ಬೆಂಗಳೂರು : ಬೆಂಗಳೂರಲ್ಲಿ ಭೀಕರ ಸರಣಿ ರಸ್ತೆ ಅಪಘಾತ ಸಂಭವಿಸಿದ್ದು, ಪಾದಚಾರಿ ವ್ಯಕ್ತಿಯೊಬ್ಬ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಆನೇಕಲ್ ತಾಲೂಕಿನ ಬನ್ನೇರುಘಟ್ಟ ಮುಖ್ಯ ರಸ್ತೆಯ ಪಾರಿಜಾತ ಆಸ್ಪತ್ರೆ ಎದುರು ಸಂಭವಿಸಿದೆ.
ಹೌದು ಅಡ್ಡ ಬಂದ ಬೈಕ್ ಸವಾರನನ್ನು ಉಳಿಸಲು ಹೋಗಿ ಈ ಸರಣಿ ಅಪಘಾತ ನಡೆದಿದ್ದು, 2 ಬೈಕ್, ಗೂಡ್ಸ್ ವಾಹನ, ಥಾರ್ ವಾಹನಕ್ಕೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದಿದೆ. ಬಳಿಕ ನಿಯಂತ್ರಣ ತಪ್ಪಿದ ಬಸ್, 4 ವಾಹನಗಳಿಗೆ ಡಿಕ್ಕಿ ಹೊಡೆದು ವಿದ್ಯುತ್ ಕಂಬಕ್ಕೆ ಗುದ್ದಿದೆ. ಘಟನೆಯಲ್ಲಿ ಆಂಧ್ರಪ್ರದೇಶ ಮೂಲದ ಪ್ರಸಾದ್ ರಾವ್(60) ಕೊನೆಯುಸಿರೆಳೆದಿದ್ದಾರೆ.
ಘಟನೆಯಲ್ಲಿ ಪಾದಚಾರಿ, ಇಬ್ಬರು ಬೈಕ್ ಸವಾರರು ಹಾಗೂ ಬಸ್ಸಿನಲ್ಲಿದ್ದ ಪ್ರಯಾಣಿಕನಿಗೆ ಗಂಭೀರ ಗಾಯವಾಗಿದೆ. ಕೂಡಲೇ ಗಾಯಗೊಂಡವರನ್ನು ಸ್ಥಳೀಯರು ಸೇರಿಕೊಂಡು ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನಾ ಸ್ಥಳಕ್ಕೆ ಬನ್ನೇರುಘಟ್ಟ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜೊತೆಗೆ ಕ್ರೇನ್ ಮೂಲಕ ಬಿಎಂಟಿಸಿ ಬಸ್ ಹಾಗೂ ಬೈಕ್, ಗೂಡ್ಸ್ ವಾಹನವನ್ನು ತೆರವು ಮಾಡಿ, ಬಿಎಂಟಿಸಿ ಬಸ್ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.