ಮುಂಬೈ : ಹಿರಿಯ ಕೈಗಾರಿಕೋದ್ಯಮಿ ರತನ್ ಟಾಟಾ ಅವರು ಬುಧವಾರ ರಾತ್ರಿ 11.30 ರ ಸುಮಾರಿಗೆ ತಮ್ಮ 87 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ.
ಈ ಕುರಿತು ಟಾಟಾ ಸಮೂಹದ ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಎನ್ ಚಂದ್ರಶೇಖರನ್ ಮಾಹಿತಿ ನೀಡಿದ್ದು, ದೇಶದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿ-ಪದ್ಮ ವಿಭೂಷಣ ಪುರಸ್ಕೃತರಾದ ಟಾಟಾ ಅವರ ಮರಣವನ್ನು ದೃಢೀಕರಿಸಿ, ಈ ಅವರು ಹೇಳಿಕೆ ನೀಡಿದ್ದಾರೆ. ಅವರು, ‘ನಾವು ರತನ್ ನೇವಲ್ ಟಾಟಾ ಅವರಿಗೆ ತೀವ್ರ ದುಃಖದಿಂದ ವಿದಾಯ ಹೇಳುತ್ತಿದ್ದೇವೆ. ಅವರದು ನಿಜಕ್ಕೂ ಅಸಾಧಾರಣ ವ್ಯಕ್ತಿತ್ವ. ಟಾಟಾ ಅವರ ಮರಣದ ನಂತರ, ಮಹಾರಾಷ್ಟ್ರ ಸರ್ಕಾರವು ಅವರ ಅಂತ್ಯಕ್ರಿಯೆಯನ್ನು ಸಂಪೂರ್ಣ ಸರ್ಕಾರಿ ಗೌರವಗಳೊಂದಿಗೆ ನಡೆಸಲಿದೆ ಎಂದು ತಿಳಿಸಿದ್ದಾರೆ.
ಇನ್ನು ರತನ್ ಟಾಟಾ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿದ್ದಾರೆ. ದೇಶದ ಹೆಮ್ಮೆಯ ಉದ್ಯಮಿ, ಟಾಟಾ ಸಮೂಹದ ಮುಖ್ಯಸ್ಥರಾದ ರತನ್ ಟಾಟಾ ಅವರ ನಿಧನದ ಸುದ್ದಿ ದುಃಖವುಂಟುಮಾಡಿದೆ. ಟಾಟಾ ಸಂಸ್ಥೆಯ ಮೂಲಕ ಲಕ್ಷಾಂತರ ಜನರಿಗೆ ಉದ್ಯೋಗ ನೀಡಿದ್ದು ಮಾತ್ರವಲ್ಲ, ಭಾರತದ ಉದ್ಯಮ ವಲಯವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೊಸ ಎತ್ತರಕ್ಕೆ ಕೊಂಡೊಯ್ದ ದೂರದೃಷ್ಟಿಯ ವ್ಯಕ್ತಿ. ರತನ್ ಟಾಟಾ ಅವರು ತಮ್ಮ ಬದುಕು ಮತ್ತು ಸಾಧನೆಗಳ ಮೂಲಕ ಅಜರಾಮರ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.