ಬೆಂಗಳೂರು : ನಕಲಿ ವೈದ್ಯಕೀಯ ವೃತ್ತಿಯಲ್ಲಿ ತೊಡಗಿದವರಿಗೆ 1 ಲಕ್ಷ ರೂ.ವರೆಗೆ ದಂಡ ವಿಧಿಸಲಾಗುವುದು ಎಂದು ಸಚಿವ ದಿನೇಶ ಗುಂಡೂರಾವ್ ಹೇಳಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಸಚಿವರು, ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಗಳ ಮೇಲೆ ಹಿಂಸಾಚಾರ ತಡೆ, ಶಿಕ್ಷೆ ಪ್ರಮಾಣ ಹೆಚ್ಚಳ ಮತ್ತು ವೈದ್ಯಕೀಯ ವೃತ್ತಿಯ ಕಡ್ಡಾಯ ನೋಂದಣಿ ಕುರಿತ ಮಸೂದೆಯನ್ನು ವಿಧಾನಸಭೆಯಲ್ಲಿ ಮಂಡಿಸಿ ಅಂಗೀಕಾರ ಪಡೆಯಲಾಗಿದೆ. ಮಸೂದೆಯ ಪ್ರಮುಖ ಅಂಶಗಳು ಹೀಗಿವೆ.
ವೃತ್ತಿಪರ ವೈದ್ಯರು ಕಡ್ಡಾಯವಾಗಿ ವೈದ್ಯಕೀಯ ಪರಿಷತ್ತಿನಲ್ಲಿ ನೋಂದಣಿಯಾಗಿರಬೇಕು. ನೋಂದಣಿ ಮಾಡಿಕೊಳ್ಳದೆ ವೈದ್ಯಕೀಯ ವೃತ್ತಿಯಲ್ಲಿ ತೊಡಗಿದ್ದರೆ ಅವರು ಶಿಕ್ಷೆಗೆ ಅರ್ಹರಾಗುತ್ತಾರೆ. ನಕಲಿ ವೈದ್ಯಕೀಯ ವೃತ್ತಿಯಲ್ಲಿ ತೊಡಗಿದವರಿಗೆ 10 ಸಾವಿರ ರೂಪಾಯಿಂದ 1 ಲಕ್ಷ ರೂಪಾಯಿಗಳವರೆಗೆ ದಂಡ ವಿಧಿಸುವ ಅವಕಾಶ ಕಲ್ಪಿಸಲಾಗಿದೆ. ವೈದ್ಯಕೀಯ ವೃತ್ತಿನಿರತರ ಮೇಲೆ ಹಿಂಸಾಚಾರ, ಅಪಮಾನ ನಡೆಸುವವರಿಗೆ ಶಿಕ್ಷೆಯ ಪ್ರಮಾಣ ಹೆಚ್ಚಳ. ಮೂರು ವರ್ಷಗಳಿಂದ 7 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 25 ಸಾವಿರ ರೂಪಾಯಿಯಿಂದ 2 ಲಕ್ಷದವರೆಗೆ ದಂಡ ವಿಧಿಸುವ ಅವಕಾಶ ಇದೆ ಎಂದು ತಿಳಿಸಿದ್ದಾರೆ.