ಚಿಕ್ಕಬಳ್ಳಾಪುರ : ಅಂಗನವಾಡಿ ಕೇಂದ್ರದಲ್ಲಿ ವಿತರಿಸಲಾದ ಬೆಲ್ಲದ ಪೊಟ್ಟಣದಲ್ಲಿ ಸತ್ತ ಇಲಿ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಗರುಡಾಚಾರ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗರುಡಾಚಾರ್ಲಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ವಿತರಿಸಲಾದ ಬೆಲ್ಲದ ಪ್ಯಾಕೆಟ್ ನಲ್ಲಿ ಸತ್ತ ಇಲಿ ಪತ್ತೆಯಾಗಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ತನಿಖೆ ನಡೆಸುವಂತೆ ಸಂಸದ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಸಂಸದ ಸುಧಾಕರ್ ಅವರು, ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲ್ಲೂಕಿನ ಹಂಪಸಂದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗರುಡಾಚಾರಹಳ್ಳಿಯ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳಿಗೆ ವಿತರಿಸಲಾದ ಆಹಾರದಲ್ಲಿ ಸತ್ತ ಇಲಿಯ ಅವಶೇಷ ಪತ್ತೆಯಾಗಿರುವುದು ತೀವ್ರ ಆತಂಕ ಮೂಡಿಸಿದ್ದು, ಮಕ್ಕಳ ಆರೋಗ್ಯ ಮತ್ತು ಸುರಕ್ಷತೆಯ ದೃಷ್ಟಿಯಿಂದ ರಾಜ್ಯ ಸರ್ಕಾರ ಈ ಪ್ರಕರಣವನ್ನ ಅತ್ಯಂತ ಗಂಭೀರವಾಗಿ ಪರಿಗಣಿಸಬೇಕು ಎಂದು ಸೂಚಿಸಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಸ್ಥಳೀಯ ಶಾಸಕರು ಈ ಬಗ್ಗೆ ಕೂಡಲೇ ತನಿಖೆಗೆ ಆದೇಶ ಮಾಡಬೇಕು ಮತ್ತು ಅಂಗನವಾಡಿಗೆ ಕಳಪೆ ಆಹಾರ ಪೂರೈಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.