ಬೆಂಗಳೂರು : ಮುಡಾ ಹಗರಣ ಸಂಬಂಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ತಮ್ಮ ಬೆಂಬಲಕ್ಕೆ ನಿಂತಿರುವುದಕ್ಕೆ ಸಿಎಂ ಸಿದ್ದರಾಮಯ್ಯ ಧನ್ಯವಾದ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ನಮ್ಮ ಹೈಕಮಾಂಡ್ ನ ನಾಯಕರುಗಳಾದ ಮಲ್ಲಿಕಾರ್ಜುನ ಖರ್ಗೆಯವರಿಗೆ, ರಾಹುಲ್ ಗಾಂಧಿಯವರಿಗೆ, ಕೆ.ಸಿ. ವೇಣುಗೋಪಾಲ್ ಮತ್ತು ರಣದೀಪ್ ಸಿಂಗ್ ಸುರ್ಜೆವಾಲ ಅವರಿಗೆ ನನ್ನ ಧನ್ಯವಾದಗಳು. ಕರ್ನಾಟಕದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳು, ರಾಜ್ಯಪಾಲರು ನನ್ನ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಪಕ್ಷಪಾತ ಧೋರಣೆಯ ಬಗ್ಗೆ ಇಂದಿನ ಸಭೆಯಲ್ಲಿ ವಿವರಿಸಿದ್ದೇವೆ ಎಂದು ಹೇಳಿದ್ದಾರೆ.
ರಾಜ್ಯಪಾಲರ ನಿರ್ಣಯದ ವಿರುದ್ಧ ನಾನು ಈಗಾಗಲೇ ನ್ಯಾಯಾಲಯದ ಮೊರೆ ಹೋಗಿದ್ದೇನೆ, ನನಗೆ ನ್ಯಾಯ ವ್ಯವಸ್ಥೆಯಲ್ಲಿ, ಈ ನೆಲದ ಕಾನೂನಿನಲ್ಲಿ ನಂಬಿಕೆಯಿದೆ. ರಾಜ್ಯಪಾಲರು ತೆಗೆದುಕೊಂಡಿರುವ ನಿರ್ಣಯ ಅಸಾಂವಿಧಾನಿಕ ಮತ್ತು ಕಾನೂನು ಬಾಹಿರವಾಗಿದ್ದು, ನ್ಯಾಯಾಲಯದಲ್ಲಿ ನ್ಯಾಯ ಸಿಗುವ ಭರವಸೆಯಿದೆ. ನನ್ನ ಬೆಂಬಲಕ್ಕೆ ನಿಂತಿರುವ ಪಕ್ಷದ ಹೈಕಮಾಂಡ್ ಗೆ ಮತ್ತೊಮ್ಮೆ ಧನ್ಯವಾದಗಳು ಎಂದು ತಿಳಿಸಿದ್ದಾರೆ.