ಬೆಂಗಳೂರು: ಬೃಹತ್ ರಾಜಕೀಯ ಬೆಳವಣಿಗೆಯೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಜರುಗಿಸಲು ಅನುಮತಿ ನೀಡುವ ಕಡತಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಹಿ ಹಾಕಿದ್ದಾರೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಅಡಿಯಲ್ಲಿ ಅವರ ಪತ್ನಿಗೆ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ರಾಜ್ಯಪಾಲರ ಆದೇಶದ ಪ್ರತಿಯಲ್ಲಿ ಏನಿದೆ? ಇಲ್ಲಿದೆ ಮಾಹಿತಿ
ಗೌರವಾನ್ವಿತ ರಾಜ್ಯಪಾಲರ ನಿರ್ದೇಶನದಂತೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಅನುಮತಿ ಕೋರಿ ಸಕ್ಷಮ ಪ್ರಾಧಿಕಾರದ ನಿರ್ಧಾರದ ಪ್ರತಿಯನ್ನು ನಾನು ಇಲ್ಲಿ ಲಗತ್ತಿಸುತ್ತಿದ್ದೇನೆ. ಸಿದ್ದರಾಮಯ್ಯ ಅವರು ಭ್ರಷ್ಟಾಚಾರ ತಡೆ ಕಾಯ್ದೆ 1988ರ ಸೆಕ್ಷನ್ 17 ಮತ್ತು ಭಾರತೀಯ ನಾಗರಿಕ ಸುರಕ್ಷಾ ಸಮಿತಿ 2023ರ ಸೆಕ್ಷನ್ 218ರ ಅಡಿಯಲ್ಲಿ ಅರ್ಜಿಯಲ್ಲಿ ಉಲ್ಲೇಖಿಸಿರುವ ಅಪರಾಧಗಳ ತನಿಖೆಗಾಗಿ ಅರ್ಜಿ ಸಲ್ಲಿಸಿದ್ದರು.
ರಾಜ್ಯಪಾಲರು ಪ್ರಾಸಿಕ್ಯೂಶನ್ ಗೆ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಕಾವೇರಿ ನಿವಾಸದಲ್ಲಿ ಮಹತ್ವದ ಸಭೆ ನಡೆಸಲು ಮುಂದಾಗಿದ್ದು, ಸಭೆಯಲ್ಲಿ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಭಾಗಿಯಾಗಿದ್ದಾರೆ.
ಈ ನಡುವೆ ಸೊಮವಾರವೇ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲು ಸಿಎಂ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ ಎನ್ನಲಾಗಿದ್ದು, ಪ್ರಾಸಿಕ್ಯೂಷನ್ ನೀಡಿರುವ ಕುರಿತು ಕಾನುನು ಹೋರಾಟಕ್ಕೆ ಮುಂದಾಗಿದ್ದಾರೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ಪರ ವಕೀಲರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ.