ಮಂಗಳೂರು : ರಾಜ್ಯದಲ್ಲಿ ಇನ್ಮುಂದೆ ಅಂಗನವಾಡಿ ಕೇಂದ್ರಗಳು ಸರ್ಕಾರಿ ಮೊಂಟೆಸರಿ ಆಗಿ ಪರಿವರ್ತನೆ ಆಗಲಿವೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಶನಿವಾರ ಮಂಗಳೂರು ನಗರದ ಉರ್ವಸ್ಟೋರ್ ಬಳಿಯಿರುವ ಕರಾವಳಿ ಲೇಖಕಿಯರ ಮತ್ತು ವಾಚಕಿಯರ ಸಂಘದ ನವೀಕೃತ ಕಟ್ಟಡ ‘ಸಾಹಿತ್ಯ ಸದನ’ ವನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ರಾಜ್ಯದ ಎಲ್ಲಾ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಿಸಲಾಗುವುದು. ಅಂಗನವಾಡಿ ಎನ್ನುವುದು 50 ವರ್ಷದ ಹಿಂದಿನ ಹೆಸರು. ಅವುಗಳನ್ನು ಇನ್ನು ಮುಂದೆ ಗೌರ್ನಮೆಂಟ್ ಮೊಂಟೆಸರಿ ಎಂದು ಕರೆಯಲಾಗುವುದು ಎಂದು ಸಚಿವರು ತಿಳಿಸಿದರು.
ರಾಜ್ಯದ ಪ್ರತಿ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ನೀಡಬೇಕೆಂಬುದು ಸರ್ಕಾರದ ಆಶಯವಾಗಿದೆ. ಮನೆಗೆಲಸ ಮಾಡುವ ಪೋಷಕರ ಜತೆಗೆ ಐಎಎಸ್ ಅಧಿಕಾರಿಗಳಿಗೂ ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕೆಂಬ ಆಕಾಂಕ್ಷೆ ಇರುತ್ತದೆ. ಹಾಗಾಗಿ, ಎಲ್ಲಾ ಮಕ್ಕಳಿಗೂ ಗುಣಮಟ್ಟದ ಶಿಕ್ಷಣದ ಜೊತೆಗೆ ಪೌಷ್ಠಿಕ ಆಹಾರ ನೀಡುವುದರೊಂದಿಗೆ ಅಂಗನವಾಡಿಗಳನ್ನು ಗೌರ್ನಮೆಂಟ್ ಮೊಂಟೆಸರಿಗಳಾಗಿ ಪರಿವರ್ತಿಸಲಾಗುವುದು ಎಂದರು.
ಅಂಗನವಾಡಿ ಕೇಂದ್ರಗಳಲ್ಲೇ ಎಲ್ಕೆಜಿ, ಯುಕೆಜಿ ಆರಂಭಿಸಲಾಗುವುದು ಎಂದು ಹೇಳಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು, ದಕ್ಷಿಣ ಕನ್ನಡದ ಜಿಲ್ಲೆಗೆ 10 ಸರಕಾರಿ ಮೊಂಟೆಸರಿಗಳು ಸೇರಿದಂತೆ 25 ಅಂಗನವಾಡಿ ಕೇಂದ್ರಗಳನ್ನು ಈ ವರ್ಷವೇ ನೀಡಲಾಗುವುದು. ಈ ಅಂಗನವಾಡಿ ಕೇಂದ್ರಗಳಿಗೆ ತಲಾ 20 ಲಕ್ಷ ರೂಪಾಯಿ ಅನುದಾನ ದೊರಕಿಸಲಾಗುವುದು ಎಂದರು.