ಬೆಂಗಳೂರು: ಹಿರಿಯ ನಾಗರಿಕರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಹಿರಿಯ ನಾಗರಿಕರಿಗೆ ಆರೋಗ್ಯ ವಿಮೆ ಯೋಜನೆ ಜಾರಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಹಿರಿಯರು ಸಮಾಜಕ್ಕೆ ಮಾರ್ಗದರ್ಶಕರು. ಅವರಿಗೆ ಗೌರವ ಕೊಡುವ ಉದ್ದೇಶದಿಂದಲೇ ರಾಜ್ಯದಲ್ಲಿ 50.69 ಲಕ್ಷ ಮಂದಿಗೆ ಮಾಸಾಶನ ನೀಡಲಾಗುತ್ತಿದೆ. ಸದ್ಯ ರಾಜ್ಯದಲ್ಲಿ 63 ವೃದ್ಧಾಶ್ರಮಗಳನ್ನು ತೆರೆಯಲಾಗಿದ್ದು, 1,575 ಹಿರಿಯ ನಾಗರಿಕರು ಆಶ್ರಯ ಪಡೆದಿದ್ದಾರೆ. ಇನ್ನೂ 19 ವೃದ್ಧಾಶ್ರಮಗಳನ್ನು ತೆರೆಯುವ ಪ್ರಕ್ರಿಯೆ ಜಾರಿಯಲ್ಲಿದೆ. ಹಿರಿಯರಿಗಾಗಿ ಆರೋಗ್ಯ ವಿಮೆ ಯೋಜನೆ ಜಾರಿಗೆ ಕ್ರಮ ಕೈಗೊಳ್ಳಲಾಗುವುದು ತಿಳಿಸಿದ್ದಾರೆ.