ಬೆಂಗಳೂರು : ನ್ಯಾಯಾಲಯದ ಅನುಮತಿ ಇಲ್ಲದೆ ಬೆಂಗಳೂರು ಮಹಾನಗರದಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಫ್ಲೆಕ್ಸ್, ಹೋರ್ಡಿಂಗ್ಸ್ಗಳ ಜಾಹೀರಾತು ಬೈಲಾ 2024ರ lಅಧಿಸೂಚನೆ ಹೊರಡಿಸದಂತೆ ರಾಜ್ಯ ಸರ್ಕಾರ ಮತ್ತು ಬಿಬಿಎಂಪಿಗೆ ಹೈಕೊರ್ಟ್ ಸೂಚನೆ ನೀಡಿದೆ.
ಬೆಂಗಳೂರು ನಗರದಲ್ಲಿ ಜಾಹೀರಾತು ಪ್ರಕಟಿಸುವ ಸಂಬಂಧ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ನಗರದಲ್ಲಿ ಜಾಹೀರಾತು ಹೊರಡಿಸುವುದಕ್ಕೆ ಸಂಬಂಧಿಸಿದಂತೆ ಬೈಲಾ ನಿಯಮಗಳನ್ನು ತಿದ್ದುಪಡಿ ಮಾಡುವುದಕ್ಕೆ ಬಿಬಿಎಂಪಿ ಮುಂದಾಗಿದ್ದು, ಪ್ರಕ್ರಿಯೆ ನಡೆಯುತ್ತಿದೆ. ಸಂಬಂಧಪಟ್ಟವರು ಮತ್ತು ಸಾರ್ವಜನಿಕರಿಂದ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ ಎಂದು ಪೀಠಕ್ಕೆ ವಿವರಿಸಿದರು.
ಅರ್ಜಿದಾರರ ವಾದವನ್ನು ಆಲಿಸಿದ ನ್ಯಾಯಪೀಠ, ನಗರದಲ್ಲಿ ಅಳವಡಿಸಿರುವ ಫ್ಲೆಕ್ಸ್, ಹೋರ್ಡಿಂಗ್ಸ್ ಮತ್ತು ಅಕ್ರಮ ಜಾಹೀರಾತುಗಳಿಗೆ ಸಂಬಂಧಿಸಿದ ಅರ್ಜಿಗಳು ನ್ಯಾಯಾಲಯದಲ್ಲಿ ವಿಚಾರಣಾ ಹಂತದಲ್ಲಿವೆ. ಈ ನಿಟ್ಟಿನಲ್ಲಿ ಈ ಸಂಬಂಧ ಅಧಿಸೂಚನೆ ಹೊರಡಿಸಬೇಕಾದರೂ ನ್ಯಾಯಾಲಯದ ಅನುಮತಿ ಪಡೆಯಬೇಕು ಎಂದು ಸೂಚನೆ ನೀಡಿ ವಿಚಾರಣೆಯನ್ನು ನವೆಂಬರ್ 8ಕ್ಕೆ ಮುಂದೂಡಿತು.