ಬೆಂಗಳೂರು : ರೈತರಿಗೆ ಮಣ್ಣಿನ ಆರೋಗ್ಯ ಕಾರ್ಡ್ ಅನ್ನು ಕಡ್ಡಾಯವಾಗಿ ನೀಡಬೇಕು. ಪ್ರತೀ ಎರಡು ವರ್ಷಕ್ಕೊಮ್ಮೆ ಮಣ್ಣಿನ ಪರೀಕ್ಷೆ ನಡೆಸಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸೋಮವಾರ ನಡೆದ ಡಿಸಿಗಳು ಮತ್ತು ಸಿಇಒಗಳು ಹಾಗೂ ಉಸ್ತುವಾರಿ ಕಾರ್ಯದರ್ಶಿಗಳ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮಣ್ಣಿನ ಫಲವತ್ತತೆ ಕಡಿಮೆ ಆಗುತ್ತಿದೆ. ಇದನ್ನು ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳುವ ಜೊತೆಗೆ ರೈತರಿಗೆ ಮಣ್ಣಿನ ಆರೋಗ್ಯ ಕಾರ್ಡ್ ಅನ್ನು ಕಡ್ಡಾಯವಾಗಿ ನೀಡಬೇಕು. ಪ್ರತೀ ಎರಡು ವರ್ಷಕ್ಕೊಮ್ಮೆ ಮಣ್ಣಿನ ಪರೀಕ್ಷೆ ನಡೆಸಬೇಕು ಎಂದು ಸೂಚಿಸಿದ್ದಾರೆ.
ಸರ್ಕಾರದ ಕಾರ್ಯಕ್ರಮಗಳು, ಯೋಜನೆಗಳು ಪರಿಣಾಮಕಾರಿಯಾಗಿ ಜನ ಸಾಮಾನ್ಯರಿಗೆ ತಲುಪಿಸಲು ಜಿಲ್ಲಾ ಮಟ್ಟದ ಅಧಿಕಾರಿಗಳು ಕ್ರಿಯಾಶೀಲತೆಯಿಂದ, ಸಮನ್ವಯತೆಯಿಂದ ಕೆಲಸ ಮಾಡಬೇಕು. ಆಗ ಮಾತ್ರ ಸರ್ಕಾರದ ಕಾಳಜಿಗಳು ಜನರಿಗೆ ತಲುಪಲು ಸಾಧ್ಯ’ ಎಂದರು.
ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ನೀಡಬೇಕು, ಕುರಿ-ಮೇಕೆಗಳ ಟೆಂಟ್ ಹಾಕಿರುವ ಸ್ಥಳಕ್ಕೇ ಹೋಗಿ ಲಸಿಕೆ ಮತ್ತು ಚುಚ್ಚುಮದ್ದುಗಳನ್ನು ನೀಡಬೇಕು, ಸಂಚಾರಿ ಕುರಿಗಾಹಿಗಳಿಗೆ ಬಂದೂಕು ಲೈಸೆನ್ಸ್ ಕೊಡುವುದು ಕಡ್ಡಾಯ. ಕುರಿ ಕಳ್ಳತನ ತಡೆಯಲು ಇದು ಅಗತ್ಯ ಎನ್ನುವ ಸ್ಪಷ್ಟ ಸೂಚನೆಗಳನ್ನು ನೀಡಿದ್ದಾರೆ.