ಬೆಂಗಳೂರು: ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ 2023-24ನೇ ಸಾಲಿನ ವಿದ್ಯಾರ್ಥಿ ವೇತನವನ್ನು ತಾಂತ್ರಿಕ ಕಾರಣ ನೀಡಿ ಪಾವತಿ ಮಾಡಿಲ್ಲ. ಇದರಿಂದ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಸಮಸ್ಯೆ ಉಂಟಾಗಿದೆ. ಕೂಡಲೇ ರಾಜ್ಯದ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ಬಿಡುಗಡೆ ಮಾಡುವಂತೆ ಸಿಎಂ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದು ಮಾಜಿ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷರಾದಂತ ರಮೇಶ್ ಬಾಬು ಮನವಿ ಮಾಡಿದ್ದಾರೆ.
ಇಂದು ಪತ್ರ ಬರೆದಿರುವಂತ ಅವರು, ಕರ್ನಾಟಕ ರಾಜ್ಯ ಸರ್ಕಾರವು ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ ಮುಖಾಂತರ ಪ್ರತಿ ವರ್ಷ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡುತ್ತಿದೆ. ಕಂದಾಯ ಇಲಾಖೆಯ ಅಡಿಯಲ್ಲಿ ಬರುವ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿಯನ್ನು ಕರೆಯಲಾಗುತ್ತದೆ. 2023-24ನೇ ಸಾಲಿನಲ್ಲಿ ವೃತ್ತಿಪರ ಕೋರ್ಸ್ ಗಳಾದ ಇಂಜಿನಿಯರಿಂಗ್ ಮತ್ತು ವೈದ್ಯಕೀಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನದ ಪೋರ್ಟಲ್ ಮುಖಾಂತರ ಅರ್ಜಿಗಳನ್ನು ಕರೆಯಲಾಗಿತ್ತು. ನಿಯಮಾನುಸಾರ ಆನ್ಲೈನ್ ಮುಖಾಂತರ ಜನವರಿ/ಫೆಬ್ರವರಿ 2023ರಲ್ಲಿ ವಿದ್ಯಾರ್ಥಿಗಳು ವಿದ್ಯಾರ್ಥಿವೇತನ ಬಯಸಿ ಅರ್ಜಿಗಳನ್ನು ಸಲ್ಲಿಸಿರುತ್ತಾರೆ ಎಂದು ಹೇಳಿದ್ದಾರೆ.
ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಅಧಿಕಾರಿಗಳು ಮತ್ತು ರಾಜ್ಯ ಸರ್ಕಾರದ ಆರ್ಥಿಕ ಇಲಾಖೆಯ ಅಧಿಕಾರಿಗಳು ವಿದ್ಯಾರ್ಥಿಗಳ ಖಾತೆಗೆ ನೇರವಾಗಿ ವಿದ್ಯಾರ್ಥಿವೇತನದ ಹಣವನ್ನು ಶೈಕ್ಷಣಿಕ ವರ್ಷದ ಪ್ರಾರಂಭದಲ್ಲಿ ಪಾವತಿ ಮಾಡಬೇಕಾಗಿತ್ತು. ಖಜಾನೆಯ ಕೆ-2 ನಿರ್ವಹಣೆಯ ತಾಂತ್ರಿಕ ಕಾರಣಗಳನ್ನು ನೀಡಿ ವಿದ್ಯಾರ್ಥಿವೇತನವನ್ನು ಪಾವತಿ ಮಾಡಿರಲಿಲ್ಲ. ಅನೇಕ ವಿದ್ಯಾರ್ಥಿಗಳು ಮತ್ತು ಪೋಷಕರು ಹಲವಾರು ಬಾರಿ ವಿನಂತಿ ಮಾಡಿದರೂ ವಿದ್ಯಾರ್ಥಿವೇತನದ ಪಾವತಿಯನ್ನು ಮುಂದೂಡಿಕೊಂಡು ಬಂದಿರುತ್ತಾರೆ ಎಂದು ತಿಳಿಸಿದ್ದಾರೆ.
ಕಳೆದ 2 ದಿನಗಳ ಹಿಂದೆ ಆರ್ಥಿಕ ವರ್ಷ ಮುಕ್ತಾಯ ಆಗಿರುವುದರಿಂದ ವಿದ್ಯಾರ್ಥಿವೇತನ ಪಾವತಿ ಮಾಡಲು ಸಾಧ್ಯವಿಲ್ಲ ಎಂದು ಆನ್ಲೈನ್ ಮುಖಾಂತರ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿರುತ್ತಾರೆ. ಇದೇ ರೀತಿ ಇಂದಿನ ಆರ್ಥಿಕ ವರ್ಷದಲ್ಲೂ ಕಾರಣಗಳನ್ನು ನೀಡಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ಪಾವತಿ ಮಾಡಿರುವುದಿಲ್ಲ ಉದ್ದೇಶಪೂರ್ವಕವಾಗಿ ವಿದ್ಯಾರ್ಥಿಗಳಿಗೆ ದೊರೆಯಬೇಕಾದ ವಿದ್ಯಾರ್ಥಿ ವೇತನವನ್ನು ನೀಡದೆ ಕೆಲವು ಅಧಿಕಾರಿಗಳು ವಿದ್ಯಾರ್ಥಿಗಳಿಗೆ ವಂಚನೆ ಮಾಡುತ್ತಿದ್ದಾರೆ. ತಾವು ದಯಮಾಡಿ ಸಂಬಂಧಪಟ್ಟ ಅಧಿಕಾರಿಗಳಿಗೆ ಕೂಡಲೇ ನಿರ್ದೇಶನವನ್ನು ನೀಡಿ ಬ್ರಾಹ್ಮಣ ಮಹಾಮಂಡಳಿಯ ಮುಖಾಂತರ ಪಾವತಿ ಆಗಬೇಕಾದ ವಿದ್ಯಾರ್ಥಿ ವೇತನವನ್ನು ಪಾವತಿ ಮಾಡಲು ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ಧರಾಮಯ್ಯ ಅವರಲ್ಲಿ ರಮೇಶ್ ಬಾಬು ವಿನಂದಿಸಿದ್ದಾರೆ.
BREAKING : ‘ಮುಡಾ’ ಹಗರಣದಲ್ಲಿ ಸಿಎಂಗೆ ಮತ್ತೆ ಸಂಕಷ್ಟ : ಪತ್ನಿ ಪಾರ್ವತಿ ವಿರುದ್ಧ ಮತ್ತೊಂದು ‘ಭೂ’ ಅಕ್ರಮ ಆರೋಪ!