ಹುಬ್ಬಳ್ಳಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಹಿಂದ ನಾಯಕ ಎನ್ನುತ್ತಲೇ ಎಸ್ ಸಿ-ಎಸ್ ಟಿ ಸಮುದಾಯದ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಂಡಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಹಣವನ್ನು ಸಿದ್ದರಾಮಯ್ಯ ಗ್ಯಾರಂಟಿ ಯೋಜನೆಗಳಿಗೆ ಉಪಯೋಗ ಮಾಡಿದ್ದಾರೆ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ನೇರವಾಗಿ ಭಾಗಿಯಾಗಿದ್ದು, ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ರಾಜ್ಯ ಕಾಂಗ್ರೆಸ್ ಸರ್ಕಾರ ತನ್ನ ಆಡಳಿತದಲ್ಲಿ ಭ್ರಷ್ಟಾಚಾರದ ಮೇಲೆ ಭ್ರಷ್ಟಾಚಾರ ನಡೆಸಿದೆ. ವಾಲ್ಮೀಕಿ ನಿಗಮದಲ್ಲಿ ಹಗರಣ, ಮುಡಾದಲ್ಲಿ ಅಕ್ರಮ ನಡೆದಿದೆ. ಸಾವಿರಾರು ಕೋಟಿ ಸಂಗ್ರಹ ಮಾಡಿ ಆಗಾಗ ತೆಂಗಾಣಕ್ಕೆ ಕೊಟ್ಟಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣವನ್ನು ನೂರಾರು ಜನರಿಗೆ ವರ್ಗಾವಣೆ ಮಾಡಿದ್ದಾರೆ. ಇದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಗೊತ್ತಿದ್ದೇ ಮಾಡಿರುವುದು ಎಂದು ವಾಗ್ದಾಳಿ ನಡೆಸಿದ್ದಾರೆ.