ಬೆಂಗಳೂರು: ರಾಜಧಾನಿಯಲ್ಲಿ ಪ್ರತ್ಯೇಕವಾಗಿ ನಡೆದ ಮೂರು ರಸ್ತೆ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ. ಮೊದಲನೆಯದಾಗಿ ರಸ್ತೆ ದಾಟುವಾಗ ವೇಗವಾಗಿ ಬಂದ ಬಿಬಿಎಂಪಿ ಕಸದ ಲಾರಿ ಡಿಕ್ಕಿ ಹೊಡೆದು ವೃದ್ಧೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಂಬೂಸವಾರಿ ದಿಣ್ಣೆ ಬಸ್ ನಿಲ್ದಾಣದ ಬಳಿ ನಡೆದಿದೆ.
ಆಂಧ್ರಪ್ರದೇಶದ ಚಿತ್ತೂರು ನಿವಾಸಿ ಆದಿಲಕ್ಷ್ಮಮ್ಮ(69) ಮೃತರು ಎಂದು ತಿಳಿದುಬಂದಿದೆ. ಜಂಬೂಸವಾರಿ ದಿಣ್ಣೆ ಬಸ್ ನಿಲ್ದಾಣದ ಬಳಿ ಸೋಮವಾರ ಬೆಳಗ್ಗೆ ಸುಮಾರು 6 ಗಂಟೆಗೆ ಈ ಘಟನೆ ನಡೆದಿದೆ. ಅಪಘಾತ ಸಂಬಂಧ ಬಿಬಿಎಂಪಿ ಕಸದ ಲಾರಿ ಚಾಲಕ ಮೊಹಮ್ಮದ್ ಎಂಬಾತನ ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಕುಮಾರಸ್ವಾಮಿ ಲೇಔಟ್ ಠಾಣೆಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಬೈಕ್ ಸವಾರ ಸಾವು
ಮತ್ತೊಂದು ಪ್ರಕರಣದಲ್ಲಿ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟಿದ್ದಾರೆ. ಕೂಡ್ಲು ನಿವಾಸಿ ವೇಣುಗೋಪಾಲ್(53) ಮೃತ ದುರ್ದೈವಿ. ಸೋಮವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಬೊಮ್ಮನಹಳ್ಳಿ ಜಂಕ್ಷನ್ ಬಳಿ ಈ ಒಂದು ದುರ್ಘಟನೆ ನಡೆದಿದೆ. ಸೀರೆ ವ್ಯಾಪಾರಿಯಾಗಿರುವ ವೇಣುಗೋಪಾಲ್, ಸೋಮವಾರ ಬೆಳಗ್ಗೆ 11 ಗಂಟೆಗೆ ಬೊಮ್ಮನಹಳ್ಳಿ ಜಂಕ್ಷನ್ ಕಡೆಯಿಂದ ಮಡಿವಾಳ ಕಡೆ ಬೈಕ್‌ನಲ್ಲಿ ಬರುತ್ತಿದ್ದು, ಮೆಟ್ರೋ ಪಿಲ್ಲರ್ ನಂ 232 ರ ಬಳಿ ಹಿಂದಿನಿಂದ ಬಂದ ಟಿಪ್ಪರ್ ಲಾರಿ ಬೈಕ್‌ಗೆ ಡಿಕ್ಕಿ ಹೊಡೆದಿದೆ.
ಪರಿಣಾಮ ಕೆಳಗೆ ಬಿದ್ದ ವೇಣುಗೋಪಾಲ್ ಮೇಲೆ ಟಿಪ್ಪರ್ ಲಾರಿ ಹರಿದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಸಂಬಂಧ ಚಾಲಕ ಚೆಲುವೆಗೌಡ(೩೫) ಎಂಬಾತನನ್ನು ಬಂಧಿಸಲಾಗಿದೆ. ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಡಿವಾಳ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟೈಲರ್ ಸಾವು
ಬೈಕ್‌ನಲ್ಲಿ ಹೋಗುವಾಗ ನಿಯಂತ್ರಣ ತಪ್ಪಿ ಕೆಳಗೆ ಬಿದ್ದ ಟೈಲರ್ ತಲೆಗೆ ಪೆಟ್ಟಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತುಮಕೂರು ಮೂಲದ ವಿಶ್ವನಾಥ್(34) ಮೃತ ದುರ್ದೈವಿ ಎಂದು ತಿಳಿದುಬಂದಿದೆ.. ಕೆಲ ವರ್ಷಗಳ ಹಿಂದೆಯೇ ಬೆಂಗಳೂರಿಗೆ ಬಂದಿರುವ ವಿಶ್ವನಾಥ್, ಕುಟುಂಬ ಸಮೇತ ಸುಂಕದಕಟ್ಟೆಯಲ್ಲಿ ವಾಸವಾಗಿದ್ದರು.ವೃತ್ತಿಯಲ್ಲಿ ಟೈಲರಿಂಗ್ ಕೆಲಸ ಮಾಡಿಕೊಂಡಿದ್ದರು.
ಭಾನುವಾರ ರಾತ್ರಿ ಕೆಂಗೇರಿ ಕಡೆಯಿಂದ ಸುಂಕದಕಟ್ಟೆ ಕಡೆ ಬೈಕ್‌ನಲ್ಲಿ ಬರುವಾಗ ನೂರಡಿ ರಸ್ತೆಯ ಮಂಗನಹಳ್ಳಿ ಕ್ರಾಸ್ ಬಳಿ ಅತೀವೇಗದಿಂದ ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದ್ದು, ತಲೆ ಮತ್ತು ದೇಹದ ಇತರೆ ಭಾಗಗಳಿಗೆ ಪೆಟ್ಟಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲಿಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿ, ಬಳಿಕ ಕುಟುಂಬ ಸದಸ್ಯರಿಗೆ ಮೃತದೇಹ ಹಸ್ತಾಂತರಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಜ್ಞಾನಭಾರತಿ ಸಂಚಾರ ಠಾಣೆಯಲಿ ಪ್ರಕರಣ ದಾಖಲಾಗಿದೆ.