ಉತ್ತರಕನ್ನಡ : ಇತ್ತೀಚ್ಚಿಗೆ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ, ಕಿರುಕುಳ ಹಾಗೂ ಅತ್ಯಾಚಾರ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇವೆ. ಇದೀಗ ಉತ್ತರ ಕನ್ನಡ ಜಿಲ್ಲೆಯಲ್ಲಿ ಹಾಸ್ಟೆಲ್ ವಾರ್ಡನ್ ನಿಂದ ಸ್ವಚ್ಛತಾ ಸಿಬ್ಬಂದಿ ಮೇಲೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ.
ಹೌದು ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕೊಜಳ್ಳಿ ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ್ ವಸತಿ ನಿಲಯದ ವಾರ್ಡನ್ನಿಂದ ಸ್ವಚ್ಚತಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ನಡೆದಿದ್ದು, ತನ್ನ ಬಗ್ಗೆ ಬಾಯಿ ಬಿಟ್ಟರೆ ಕೊಲೆ ಮಾಡುವುದಾಗಿ ವಾರ್ಡನ್ ಶಂಕರ ಪೊಳ ಎಂಬಾತ ಬೆದರಿಕೆವೊಡ್ಡಿದ್ದಾನೆ.
ಲೈಂಗಿಕ ಕಿರುಕುಳದ ಬಗ್ಗೆ ಸಂತ್ರಸ್ತೆ ಮಹಿಳೆ ಇಲಾಖೆ ಅಧಿಕಾರಿಗಳಿಗೆ ದೂರು ನೀಡಿದರು ಸಹ ಅಧಿಕಾರಿಗಳು ಯಾವುದೇ ರೀತಿಯಾದಂತಹ ಕ್ರಮ ಕೈಗೊಂಡಿಲ್ಲ. ಈ ಹಿನ್ನಲೆ ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ದೂರಿನಲ್ಲಿ ನನಗೆ ಸಹಕರಿಸದಿದ್ದರೆ ನಿನ್ನನ್ನು ಕೆಲಸದಿಂದ ತೆಗೆಯುವೆ ಹಾಗೂ ವಿಷಯವನ್ನು ಬೇರೊಬ್ಬರಿಗೆ ತಿಳಿಸಿದರೆ ಕೊಲೆ ಮಾಡುವುದಾಗಿಯೂ ಬೆದರಿಕೆ ಹಾಕಿದ್ದ ಕುರಿತು ಉಲ್ಲೇಖಿಸಲಾಗಿದೆ.
ಸಂತ್ರಸ್ಥ ಮಹಿಳೆ ಕೂಜಳ್ಳಿಯ ವಸತಿ ಶಾಲೆಯಲ್ಲಿ ಸ್ವಚ್ಛತಾ ಸಿಬ್ಬಂದಿಯಾಗಿ 7 ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದಾರೆ. ಇದೀಗ ಕಳೆದ ಒಂದು ವರ್ಷದಿಂದ ವಾರ್ಡನ್ ಮೈ-ಕೈ ಮುಟ್ಟಿ ದೈಹಿಕವಾಗಿ ಅನುಕಂಪ ರಹಿತವಾಗಿ ನಡೆದುಕೊಂಡಿದ್ದಾರೆಂಬ ಆರೋಪ ಕೇಳಿಬಂದಿದೆ. ಘಟನೆ ಬಗ್ಗೆ ಸಮಾಜಕಲ್ಯಾಣ ಇಲಾಖೆ ಉಪನಿರ್ದೇಶಕಿಗೆ ಹಾಗೂ ಮಹಿಳಾ ಸಾಂತ್ವನ ಕೇಂದ್ರಕ್ಕೂ ದೂರು ನೀಡಲಾಗಿತ್ತು. ಆದರೆ ಯಾವುದೇ ಪ್ರಯೋಜನವಾಗಿಲ್ಲ. ಇದೀಗ ನೊಂದ ಮಹಿಳೆ ನಿಲಯಪಾಲಕ ಶಂಕರ ಎಸ್.ಪೊಳ್ ವಿರುದ್ಧ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.