ದಾವಣಗೆರೆ : ಮಕ್ಕಳು ವ್ಯಸನ ಮುಕ್ತರಾಗಿ ಆರೋಗ್ಯಯುತ ಸಮಾಜ ನಿರ್ಮಾಣಕ್ಕಾಗಿ ಒಳ್ಳೆಯ ಹವ್ಯಾಸಗಳನ್ನು ಬೆಳೆಸಿಕೊಂಡು ತಮ್ಮ ದೈಹಿಕ ಹಾಗೂ ಮಾನಸಿಕ ವಿಕಸನಕ್ಕಾಗಿ ಸದಾ ಕ್ರಿಯಾಶೀಲರಾಗಿರಬೇಕೆಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಕರೆ ನೀಡಿದರು.
ಅವರು ಗುರುವಾರ ರಾಮನಗರದಲ್ಲಿನ ಗಾಂಧಿ ಭವನದಲ್ಲಿ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿಗಟೇರಿ ಜಿಲ್ಲಾ ಆಸ್ಪತ್ರೆ, ಎನ್.ಎಸ್.ಎಸ್, ಭಾರತ ಸೇವಾದಳ, ಗ್ರಾಮ ಸ್ವರಾಜ್ ಅಭಿಯಾನ, ದಾವಣಗೆರೆ ಇವರ ಸಂಯುಕ್ತಾಶ್ರಯದಲ್ಲಿ ವ್ಯಸನ ಮುಕ್ತ ದಿನಾಚರಣೆ ಅಂಗವಾಗಿ ಏರ್ಪಡಿಸಲಾದ ವ್ಯಸನ ಮುಕ್ತ ಶಿಬಿರ ಮತ್ತು ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ಏರ್ಪಡಿಸಲಾದ ಕ್ವಿಟ್ ಇಂಡಿಯಾ ಚಳುವಳಿ ಒಂದು ನೆನಪು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮಕ್ಕಳು ವ್ಯಸನಗಳಿಗೆ ಬಲಿಯಾಗದೆ ತಮ್ಮ ದೈಹಿಕವಾದ ಬೆಳವಣಿಗೆಗೆ ಬೇಕಾದ ಆಟ ಮತ್ತು ಮಾನಸಿಕ ಬೆಳವಣಿಗೆಗೆ ಬೇಕಾದ ಜ್ಞಾನಾರ್ಜನೆ ಕಡೆ ಹೆಚ್ಚು ಒತ್ತು ಕೊಡಬೇಕು. ಈಗಿನ ಮಕ್ಕಳು ಮೊಬೈಲ್ ಹೆಚ್ಚು ಬಳಸುತ್ತಿದ್ದು ಇದು ಸಹ ಒಂದು ರೀತಿಯ ವ್ಯಸನವಾಗಿದೆ. ಇದರಿಂದ ಆರೋಗ್ಯಕ್ಕೆ ಅಪಾಯವಾಗಲಿದ್ದು ಮುಂದೊಂದು ದಿನ ಕುತ್ತಿಗೆ, ಬೆನ್ನು, ಕೈ ನೋವು ಎಂದು ಹೇಳಬಹುದು. ಕಳೆದಿಪ್ಪತ್ತು ವರ್ಷಗಳಿಂದ ಮೊಬೈಲ್ ಬಂದಿದ್ದು ಈಗಿನ ಮಕ್ಕಳಿಗೆ ಹುಟ್ಟಿನಿಂದಲೇ ಮೊಬೈಲ್ ಗೀಳು ಬೆಳೆಸಿಕೊಳ್ಳುವ ಅವಕಾಶವಿದೆ. ಇದರಿಂದ ಮಕ್ಕಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆ ಕುಂಠಿತವಾಗುವ ಜೊತೆಗೆ ಒತ್ತಡವು ಹೆಚ್ಚಲಿದೆ. ಈ ನಿಟ್ಟಿನಲ್ಲಿ ಅನಾವಶ್ಯಕ ಮೊಬೈಲ್ ಬಳಕೆ ಕಡಿಮೆ ಮಾಡಿ ತಮ್ಮ ಆರೋಗ್ಯ ಮತ್ತು ಮಾನಸಿಕ ಸದೃಢತೆಗೆ ಹೆಚ್ಚಿನ ಒತ್ತು ನೀಡಲು ತಿಳಿಸಿದರು.
ಗ್ರಂಥಾಲಯಕ್ಕೆ ಪುಸ್ತಕಗಳು; ಗಾಂಧಿ ಭವನದಲ್ಲಿನ ಗ್ರಂಥಾಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಜಿಲ್ಲಾ ಆಡಳಿತಕ್ಕೆ ಮತ್ತು ನನಗೆ ನೀಡಲಾಗುವ ಪುಸ್ತಕಗಳನ್ನು ಈ ಗ್ರಂಥಾಲಯಕ್ಕೆ ಕಳುಹಿಸಲಾಗುತ್ತದೆ. ಓದುಗರು ಗಾಂಧಿ ಭವನದ ಗ್ರಂಥಾಲಯಕ್ಕೆ ಆಗಮಿಸಿ ದಿನಿತ್ಯದ ಪತ್ರಿಕೆಗಳು ಮತ್ತು ಇಲ್ಲಿ ಸಿಗುವ ಸ್ಪರ್ಧಾತ್ಮಕ ಪರೀಕ್ಷೆ, ಕಥೆ, ಕಾದಂಬರಿ ಕುರಿತ ಅತ್ಯುತ್ತಮವಾದ ಪುಸ್ತಕಗಳನ್ನು ಓದುವಂತಾಗಬೇಕೆಂದು ತಿಳಿಸಿದರು.