ಬೆಂಗಳೂರು : ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಿನಾಂಕ:09.07.2024 ರಂದು ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ, ಹಾಗೂ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಲಾಗಿರುತ್ತದೆ. ಉಳಿದಂತೆ ಎಲ್ಲಾ ಪದವಿ, ಸ್ನಾತಕೊತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್, ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ.
ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಸೋಮವಾರ ಬೆಳಗ್ಗೆ ಉಡುಪಿ ನಗರದ ಹಲವು ಪ್ರದೇಶಗಳಲ್ಲಿ ಕೃತಕ ನೆರೆ ಸೃಷ್ಟಿಯಾಗಿದ್ದು, ನೂರಾರು ಮನೆಗಳು ಜಲಾವೃತಗೊಂಡಿವೆ. ಇದರಿಂದ ನಗರದಲ್ಲಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಹಲವು ಅಂಗಡಿಗಳಿಗೆ ನೀರು ನುಗ್ಗಿದ ಪರಿಣಾಮ ಸೊತ್ತುಗಳು ಹಾನಿಯಾಗಿ ಲಕ್ಷಾಂತರ ರೂ. ನಷ್ಟ ಉಂಟಾಗಿದೆ. ನೆರೆ ಯಿಂದ ಸಿಲುಕಿರುವ ಮನೆಗಳಿಂದ 30ಕ್ಕೂ ಅಧಿಕ ಮಂದಿಯನ್ನು ಅಗ್ನಿಶಾಮಕ ದಳ, ನಗರಸಭೆ ಸಿಬ್ಬಂದಿ ರಕ್ಷಿಸಿ ಸುರಕ್ಷಿತ ಸ್ಥಳಕ್ಕೆ ಕರೆದೊಯ್ದಿದ್ದಾರೆ. ಕೆಲವರು ಸಂಬಂಧಿಕರ ಮನೆಗೆ ತೆರಳಿದರೆ, ಇನ್ನು ಕೆಲವರಿಗೆ ನಗರಸಭೆಯಿಂದ ವಸತಿ ವ್ಯವಸ್ಥೆ ಮಾಡಲಾಗಿದೆ.
ಕಾಲೇಜುಗಳಲ್ಲಿ ಪಾಠ ಪ್ರವಚನಗಳನ್ನು ನಡೆಸುವಾಗ ಈ ಕೆಳಕಂಡ ಅಂಶಗಳನ್ನು ಪರಿಗಣಿಸುವಂತೆ ಕಾಲೇಜುಗಳ ಮುಖ್ಯಸ್ಥರಿಗೆ ಹಾಗೂ ಸಂಬಂಧ ಪಟ್ಟವರಿಗೆ ಸಾಮಾನ್ಯ ಸೂಚನೆಯನ್ನು ನೀಡಲಾಗಿದೆ.
1. ವಿದ್ಯಾರ್ಥಿಗಳ ಹಾಜರಾತಿಯನ್ನು ಕಡ್ಡಾಯ ಮಾಡುವಂತಿಲ್ಲ.
2. ಕಾಲೇಜು ಮುಖ್ಯಸ್ಥರು ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸುವಾಗ ಹಾಗೂ ಮನೆಗೆ ತೆರಳುವ ಸಂಧರ್ಭದಲ್ಲಿ ಯಾವುದೇ ಅಪಾಯವಿಲ್ಲದೇ ಸುರಕ್ಷಿತವಾಗಿ ತಲುಪುವ ಬಗ್ಗೆ ಗಮನವಹಿಸುವುದು.
3. ಕಠಿಣವಾದ ದಾರಿ ಎಂದರೆ ತೋಡು ಹಳ್ಳಗಳನ್ನು ದಾಟಿ ಬರುವ ಸಂದರ್ಭಗಳು ಇರುವಂತಹ ವಿದ್ಯಾರ್ಥಿಗಳಿಗೆ ಮನೆಯಲ್ಲಿಯೇ ಸುರಕ್ಷಿತವಾಗಿ ಇರುವಂತೆ ಸೂಚಿಸಲು ತಿಳಿಸಿದೆ.
4. ದುರ್ಬಲ / ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ ಪ್ರವಚನಗಳಿಗೆ ಬಳಸುವಂತಿಲ್ಲ. ಈ ನಿಟ್ಟಿನಲ್ಲಿ ಕಾಲೇಜುಗಳ ಮುಖ್ಯಸ್ಥರು ಕಾಲೇಜು ಕಟ್ಟಡಗಳ ಸುಸ್ಥಿತಿಯ ಬಗ್ಗೆ ಗಮನಹರಿಸುವುದು ಹಾಗೂ ಯಾವುದೇ ಅವಘಡಗಳು ಉಂಟಾಗದಂತೆ ಸೂಕ್ತ ಕ್ರಮವಹಿಸುವುದು. 5. ಈಗ ಮಳೆಗಾಗಿ, ಮಂಜಾಗರೂಕತಾ ಕ್ರಮವಾಗಿ ರಜೆಯನ್ನು ನೀಡಿ ಉಂಟಾಗಿರುವ ಕಲಿಕಾ ಸಮಯ ಕೊರತೆಯನ್ನು ಶನಿವಾರ ಮಧ್ಯಾಹ್ನ ಅಥವಾ ಭಾನುವಾರಗಳಂದು ಹೆಚ್ಚುವರಿ ತರಗತಿಗಳನ್ನು ನಡೆಸಿ ನಷ್ಟವನ್ನು ಸರಿದೂಗಿಸುವಂತೆ ತಿಳಿಸಿದೆ.