ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಹೈಕೋರ್ಟ್ ಬಿಗ್ ಶಾಕ್ ನೀಡಿದೆ. ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದ ಆದೇಶವನ್ನು ಎತ್ತಿ ಹಿಡಿದಿದೆ. ಇದೀಗ ಈ ಒಂದು ವಿಚಾರಕ್ಕೆ ಸಂಬಂಧಪಟ್ಟಂತೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅಚ್ಚರಿಯ ಹೇಳಿಕೆ ನೀಡಿದ್ದು ನಾನು ಸಿಎಂ ಸಿದ್ದರಾಮಯ್ಯ ಅವರಿಗೆ ರಾಜೀನಾಮೆ ನೀಡಬೇಕು ಎಂದು ಒತ್ತಾಯ ಮಾಡಿಲ್ಲ ಎಂದು ತಿಳಿಸಿದರು.
ಇಂದು ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಡಾ ಸೈಟು ಹಂಚಿಕೆ ಹಗರಣ ಸಂಬಂಧ ನಾನು ಪಾದಯಾತ್ರೆಯಲ್ಲಿ ಭಾಗಿಯಾಗಿದ್ದು ನಿಜ. ಹಾಗೆಂದು ಯಾರ ರಾಜೀನಾಮೆಗೂ ನಾನು ಆಗ್ರಹಿಸಿಲ್ಲ. ಸಿಎಂ ಸಿದ್ದರಾಮಯ್ಯ ರಾಜೀನಾಮೆಗೂ ಒತ್ತಾಯಿಸಿಲ್ಲ ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಅಂದು ಕೂಡ ನಾನು ಸಿದ್ದರಾಮಯ್ಯ ರಾಜೀನಾಮೆ ಕೇಳಿಲ್ಲ. ಈಗಲೂ ಕೇಳುವುದಿಲ್ಲ. ದೇಶದ ಕಾನೂನು ಎಲ್ಲರಿಗೂ ರಕ್ಷಣೆ ಕೊಡುತ್ತದೆ. ಹಾಗೆಂದು ಕಾನೂನು ಬಾಹಿರ ಚಟುವಟಿಕೆ ಮಾಡಿದ್ದರೆ ನ್ಯಾಯಾಲಯ ಹಾಗೂ ಕಾನೂನು ಆ ಬಗ್ಗೆ ನಿರ್ಧಾರ ಕೈಗೊಳ್ಳುತ್ತವೆ. ತಪ್ಪು ಮಾಡಿದರೆ ನ್ಯಾಯಾಲಯಗಳು ಏನು ತೀರ್ಮಾನ ಮಾಡಬೇಕೋ ಅದನ್ನು ಮಾಡುತ್ತವೆ.ನನ್ನಿಂದ ಏನೇ ತಪ್ಪು ಆಗಿರದಿದ್ದರೂ ಕಾನೂನನ್ನು ಉಲ್ಲಂಘನೆ ಮಾಡಿ ನನ್ನ ವಿರುದ್ಧ ಏನೇನೋ ಆರೋಪಗಳನ್ನು ಮಾಡಿ ಸಿಲುಕಿಸಲು ಯತ್ನಿಸುತ್ತಿದ್ದಾರೆ.