ಬೆಂಗಳೂರು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮುಖ್ಯಮಂತ್ರಿ ಸಿದ್ಧರಾಮ್ಯ ವಿರುದ್ಧದ ಮುಡಾ ಹಗರಣ ಸಂಬಂಧ ಪ್ರಾಸಿಕ್ಯೂಷನ್ ಗೆ ಇಂದು ಅನುಮತಿ ನೀಡಿದ್ದಾರೆ. ಹೀಗೆ CM ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದಂತ ರಾಜ್ಯಪಾಲರ ವಿರುದ್ಧ ಸಿದ್ದು ಸಂಪುಟದ ಸಚಿವರು ಸಿಡಿದೆದ್ದಿದ್ದಾರೆ. ಯಾರು ಏನು ಹೇಳಿದ್ರು ಅನ್ನೋ ಬಗ್ಗೆ ಮುಂದೆ ಓದಿ.
ಇದು ರಾಜಕೀಯ ಪ್ರೇರಿತ ದೂರು : ರಾಜ್ಯಪಾಲರ ಪ್ರಾಸಿಕ್ಯೂಷನ್ ಗೆ `DCM’ ಡಿಕೆಶಿ ಗುಡುಗು
ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಜರುಗಿಸಲು ಅನುಮತಿ ನೀಡುವ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಹಿ ಹಾಕಿದ್ದಾರೆ.
ಈ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಸುದ್ದಿಗೋಷ್ಠಿ ನಡೆಸಿದ್ದು, ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ. 1.08,2024 ರಲ್ಲಿ ನನ್ನ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನು ಬಿಡುಗಡೆ ಮಾಡಿದ್ದೇವೆ ಎಂದರು.
ನಾವು ಕಾನೂನು ಚೌಕಟ್ಟಿನಲ್ಲಿ ಗಮನದಲ್ಲಿಟ್ಟುಕೊಂಡು ಚರ್ಚೆ ಮಾಡಿದ್ದೇವೆ. ಪ್ರಾಸಿಕ್ಯೂಷನ್ ರಾಜಕೀಯ ಪ್ರೇರಿತವಾಗಿದೆ. ರಾಜ್ಯಪಾಲರು ಸಂವಿಧಾನ ವಿರೋಧಿ ಪತ್ರ ಕೊಟ್ಟಿದ್ದಾರೆ. ಇದು ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ ಎಂದು ಹೇಳಿದ್ದಾರೆ.
ಶೋಕಾಸ್ ನೋಟಿಸ್ ಗೆ ಈಗಾಗಲೇ ಉತ್ತರ ನೀಡಲಾಗಿತ್ತು. ಇಂದು ನೇರವಾಗಿ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯಗೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವ ಪತ್ರ ಕಳುಹಿಸಿದ್ದಾರೆ. ಇದಕ್ಕೆ ಕಾನೂನಿನ ಮೂಲಕವೇ ಉತ್ತರ ಕೊಡುತ್ತೇವೆ. ಸರ್ಕಾರ ಇಂಥ ಹಗರಣದಲ್ಲಿ ಭಾಗಿಯಾಗಿಲ್ಲ ಎಂದು ರಾಜ್ಯಪಾಲರಿಗೆ ತಿಳಿಸಿದ್ದೇವೆ ಎಂದು ಹೇಳಿದರು.
ರಾಜ್ಯಪಾಲರ ಹುದ್ದೆಗಳ ಬಹಳ ಗೌರವ ಇದೆ. ಇಡೀ ರಾಜ್ಯ ಸರ್ಕಾರ ರಾಜ್ಯಪಾಲರ ಮಾರ್ಗದರ್ಶನದಲ್ಲಿ ನಡೆಯುತ್ತದೆ. ಪ್ರಾಸಿಕ್ಯೂಷನ್ ಗಾಗಲಿ, ಆರೋಪಗಳಿಗಾಗಿ ಮೊದಲು ತನಿಖೆಯಾಗಬೇಕು. ಬಳಿಕ ಪ್ರಾಸಿಕ್ಯೂಷನ್ ಕೊಡಬೇಕು ಎಂದರು.
ಯಡಿಯೂರಪ್ಪ, ಜನಾರ್ದನ ರೆಡ್ಡಿ, ಮುರುಗೇಶ್ ನಿರಾಣಿ ಶಶಿಕಲಾ ಜೊಲ್ಲೆ ಬಿಜೆಪಿಯ ನಾಯಕರು ವಿರುದ್ದ ಪ್ರಾಸಿಕ್ಯೂಷನ್ ಗೆ ಅನುಮತಿ ಕೇಳಲಾಗಿತ್ತು. ಆದರೆ ರಾಜ್ಯಪಾಲರು ಇದುವರೆಗೂ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ಹೇಳಿದ್ದಾರೆ.
ಸಿಎಂ ಸಿದ್ದರಾಮಯ್ಯ ವಿರುದ್ಧ ಇದೀಗ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ಕೊಟ್ಟಿದ್ದಾರೆ. ಹೀಗಾಗಿ ನಾವು ಕಾನೂನು ಹೋರಾಟಕ್ಕೆ ಮುಂದಾಗುತ್ತೇವೆ. ಇಡೀ ದೇಶದಲ್ಲೇ ಹಿಂದುಳಿದ ನಾಯಕರಾದ ಸಿದ್ದರಾಮಯ್ಯ ಸಿಎಂ ಆಗಿರುವುದಕ್ಕೆ ಕೇಂದ್ರ ಬಿಜೆಪಿ ಪಿತೂರಿ ನಡೆಸುತ್ತಿದೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ರಾಜ್ಯ ಸರ್ಕಾರವನ್ನು ದುರ್ಬಲಗೊಳಿಸಲು ಕೇಂದ್ರ ಸರ್ಕಾರದ ಸಂಘಟಿತ ಯತ್ನ: ಸಚಿವ ಪ್ರಿಯಾಂಕ್ ಖರ್ಗೆ ಕಿಡಿ
ಪ್ರಜಾಸತ್ತಾತ್ಮಕವಾಗಿ ಚುನಾಯಿತವಾಗಿರುವ ಸರ್ಕಾರವನ್ನು ದುರ್ಬಲಗೊಳಿಸಲು ಬಿಜೆಪಿ ರಾಜಭವನವನ್ನು ಸಾಧನವಾಗಿ ದುರುಪಯೋಗಪಡಿಸಿಕೊಳ್ಳತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ತಮ್ಮ ಎಕ್ಸ್ ಖಾತೆಯಲ್ಲಿ ರಾಜ್ಯಪಾಲರ ಕ್ರಮವನ್ನು ಟೀಕಿಸಿರುವ ಸಚಿವರು ರಾಜ್ಯದ ಸಾಂವಿಧಾನಿಕ ಮುಖ್ಯಸ್ಥರು ತಮ್ಮ ರಾಜಕೀಯ ಯಜಮಾನರನ್ನು ಸಮಾಧಾನಪಡಿಸಲು ಸಾಂವಿಧಾನಿಕ ಬಿಕ್ಕಟ್ಟನ್ನು ಹುಟ್ಟುಹಾಕುತ್ತಿದ್ದಾರೆಎಂದಿದ್ದಾರೆ.
ಕೇಂದ್ರ ಸರ್ಕಾರ ತನ್ನ ಎಷ್ಟೇ ಶಕ್ತಿಯನ್ನು ಪ್ರಯೋಗಿಸಿದರೂ, ನಾವು ನಮ್ಮ ಪರವಾಗಿ ಸಂವಿಧಾನದೊಂದಿಗೆ ದೃಢವಾಗಿ ನಿಲ್ಲುತ್ತೇವೆ ಎಂದೂ ಪ್ರಿಯಾಂಕ್ ಖರ್ಗೆ ಎಕ್ಸ್ ಖಾತೆಯಲ್ಲಿ ಹೇಳಿದ್ದಾರೆ.
‘ಬಿಜೆಪಿ ಷಡ್ಯಂತ್ರ’ಕ್ಕೆ ಹೆದರುವ ಮಾತೇ ಇಲ್ಲ: ಸಚಿವ ಆರ್.ಬಿ ತಿಮ್ಮಾಪೂರ ಗುಡುಗು
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದು ರಾಜಕೀಯದ ದುರುದ್ದೇಶ ಎಂಬುದು ಸ್ಪಷ್ಟವಾಗಿದೆ ಎಂಬುದಾಗಿ ಅಬಕಾರಿ ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ ತಿಮ್ಮಾಪೂರ ವಾಗ್ಧಾಳಿ ನಡೆಸಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿರುವಂತ ಅವರು, ರಾಜ್ಯ ಮತ್ತು ಕೇಂದ್ರ ಬಿಜೆಪಿ ನಾಯಕರ ಒತ್ತಡದಿಂದ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ಬಿಜೆಪಿ-ಜೆಡಿಎಸ್ ನಾಯಕರ ಹಲವು ಪ್ರಕರಣಗಳಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ಸಲ್ಲಿಸಿದ್ದ ಕಡತಗಳು ರಾಜಭವನದಲ್ಲೇ ಧೂಳು ತಿನ್ನುತ್ತಿವೆ ಎಂದು ಕಿಡಿಕಾರಿದ್ದಾರೆ.
ಸಿದ್ದರಾಮಯ್ಯ ಅವರ ವಿರುದ್ಧ ರಾಜಕೀಯ ಕಾರಣಕ್ಕಾಗಿ ಷಡ್ಯಂತ್ರದ ಭಾಗವಾಗಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದು, ಇದನ್ನು ಮುಖ್ಯಮಂತ್ರಿಗಳು ಹಾಗೂ ರಾಜ್ಯ ಸರ್ಕಾರ ಸಮರ್ಥವಾಗಿ ಎದುರಿಸುತ್ತದೆ. ಕಾಂಗ್ರೆಸ್‌ನ ಎಲ್ಲಾ ಶಾಸಕರು, ಸಚಿವರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗಿದ್ದೇವೆ. ಬಿಜೆಪಿ ಷಡ್ಯಂತ್ರಕ್ಕೆ ಹೆದರುವ ಮಾತೇ ಇಲ್ಲ ಎಂದು ಹೇಳಿದ್ದಾರೆ.
ರಾಜ್ಯಪಾಲರ ವಜಾಕ್ಕೆ ಈಶ್ವರ ಖಂಡ್ರೆ ಒತ್ತಾಯ
ಸಾಂವಿಧಾನಿಕ ಹುದ್ದೆಯಲ್ಲಿರುವ ರಾಜ್ಯಪಾಲರು ರಾಜಕೀಯ ಪಕ್ಷದ ಏಜೆಂಟರಂತೆ ವರ್ತಿಸುತ್ತಿರುವುದು ಅಕ್ಷಮ್ಯ. ಇವರನ್ನು ರಾಷ್ಟ್ರಪತಿಗಳು ತಕ್ಷಣವೇ ವಜಾ ಮಾಡಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಒತ್ತಾಯಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿ ರಾಜಕೀಯ ಪ್ರೇರಿತವಾಗಿ ಮಾಡಿರುವ ಆರೋಪವನ್ನೇ ಆಧಾರವಾಗಿಟ್ಟುಕೊಂಡು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ಸರಿಯಲ್ಲ. ರಾಜ್ಯಪಾಲರು ಇಷ್ಟು ಕೀಳುಮಟ್ಟಕ್ಕೆ ಇಳಿಯುತ್ತಾರೆ ಎಂದು ನಾವು ನಿರೀಕ್ಷಿಸಿರಲಿಲ್ಲ ಎಂದು ತಿಳಿಸಿದ್ದಾರೆ.
ರಾಜಕೀಯ ದ್ವೇಷ ಮತ್ತು ಒತ್ತಡಕ್ಕೆ ಮಣಿದು ರಾಜ್ಯಪಾಲರು ಅನುಮತಿ ನೀಡಿರುವುದು ಸರಿಯಾದ ಕ್ರಮವಲ್ಲ ಇದು ಸರ್ಕಾರವನ್ನು ಅಸ್ಥಿರಗೊಳಿಸುವ ಹುನ್ನಾರ ಎಂದು ಈಶ್ವರ ಖಂಡ್ರೆ ಕಿಡಿ ಕಾರಿದ್ದಾರೆ. ಕಾಂಗ್ರೆಸ್ ಪಕ್ಷ ಇದರ ವಿರುದ್ಧ ರಾಜಕೀಯ ಹೋರಾಟ ಮಾಡುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.
ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ನಂಬಿಕೆ ಇಲ್ಲದ ಬಿಜೆಪಿ, ಚುನಾಯಿತ ಸರ್ಕಾರಗಳನ್ನು ಬೀಳಿಸುವ ಕೆಲಸ ಮಾಡುತ್ತಿದೆ. ಕರ್ನಾಟಕದಲ್ಲಿ ಎರಡು ಬಾರಿ ವಾಮ ಮಾರ್ಗದಿಂದ ಆಡಳಿತಕ್ಕೆ ಬಂದ ಬಿಜೆಪಿ ಮತ್ತೆ ತನ್ನ ಹಳೆ ಚಾಳಿ ಮುಂದುವರಿಸಿದೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕ ಎಂದು ಖಂಡ್ರೆ ಹೇಳಿದ್ದಾರೆ.
ಜನಪರವಾದ ಆಡಳಿತ ನೀಡುತ್ತಾ, ಸಾಮಾಜಿಕ ನ್ಯಾಯಕ್ಕೆ ಶ್ರಮಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜನಪ್ರಿಯತೆಯನ್ನು ಕುಗ್ಗಿಸಲು ಮತ್ತು ಕಾಂಗ್ರೆಸ್ ಸರ್ಕಾರವನ್ನು ಉರುಳಿಸಲು ಬಿಜೆಪಿ ಅದರಲ್ಲೂ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ರಾಜ್ಯಪಾಲರ ಮೂಲಕ ಷಡ್ಯಂತ್ರ ರೂಪಿಸಿದ್ದಾರೆ. ಇತ್ತೀಚೆಗೆ ದೆಹಲಿಗೆ ರಾಜ್ಯಪಾಲರನ್ನು ಕರೆಸಿಕೊಂಡು ಅವರಿಗೆ ಸ್ಪಷ್ಟ ಸೂಚನೆ ನೀಡಿ ಕಳಿಸಿದ್ದಾರೆ ಎಂದೂ ಆರೋಪಿಸಿದ್ದಾರೆ.
ರಾಜ್ಯದ ಜನತೆ ಇದನ್ನು ಕ್ಷಮಿಸುವುದಿಲ್ಲ ಕಾಂಗ್ರೆಸ್ ಪಕ್ಷ ರಾಜ್ಯಪಾಲರ ಪಕ್ಷಪಾತ ಧೋರಣೆಯ ವಿರುದ್ಧ ರಾಜ್ಯಾದ್ಯಂತ ಹೋರಾಟ ಮಾಡಲಿದೆ. ಜನರ ಬೆಂಬಲ ಸರ್ಕಾರದ ಪರವಾಗಿದೆ ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.
ರಾಜ್ಯಪಾಲರ ಮುಂದೆ ಹಿಂದಿನ ಸರ್ಕಾರದ ಹಲವರ ವಿರುದ್ಧದ ಆರೋಪಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಕೋರಿ ಸಲ್ಲಿಸಿರುವ ಅರ್ಜಿಗಳು ಬಾಕಿ ಇವೆ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಚಾರದಲ್ಲಿ ತರಾತುರಿಯಿಂದ ಕ್ರಮ ಕೈಗೊಳ್ಳಲಾಗಿದೆ ಇದು ರಾಜಕೀಯ ಪ್ರೇರಿತ ಅಲ್ಲದೆ ಮತ್ತೇನು ಎಂದು ಪ್ರಶ್ನಿಸಿದ್ದಾರೆ.
ರಾಜ್ಯಪಾಲರು ಅನುಸರಿಸಿರುವ ಪಕ್ಷಪಾತ ಧೋರಣೆಗೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು, ಇಲ್ಲವೇ ಇವರನ್ನು ರಾಷ್ಟ್ರಪತಿಗಳು ವಜಾ ಮಾಡಬೇಕು ಎಂದು ಖಂಡ್ರೆ ಒತ್ತಾಯಿಸಿದ್ದಾರೆ.
BREAKING : ಪ್ರಾಸಿಕ್ಯೂಷನ್ ಗೆ ಅನುಮತಿ : `CM ಸಿದ್ದರಾಮಯ್ಯ’ ಬೆನ್ನಿಗೆ ನಿಂತ ಕುರುಬ ಸಮುದಾಯ