ಬೆಂಗಳೂರು : ರಾಜ್ಯದ ರೈತರಿಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದು, ಗಂಗಾ ಕಲ್ಯಾಣ ಯೋಜನೆಯಡಿ ವಿದ್ಯುತ್ ಸಂಪರ್ಕ ಕಲ್ಪಿಸದೆ ಬಾಕಿ ಉಳಿದಿರುವ ಪಂಪ್ ಸೆಟ್ಗಳಿಗೆ ಶೀಘ್ರ ವಿದ್ಯುತ್ ಸಂಪರ್ಕ ಒದಗಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸೋಮವಾರ ನಡೆದ ಡಿಸಿಗಳು ಮತ್ತು ಸಿಇಒಗಳು ಹಾಗೂ ಉಸ್ತುವಾರಿ ಕಾರ್ಯದರ್ಶಿಗಳ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಈ ವರ್ಷ ಮಳೆಯಿಂದ ಮನೆ, ಬೆಳೆ ಹಾನಿ ಆಗಿರುವವರಿಗೆ ಎಸ್.ಡಿ.ಆರ್.ಎಫ್ ಪ್ರಕಾರ ಪರಿಹಾರವನ್ನು ಕೂಡಲೇ ಇತ್ಯರ್ಥ ಮಾಡಬೇಕು.ಗಂಗಾ ಕಲ್ಯಾಣ ಯೋಜನೆಯಡಿ ವಿದ್ಯುತ್ ಸಂಪರ್ಕ ಕಲ್ಪಿಸದೆ ಬಾಕಿ ಉಳಿದಿರುವ ಪಂಪ್ ಸೆಟ್ಗಳಿಗೆ ಶೀಘ್ರ ವಿದ್ಯುತ್ ಸಂಪರ್ಕ ಒದಗಿಸಬೇಕು ಎಂದು ಹೇಳಿದ್ದಾರೆ.
ಬುಡಕಟ್ಟು ಜನರಿಗೆ ಅರಣ್ಯ ಜಮೀನು ಮಂಜೂರು ಮಾಡಲು 26,126 ಅರ್ಜಿಗಳು ಬಾಕಿ ಇವೆ. ಇವುಗಳನ್ನು ತ್ವರಿತವಾಗಿ ವಿಲೇವಾರಿ ಮಾಡಬೇಕು. ಅವರ ಹಾಡಿಗಳಿಗೆ ಹೋಗಲು ರಸ್ತೆ ಸಂಪರ್ಕ ಇರುವುದಿಲ್ಲ. ಈ ಬಗ್ಗೆ ಸೂಕ್ತ ಸುತ್ತೋಲೆ ಹೊರಡಿಸಿ ಅಗತ್ಯ ಮೂಲಸೌಕರ್ಯ ಒದಗಿಸಿ. ರಾಜ್ಯದಲ್ಲಿ 2225 ಗ್ರಾಮಗಳು ಮತ್ತು 20,38,334 ಜನರು ಪ್ರವಾಹ, ಭೂ ಕುಸಿತಕ್ಕೆ ಪ್ರತೀ ವರ್ಷ ತುತ್ತಾಗುತ್ತಾರೆ. ನಿಮ್ಮ ನಿಮ್ಮ ಜಿಲ್ಲೆಗಳಲ್ಲಿನ ಸಂತ್ರಸ್ಥ ಗ್ರಾಮಗಳನ್ನು ಗುರುತಿಸಿ ಅವರಿಗೆ ಶಾಶ್ವತ ಪರಿಹಾರಕ್ಕೆ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.