ಬೆಂಗಳೂರುಛ “ಕೇಂದ್ರ ಸಚಿವ ಕುಮಾರಸ್ವಾಮಿ ಒಬ್ಬ ಹುಚ್ಚ. ಅವರು ಆಸ್ಪತ್ರೆಗೆ ಸೇರಿ ಚಿಕಿತ್ಸೆ ಪಡೆಯುವುದು ಉತ್ತಮ” ಎಂದು ಡಿಸಿಎಂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತೀವ್ರ ವಾಗ್ದಾಳಿ ನಡೆಸಿದರು.
ಮೂಡಾ ಹಗರಣ ಹೊರಬರುವಲ್ಲಿ ಡಿಸಿಎಂ ಶಿವಕುಮಾರ್ ಕೈವಾಡವಿದೆ ಎಂದು ಕುಮಾರಸ್ವಾಮಿ ಮಾಡಿರುವ ಆರೋಪದ ಬಗ್ಗೆ ಗಮನ ಸೆಳೆದಾಗ ಶಿವಕುಮಾರ್ ಅವರು ಹೀಗೆ ಪ್ರತಿಕ್ರಿಯಿಸಿದರು.
ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶುಕ್ರವಾರ ಉತ್ತರ ನೀಡಿದ ಶಿವಕುಮಾರ್ ಅವರು, “ಮೂಡಾ ಹಗರಣ ವಿಚಾರದಲ್ಲಿ ಕುಮಾರಸ್ವಾಮಿ ಮಾಡುತ್ತಿರುವುದು ಆಧಾರರಹಿತ ಆರೋಪ. ಹುಚ್ಚು ಹಿಡಿದಿರುವ ಕಾರಣ ಅವರು ಈ ರೀತಿ ಸುಳ್ಳು ಆರೋಪ ಮಾಡುತ್ತಿದ್ದಾರೆ” ಎಂದು ಹೇಳಿದರು.
ಸಿಡಿ ಫ್ಯಾಕ್ಟರಿ ನಂತರ ಈಗ ಮೂಡಾ ಫ್ಯಾಕ್ಟರಿ ಹೊರಬರುತ್ತಿದೆ ಎಂಬ ಕುಮಾರಸ್ವಾಮಿ ಹೇಳಿಕೆ ಬಗ್ಗೆ ಕೇಳಿದಾಗ “ಕೆಲವೊಬ್ಬರಿಗೆ ನನ್ನನ್ನು ನೆನಪಿಸಿಕೊಳ್ಳದಿದ್ದರೆ ನಿದ್ದೆಯೂ ಬರುವುದಿಲ್ಲ, ತಲೆಯೂ ಓಡುವುದಿಲ್ಲ. ಅವರು ಬಾಯಿಗೆ ಬಂದಂತೆ ಮಾತಾಡುತ್ತಿರುವುದು ಬಹಳ ಸಂತೋಷದ ವಿಚಾರ ” ಎಂದು ತಿರುಗೇಟು ನೀಡಿದರು.
ಮಂಡ್ಯದಲ್ಲಿ ತಾವು ಮಾಡುತ್ತಿರುವ ಜನತಾದರ್ಶನಕ್ಕೆ ಅಧಿಕಾರಿಗಳು ಹೋಗಬಾರದೆಂದು ರಾಜ್ಯ ಸರಕಾರದಿಂದ ಸೂಚನೆ ನೀಡಲಾಗಿದೆ ಎಂಬ ಕುಮಾರಸ್ವಾಮಿ ಅವರ ಆರೋಪದ ಬಗ್ಗೆ ಕೇಳಿದಾಗ “ಜನರನ್ನು ಇಟ್ಟುಕೊಂಡು ಜನತಾ ದರ್ಶನ ಮಾಡಲಿ. ಹಳ್ಳಿ, ಹಳ್ಳಿ ತಿರುಗಲಿ, ಯಾರು ಬೇಡ ಎಂದು ಹೇಳಿದ್ದಾರೆ. ಅಧಿಕಾರಿಗಳು ಶಿಷ್ಟಾಚಾರ ಪಾಲಿಸುತ್ತಾರೆ. ಅದರ ಪ್ರಕಾರ ಸಂಸದರನ್ನು ಹೇಗೆ ಸ್ವಾಗತಿಸಬೇಕೋ ಆ ರೀತಿ ಕೆಲಸ ಮಾಡುತ್ತಾರೆ. ನಾವು ದೆಹಲಿಗೆ ತೆರಳಿ ಅಲ್ಲಿನ ಅಧಿಕಾರಿಗಳನ್ನು ಬಳಸಿಕೊಳ್ಳಲು ಆಗುತ್ತದೆಯೇ? ಜನಕ್ಕೆ ಹೋಗಬೇಡಿ ಎಂದು ಹೇಳಲು ಆಗುತ್ತದೆಯೇ? ನನಗೆ ಈ ಆರೋಪದ ವಿಚಾರ ಗೊತ್ತೇ ಇಲ್ಲ. ನನಗೂ ಇದಕ್ಕೂ ಯಾವುದೇ ರೀತಿಯ ಸಂಬಂಧವೂ ಇಲ್ಲ” ಎಂದರು.