ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಂತ ಕೋಟ್ಯಂತರ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಸಿದಂತೆ ತನಿಖೆ ನಡೆಸಿದಂತ ಜಾರಿ ನಿರ್ದೇಶನಲಯದ ಅಧಿಕಾರಿಗಳು ಇಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ 82 ನೇ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದೆ. ಹಗರಣದಲ್ಲಿ ಮಾಜಿ ಸಚಿವ ಬಿ ನಾಗೇಂದ್ರ ಅವರು ಭಾಗಿಯಾಗಿದ್ದಾರೆ ಎಂದು ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.
ಹೌದು ಮಾಜಿ ಸಚಿವ ಬಿ. ನಾಗೇಂದ್ರ ಅವರ ಅಣತಿಯಂತೆ ಸಂಪೂರ್ಣ ಹಣದ ವಹಿವಾಟು ನಡೆದಿದೆ. 21 ಕೋಟಿ ರೂ. ಹಣವನ್ನು ಲೋಕಸಭಾ ಚುನಾವಣೆಗೆ ಬಳಸಿದ್ದಾರೆ. ಬೆಂಗಳೂರು ಮತ್ತು ಬಳ್ಳಾರಿಯಲ್ಲಿ ಮನಿಟ್ರಯಲ್ ನಡೆದಿದೆ ಎಂದು ತನಿಖೆ ವೇಳೆ ಜಾರಿ ನಿರ್ದೇಶನಾಲಯ ಅಧಿಕಾರಿಗಳಿಗೆ ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬಿ ನಾಗೇಂದ್ರ ಸೇರಿದಂತೆ ಐವರು ಆರೋಪಿ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.
ಹಗರಣದ ಮಾಸ್ಟರ್ ಮೈಂಡ್ ಬಿ. ನಾಗೇಂದ್ರ ಎಂದು ಉಲ್ಲೇಖಿಸಲಾಗಿದೆ. ಬಿ. ನಾಗೇಂದ್ರ ಅವರು ಹಗರಣದ ಆರೋಪಿ, ಹೈದರಾಬಾದ್ನ ಫಸ್ಟ್ ಫೈನಾನ್ಸ್ ಕ್ರೆಡಿಟ್ ಕೋ ಆಪರೇಟಿವ್ ಬ್ಯಾಂಕ್ನ ಎಂಡಿ ಸತ್ಯನಾರಾಯಣವರ್ಮಾ ಜೊತೆ ನಿಕಟ ಸಂಪರ್ಕ ಹೊಂದಿದ್ದು, ಹಣದ ಬಳಕೆಯ ಬಗ್ಗೆ ಬರೆದಿದ್ದಾರೆ.ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದೋಷಾರೋಪ ಪಟ್ಟಿಯಲ್ಲಿ ಹಗರಣ ಹೇಗೆ ನಡೆಯಿತೆಂದು ಎಳೆಎಳೆಯಾಗಿ ಬರೆದಿದ್ದಾರೆ.
ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಣ ಅವ್ಯವಹಾರ ಪ್ರಕರಣದಲ್ಲಿ ಇಡಿ ಅಧಿಕಾರಿಗಳಿಂದ ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ಬಂಧಿಸಲಾಗಿತ್ತು. ಆ ಬಳಿಕ ಅವರನ್ನು ಕೋರ್ಟ್ ಗೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.