ಬೆಂಗಳೂರು : ಭದ್ರಾ ಮೇಲ್ದಂಡೆ ಯೋಜನೆಗೆ ಈ ಹಿಂದೆ ಕೇಂದ್ರ ಸರ್ಕಾರ ಬಜೆಟ್ ನಲ್ಲಿ ಅನುದಾನ ನೀಡುವುದಾಗಿ ಘೋಷಿಸಿತ್ತು. ಆದರೆ ಇದೀಗ, ಕೇಂದ್ರ ಸರ್ಕಾರ ಮತ್ತಷ್ಟು ವಿವರ ಕೇಳಿರುವುದರಿಂದ ಕಾನೂನು ಸಚಿವ ಎಚ್ ಕೆ ಪಾಟೀಲ್ ಒಂದು ವೇಳೆ ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ಹಣ ನೀಡದೆ ಹೋದರೆ ಕಾನೂನು ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
ಇಂದು ಬೆಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಭದ್ರಾ ಮೇಲ್ದಂಡೆ ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ರಾಜ್ಯಕ್ಕೆ ಅನ್ಯಾಯ ಮಾಡಿದ್ದು, ಈಗಾಗಲೇ ಬಜೆಟ್‌ನಲ್ಲಿ ಘೋಷಿಸಿದಂತೆ 5300 ಕೋಟಿ ರು. ಅನುದಾನವನ್ನು ನೀಡದಿದ್ದರೆ ಕಾನೂನು ಹೋರಾಟ ನಡೆಸಲು ಚಿಂತನೆ ಮಾಡಬೇಕಾಗುತ್ತದೆ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ್ ಎಚ್ಚರಿಕೆ ನೀಡಿದ್ದಾರೆ.
ಇತ್ತೀಚಿಗೆ ನಡೆದಂತ ಕೇಂದ್ರ ಬಜೆಟ್ ನಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು 5300 ಕೋಟಿ ರು. ಅನುದಾನ ಘೋಷಣೆ ಮಾಡಿದ್ದರು. ಆದರೆ, ಇತ್ತೀಚೆಗೆ ಕೇಂದ್ರ ಜಲಶಕ್ತಿ ಸಚಿವಾಲಯದ ಕಾರ್ಯದರ್ಶಿ ದೇಬಶ್ರೀ ಮುಖರ್ಜಿ ಅವರು ರಾಜ್ಯಕ್ಕೆ ಪತ್ರ ಬರೆದು ಯೋಜನೆಯ ಭೌಗೋಳಿಕ, ಯೋಜನೆಗಾಗಿ ರಾಜ್ಯ ಸರ್ಕಾರ ಬಳಕೆ ಮಾಡಿರುವ ಅನುದಾನ ಮತ್ತು ಕೇಂದ್ರದ ನಿಧಿಯಲ್ಲಿರುವ ಅನುದಾನಕ್ಕನುಗುಣವಾಗಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
ಕೇಂದ್ರ ಸರ್ಕಾರವು ತನ್ನ ಬಜೆಟ್‌ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರು. ನೀಡುವುದಾಗಿ ಅಶ್ವಾಸನೆ ನೀಡಿತ್ತು. ಆದರೆ, ಸೆ.5 ರಂದು ರಾಜ್ಯಕ್ಕೆ ಬರೆದಿರುವ ಪತ್ರದಲ್ಲಿ ಅನುದಾನ ನೀಡುವ ಕುರಿತು ಮೀನಮೀಷ ಎಣಿಸುವ ರೀತಿಯಲ್ಲಿ ಉಲ್ಲೇಖಿಸಲಾಗಿದೆ.
ಒಂದು ವೇಳೆ ಯೋಜನೆಗೆ ಹಣ ನೀಡಲು ಹಿಂದೇಟು ಹಾಕಿದರೆ, ರಾಜಕೀಯ ಒತ್ತಡ ಹಾಕುವುದು ಅನಿವಾರ್ಯವಾಗುತ್ತದೆ. ಇಲ್ಲದಿದ್ದರೆ, ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯ ಪಡೆಯಲು ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎಂದು ತಿಳಿಸದರು.