ಮಂಡ್ಯ : ಕೇಂದ್ರ ಸರ್ಕಾರದ ಮಲತಾಯಿ ಧೋರಣೆ ಹಾಗೂ ಬಿಜೆಪಿಯ 21 ಭ್ರಷ್ಟ ಹಗರಣಗಳ ವಿರುದ್ದ ಕಾಂಗ್ರೆಸ್ ಪಕ್ಷದಿಂದ ಹಮ್ಮಿಕೊಂಡಿರುವ ಬೃಹತ್ ಜನಾಂದೋಲನ ಸಮಾವೇಶವನ್ನು ಸೋಮವಾರ ಬೆಳಿಗ್ಗೆ 11 ಗಂಟೆಗೆ ಮದ್ದೂರು ತಾಲೂಕು ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಕೆ.ಎಂ.ಉದಯ್ ಭಾನುವಾರ ತಿಳಿಸಿದರು.
ಕಾರ್ಯಕ್ರಮವನ್ನು ಆಯೋಜಿಸಿರುವ ತಾಲೂಕು ಕ್ರೀಡಾಂಗಣಕ್ಕೆ ಶಾಸಕ ಕೆ.ಎಂ.ಉದಯ್ ಭಾನುವಾರ ಬೆಳಿಗ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಕಾರ್ಯಕ್ರಮದ ರೂಪುರೇಷೆಗಳ ಕುರಿತು ಜನಪ್ರತಿನಿಧಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಸೇರಿದಂತೆ ಸ್ಥಳೀಯ ಮುಖಂಡರೊಂದಿಗೆ ಚರ್ಚಿಸಿದರು.
ಬಳಿಕ, ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಕೆ.ಎಂ.ಉದಯ್ ಕಾರ್ಯಕ್ರಮದ ಉದ್ಘಾಟನೆಯನ್ನು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಸರ್ಕಾರದ ವಿವಿಧ ಸಚಿವರು, ಜಿಲ್ಲೆಯ ಶಾಸಕರು, ನಿಗಮ ಮಂಡಳಿ ಅಧ್ಯಕ್ಷರು ಹಾಗೂ ಪಕ್ಷದ ಮುಖಂಡರು ಭಾಗವಹಿಸಲಿದ್ದಾರೆ ಎಂದರು.
ಕೇಂದ್ರ ಸರ್ಕಾರದ ಮಲತಾಯಿ ಧೋರಣೆ, ಎನ್.ಡಿ.ಎ ಮೈತ್ರಿ ಕೂಟದ ಅಪಪ್ರಚಾರ, ರಾಜ್ಯ ಸರ್ಕಾರದ ಸಿಎಂ ಹಾಗೂ ಡಿಸಿಎಂ ವಿರುದ್ಧ ಅಪಪ್ರಚಾರ ವಿರುದ್ಧ ಕಾಂಗ್ರೆಸ್ ಪಕ್ಷದಿಂದ ಜನಾಂದೋಲನ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದರು. ಕೇಂದ್ರ ಮತ್ತು ಮೈತ್ರಿ ಕೂಟದ ಪಕ್ಷಗಳದ್ದೇ ಸಾಕಷ್ಟು ಹಗರಣಗಳಿವೆ ಹೀಗಾಗಿ ಯಾವ ಪುರುಷಾರ್ಥಕ್ಕಾಗಿ ಈ ಪಾದಯಾತ್ರೆಯನ್ನು ಮಾಡ್ತಿದ್ದಾರೆ ಎಂದು ಪ್ರಶ್ನಿಸಿದರು.
ಅತೀವೃಷ್ಟಿಯಿಂದಾಗಿ ರಾಜ್ಯದ ಜನತೆ ತೀರಾ ಸಂಕಷ್ಟದಲ್ಲಿದ್ದಾರೆ ಇಂತಹ ಸಮಯದಲ್ಲಿ ಮೈತ್ರಿ ಕೂಟದ ನಾಯಕರು ಭೇಟಿ ನೀಡಿ ಸಾಂತ್ವನ ಹೇಳುವುದನ್ನು ಬಿಟ್ಟು ಮುಡಾ ಹಗರಣವನ್ನು ಮುಂದಿಟ್ಟುಕೊಂಡು ಪಾದಯಾತ್ರೆ ನಡೆಸುತ್ತಿರುವುದು ಜನವಿರೋಧಿ ನೀತಿಯಾಗಿದೆ ಎಂದು ಕಿಡಿಕಾರಿದರು.
ಕಾಂಗ್ರೆಸ್ ಸರ್ಕಾರ ಯಾರ ಹಂಗಿಲ್ಲದೆ ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ಬಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಒಗ್ಗೂಡಿ ಜಾರಿಗೆ ತಂದಿರುವ ಜನಪರ ಯೋಜನೆಗಳ ಯಶಸ್ವಿಯನ್ನು ಸಹಿಸದೆ ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ವಾಗ್ಧಾಳಿ ನಡೆಸಿದರು.
ಇನ್ನು ಬೆಂಗಳೂರು–ಮೈಸೂರು ಹೆದ್ದಾರಿ ಹಾಗೂ ಪಟ್ಟಣದಾದ್ಯಂತ ಪಕ್ಷದ ಬಾವುಟ, ಬಂಟಿಂಗ್ಸ್ ಹಾಗೂ ನಾಯಕರ ಫ್ಲೆಕ್ಸ್ಗಳನ್ನು ರಾತ್ರಿಯಿಡೀ ಅಳವಡಿಸಿದರು. ಜೊತೆಗೆ ಸ್ಥಳೀಯ ಮುಖಂಡರು ಸಿಎಂ, ಡಿಸಿಎಂ, ಸಚಿವರು ಸೇರಿದಂತೆ ತಮ್ಮ ನಾಯಕರಿಗೆ ಸ್ವಾಗತ ಕೋರುವ ಫ್ಲೆಕ್ಸ್ಗಳು ಅಲ್ಲಲ್ಲಿ ರಾರಾಜಿಸುತ್ತಿವೆ.
ಕಾರ್ಯಕ್ರಮವನ್ನು ಯಶಸ್ವಿಗೊಳಿಸುವುದಕ್ಕಾಗಿ ತಾಲೂಕಿನ ವಿವಿಧ ಗ್ರಾಮಗಳಿಂದ 20 ಸಾವಿರಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಜನರನ್ನು ಸೇರಿಸಲು ಸ್ಥಳೀಯ ಮುಖಂಡರಿಗೆ ಜವಾಬ್ದಾರಿ ವಹಿಸಲಾಯಿತು.
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭಾಗಿಯಾಗುವ ಕಾರ್ಯಕ್ರಮದಲ್ಲಿ ಯಾವುದೇ ರೀತಿಯಲ್ಲೂ ಲೋಪವಾಗದಂತೆ ನೋಡಿಕೊಳ್ಳಬೇಕು ಎಂದು ಮುಖಂಡರು ಹಾಗೂ ಕಾರ್ಯಕರ್ತರಿಗೆ ಶಾಸಕ ಕೆ.ಎಂ.ಉದಯ್ ಸೂಚನೆ ನೀಡಿದರು.
ವರದಿ : ಗಿರೀಶ್ ರಾಜ್, ಮಂಡ್ಯ
ವಯನಾಡು ದುರಂತ: ಭೂಕುಸಿತ ಸಂತ್ರಸ್ತರಿಗೆ 25 ಲಕ್ಷ ರೂ.ದೇಣಿಗೆ ನೀಡಿದ ‘ನಟ ಅಲ್ಲು ಅರ್ಜುನ್’ | Wayanad landslide