಕೊಳವೆ ಬಾವಿಗಳು ಮತ್ತು ನೀರಿನ ಜಲಸಂಗ್ರಹಗಳಿಂದ ಸರಬರಾಜು ಮಾಡುತ್ತಿದ್ದ ನೀರನ್ನು ಈಗಾಗಲೇ ಸ್ಥಗಿತಗೊಳಿಸಲಾಗಿದ್ದು, ಪ್ರಸ್ತುತ 2 ಟ್ಯಾಂಕರ್ಗಳ ಮೂಲಕ ಗ್ರಾಮಕ್ಕೆ ನೀರು ಸರಬರಾಜು ಮಾಡಲಾಗುತ್ತಿದೆ. ಗ್ರಾಮದಲ್ಲಿರುವ ಎಲ್ಲಾ ನೀರಿನ ಮೂಲಗಳ ಮಾದರಿಗಳನ್ನು ಸಂಗ್ರಹಿಸಿ, ಪ್ರಾಥಮಿಕ ಹಂತದಲ್ಲಿ ಪರೀಕ್ಷಿಸಲಾಗಿದ್ದು, ಹೆಚ್ಚಿನ ಪರೀಕ್ಷೆಗಾಗಿ ಪ್ರಯೋಗಾಲಯಗಳಿಗೆ ಕಳುಹಿಸಲಾಗಿತ್ತು.
ಚಿನ್ನೇನಹಳ್ಳಿ ಗ್ರಾಮದಲ್ಲಿ ನಡೆದಿರುವ ಪ್ರಕರಣವು ವಿಷಾದನೀಯವಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಮಧುಗಿರಿ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರನ್ನು ಅಮಾನತ್ತುಗೊಳಿಸಲಾಗಿದೆ, ಅಲ್ಲದೆ, ಚಿನ್ನೇನಹಳ್ಳಿ ಗ್ರಾಮ ಪಂಚಾಯತಿಯ ಕಾರ್ಯದರ್ಶಿ ಹಾಗೂ ನೀರು ಸರಬರಾಜು ಸಿಬ್ಬಂದಿಯನ್ನು ಶಿಸ್ತು ಕ್ರಮ ಕಾಯ್ದಿರಿಸಿ, ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಅಮಾನತ್ತು ಮಾಡಲಾಗಿದೆ ಎಂದು ಗ್ರಾಮೀಣ ನೀರು ಸರಬರಾಜು ಇಲಾಖೆಯ ಅಧಿಕಾರಿಗಳು ತಿಳಿಸಿದ್ದರು.
ಇದೀಗ ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದಂತ ಚಿನ್ನೇನಹಳ್ಳಿಯ ಕೃಷ್ಣಪ್ಪ ಎಂಬುವರಿಗೆ ಕಾಲರಾ ದೃಢಪಟ್ಟಿದೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ: ಕೇಂದ್ರ ಸಚಿವ ಅಮಿತ್ ಶಾ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ
BIG NEWS: ರೇಣುಕಾಸ್ವಾಮಿ ಕೊಲೆ ಆರೋಪಿಗಳ ಮನೆ ಮಹಜರ್ ವೇಳೆ ಪೊಲೀಸರಿಗೆ ಮಹತ್ತರ ಸಾಕ್ಷ್ಯ ಲಭ್ಯ