ಬೆಂಗಳೂರು: ಇಡೀ ದೇಶಕ್ಕೆ ಮಾದರಿಯಾಗಿರುವ ಕರ್ನಾಟಕದ ಅಂಗನವಾಡಿ ಕೇಂದ್ರಗಳ ಉನ್ನತೀಕರಣದ ಮೊದಲ ಭಾಗವಾಗಿ ಇದೇ 22 ರಂದು ರಾಜ್ಯದ 250 ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ (ಎಲ್.ಕೆ.ಜಿ, ಯು.ಕೆ.ಜಿ) ತರಗತಿಗಳನ್ನು ಸಾಂಕೇತಿಕವಾಗಿ ಆರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಬೆಂಗಳೂರಿನ ಮಡಿವಾಳದ ಸ್ತ್ರೀ ಶಕ್ತಿ ಭವನದಲ್ಲಿ ನಡೆದ ಅಂಗನವಾಡಿ ಕೇಂದ್ರಗಳಲ್ಲೇ ಪೂರ್ವ ಪ್ರಾಥಮಿಕ ಶಿಕ್ಷಣ ಜಾರಿಯಾಗಲಿ, ಐಸಿಡಿಎಸ್ ಉಳಿಸಿ ಮಕ್ಕಳನ್ನು ರಕ್ಷಿಸಿ, ಸಂಘಟನೆ-ಸಂಘರ್ಷ-ಶಿಕ್ಷಣ ಅಧ್ಯಯನ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಸಚಿವರು, ಪೂರ್ವ ಪ್ರಾಥಮಿಕ ಶಾಲಾ ಮಕ್ಕಳಿಗೆ ಇಲಾಖೆ ವತಿಯಿಂದಲೇ ಬ್ಯಾಗ್, ಪುಸ್ತಕ ಹಾಗೂ ಸಮವಸ್ತ್ರಗಳನ್ನು ವಿತರಿಸಲಾಗುವುದು ಎಂದರು.
ಈ ಸಮಾರಂಭದಲ್ಲಿ ಹಂಪಿ ಕನ್ನಡ ವಿ.ವಿಯ ನಿವೃತ್ತ ಪ್ರಾಧ್ಯಾಪಕರು ಹಾಗೂ ಅಂಕಣಕಾರರಾದ ಟಿ.ಆರ್.ಚಂದ್ರಶೇಖರ್, ಸಿ.ಐ.ಟಿ.ಯು ಕರ್ನಾಟಕ ಹಾಗೂ ರಾಜ್ಯ ಅಂಗನವಾಡಿ ನೌಕರರ ಸಂಘದ ಅಧ್ಯಕ್ಷರಾದ ಎಸ್. ವರಲಕ್ಷ್ಮೀ, ಕಾರ್ಯದರ್ಶಿ ಯಮುನಾ ಗಾಂವ್ಕರ್, ಕಾರ್ಯಾಧ್ಯಕ್ಷರಾದ ಶಾಂತ ಎನ್.ಘಂಟೆ, ಖಜಾಂಚಿ ಜಿ.ಕಮಲಾ, ಪ್ರಧಾನ ಕಾರ್ಯದರ್ಶಿ ಎಚ್.ಎಸ್.ಸುನಂದ ಸೇರಿದಂತೆ ರಾಜ್ಯಮಟ್ಟದ ಹಾಗೂ ಜಿಲ್ಲಾ ಮಟ್ಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.