ಬೆಂಗಳೂರು : ಮಕ್ಕಳ ಶಾಲಾ ಬ್ಯಾಗ್ ಹೊರೆ ಕಡಿಮೆ ಮಾಡಲು ರಾಜ್ಯ ಸರ್ಕಾರವು ಮಹತ್ವದ ಕ್ರಮ ಕೈಗೊಂಡಿದ್ದು, ಪ್ರತಿ ತಿಂಗಳ 3 ನೇ ಶನಿವಾರ ಬ್ಯಾಗ್ ರಹಿತ ದಿನವನ್ನಾಗಿ ಮಾಡಲಾಗುತ್ತಿದೆ ಎಂದು ಶಿಕ್ಷ ಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಮಕ್ಕಳ ಶಾಲಾ ಬ್ಯಾಗ್ ಹೊರೆ ಕಡಿಮೆ ಮಾಡಲು ಈಗಾಗಲೇ ಹಲವು ಕ್ರಮ ಕೈಗೊಳ್ಳಲಾಗುತ್ತಿದ್ದು, ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಪ್ರತಿ ತಿಂಗಳ 3 ನೇ ಶನಿವಾರ ಬ್ಯಾಗ್ ರಹಿತ ದಿನವನ್ನಾಗಿ ಮಾಡಲಾಗುತ್ತಿದೆ . ಜೊತೆಗೆ ನೋಟ್ ಬುಕ್ ಪ್ರಮಾಣ ಕಡಿಮೆ ಮಾಡಲು ಬಹು ವಿಷಯಗಳಿಗೆ ಒಂದೇ ನೋಟ್ ಬುಕ್ ಪುಸ್ತಕ ಅಥವಾ ಶೀಟ್ ಪರಿಚಯಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಹೇಳಿದ್ದಾರೆ.
ಇನ್ನು ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳನ್ನು ನೀಟ್, ಸಿಇಟಿ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ದಗೊಳಿಸಲು ಪ್ರಸಕ್ತ ವರ್ಷದಲ್ಲಿ 25000 ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆಯಿಂದ ಉಚಿತ ತರಬೇತಿ ನೀಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.