ಮೈಸೂರು: ಮಿಸ್ಟರ್ ಅಶೋಕ್, ಮಿಸ್ಟರ್ ವಿಜಯೇಂದ್ರ ನೀವು ಆಪರೇಶನ್ ಕಮಲದ ಮೂಲಕ ಈ ಹಿಂದೆ ಅನೇಕ ಸರ್ಕಾರ ತೆಗೆದಿದ್ದೀರಿ. ಮಿಸ್ಟರ್ ಕುಮಾರಸ್ವಾಮಿ, ನಿನ್ನ ಮುಖಂಡತ್ವದಲ್ಲಿ ಕೇವಲ 19 ಸೀಟುಗಳನ್ನು ಮಾತ್ರ ಗೆದ್ದಿದ್ದೀರಿ. ಈ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ 136 ಸೀಟು ಗೆದ್ದಿದೆ. ಬ್ರಿಟಿಷರು 200 ವರ್ಷ ಆಳಿದರೂ ಈ ಕಾಂಗ್ರೆಸ್ ಅಳಿಸಲು ಆಗಲಿಲ್ಲ. ಬಡವರ ಶಕ್ತಿಯಿಂದ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಪಕ್ಷವನ್ನು ನೀನು ಎರಡು ಜನ್ಮ ಎತ್ತಿ ಬಂದರೂ ಅಳಿಸಲು ಸಾಧ್ಯವಿಲ್ಲ. ನೀನು ಏನೇ ಕುತಂತ್ರ ಮಾಡಿದರೂ ಕಾಂಗ್ರೆಸ್ ಅಳಿಸಲು ಸಾಧ್ಯವಿಲ್ಲ ಎಂಬುದಾಗಿ ಡಿಸಿಎಂ ಡಿಕೆಶಿ ಗುಡುಗಿದ್ದಾರೆ.
ವಿಜಯೇಂದ್ರ, ಅಶೋಕ, ಕುಮಾರಸ್ವಾಮಿ ನಿಮಗೆ ಸಿದ್ದರಾಮಯ್ಯನವರ ರಾಜೀನಾಮೆ ಬೇಕಾ? ಮಾಧ್ಯಮಗಳು ನನ್ನನ್ನು ಬಂಡೆ ಎಂದರು. ಕಲ್ಲು ಪ್ರಕೃತಿ, ಕಡಿದರೆ ಆಕೃತಿ, ಪೂಜಿಸಿದರೆ ಸಂಸ್ಕೃತಿ. ಈ ಬಂಡೆ ಸಿದ್ದರಾಮಯ್ಯನ ಜತೆ ಇದೆ. ಈ ಬಂಡೆ ಜತೆ 135 ಶಾಸಕರೂ ಇದ್ದಾರೆ. ಕೋಟ್ಯಂತರ ಜನ ಸಿದ್ದರಾಮಯ್ಯನವರ ಜತೆಗಿದ್ದಾರೆ. ಇದನ್ನು ಗಮನದಲ್ಲಿಟ್ಟುಕೊಳ್ಳಿ. ಹೀಗಾಗಿ ನಿಮ್ಮಿಂದ ಏನೂ ಮಾಡಲು ಸಾಧ್ಯವಿಲ್ಲ.
10 ತಿಂಗಳಲ್ಲ, 10 ವರ್ಷ ನಮ್ಮ ಸರ್ಕಾರ ಮುಟ್ಟಲು ಆಗುವುದಿಲ್ಲ:
2023ರಲ್ಲಿ ರಾಜ್ಯದ ಜನರು ನಮಗೆ ಶೇ. 43 ರಷ್ಟು ಮತ ನೀಡಿದ್ದಾರೆ, ಲೋಕಸಭೆಯಲ್ಲಿ ಶೇ. 45 ರಷ್ಟು ಮತ ನೀಡಿದ್ದಾರೆ. 1 ಸೀಟು ಹೊಂದಿದ್ದ ನಾವು 9 ಸೀಟು ಗೆದ್ದಿದ್ದೇವೆ. ಜನರ ತೀರ್ಪನ್ನು ನಾವು ಒಪ್ಪುತ್ತೇವೆ. ಈ ಸರ್ಕಾರವನ್ನು ಮುಂದಿನ 10 ತಿಂಗಳಲ್ಲಿ ಅಲ್ಲಾಡಿಸಬಹುದು ಎಂಬುದು ನಿಮ್ಮ ಭ್ರಮೆ. ಯಾವುದೇ ಕಾರಣಕ್ಕೂ ಇದು ಸಾಧ್ಯವಿಲ್ಲ. ಮುಂದಿನ 10 ತಿಂಗಳಲ್ಲ, ಮುಂದಿನ 10 ವರ್ಷ ಈ ಸರ್ಕಾರವನ್ನು ಮುಟ್ಟಲು ಸಾಧ್ಯವಿಲ್ಲ. ಮುಡಾ ಹಗರಣ ಮುಂದಿಟ್ಟುಕೊಂಡು ವಿರೋಧ ಪಕ್ಷಗಳು ಸಿಎಂ ರಾಜೀನಾಮೆ ಕೇಳುತ್ತರುವುದು ಅನೈತಿಕವಾದುದು.