ಬೆಂಗಳೂರು: ರಾಜ್ಯದ ಮಳೆಹಾನಿಯಿಂದಾಗಿ ರೈತರ ಬೆಳೆ ನಷ್ಟವಾಗಿದೆ. ಹಲವೆಡೆ ಮನೆಗಳು ಕುಸಿದು ಹೋಗಿದ್ದಾವೆ. ಇಂತಹ ಮಳೆಹಾನಿ ಸಂತ್ರಸ್ತರಿಗೆ ಗುಡ್ ನ್ಯೂಸ್ ಎನ್ನುವಂತೆ ಸಿಎಂ ಸಿದ್ಧರಾಮಯ್ಯ ಅವರು 48 ಗಂಟೆಗಳಲ್ಲಿ ಪರಿಹಾರವನ್ನು ನೀಡುವಂತೆ ಖಡಕ್ ಆದೇಶವನ್ನು ಮಾಡಿದ್ದಾರೆ.
ರಾಜ್ಯದಲ್ಲಿನ ಮಳೆಹಾನಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳು, ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಮಹತ್ವದ ಸಭೆಯನ್ನು ನಡೆಸಿದರು. ಈ ಬಾರಿ ಹಿಂಗಾರು ಹಂಗಾಮಿನಲ್ಲಿ ಅಕ್ಟೋಬರ್ 1ರಿಂದ 25ರ ವರೆಗೆ ರಾಜ್ಯದಲ್ಲಿ ಸರಾಸರಿ 181 ಮಿ.ಮೀ ಮಳೆಯಾಗಿದೆ. ಈ ಅವಧಿಯ ವಾಸ್ತವಿಕ ಸರಾಸರಿ ಮಳೆ ಪ್ರಮಾಣ 114 ಮಿ.ಮೀ ಆಗಿದ್ದು, ಶೇ.58 ರಷ್ಟು ಹೆಚ್ಚುವರಿ ಮಳೆ ದಾಖಲಾಗಿದೆ ಎಂದರು.
ಹಿಂಗಾರು ಅವಧಿಯಲ್ಲಿ ಅತಿವೃಷ್ಟಿಯಿಂದಾಗಿ ಒಟ್ಟು 25 ಸಾವು ಸಂಭವಿಸಿದ್ದು, ತುರ್ತು ಪರಿಹಾರ ಪಾವತಿಸಲಾಗಿದೆ ಎಂದು ಹೇಳಿದರು.
ಈ ಅವಧಿಯಲ್ಲಿ ಅಧಿಕ ಮಳೆಯಿಂದಾಗಿ 84ಮನೆಗಳು ಸಂಪೂರ್ಣ ಹಾನಿಗೀಡಾಗಿದ್ದು, 2077ಮನೆಗಳು ಭಾಗಶಃ ಹಾನಿಗೀಡಾಗಿವೆ. ಪೂರ್ತಿ ಮನೆಗೆ 1.20ಲಕ್ಷ ರೂ ಪರಿಹಾರ ಹಾಗೂ ಮನೆ ನಿರ್ಮಿಸಿ ಕೊಡಲು ಈಗಾಗಲೇ ಆದೇಶಿಸಲಾಗಿದೆ. ಭಾಗಶಃ ಹಾನಿಗೀಡಾದ ಮನೆಗಳಿಗೆ ಮುಂಗಾರು ಹಂಗಾಮಿನಲ್ಲಿ ಸೂಚಿಸಿರುವಂತೆ ರೂ.50 ಸಾವಿರದವರೆಗೆ ಪರಿಹಾರ ಒದಗಿಸಲು ಆದೇಶಿಸಲಾಗಿದೆ ಎಂದರು.
ಬೆಳೆ ಹಾನಿ ಕುರಿತು ಸ್ಥಳ ಪರಿಶೀಲನೆ ನಡೆಸಿದ ಆಧಾರದಲ್ಲಿ ಪ್ರಾಥಮಿಕ ವರದಿಯನ್ನು ಪಡೆಯಲಾಗಿದೆ. ಅತಿವೃಷ್ಟಿಯಿಂದಾಗಿ ಒಟ್ಟು 74,993 ಹೆಕ್ಟೇರ್ ಪ್ರದೇಶದಲ್ಲಿ ಅಂದಾಜು ಕೃಷಿ ಬೆಳೆ ಹಾನಿ, 30,941ಹೆಕ್ಟೇರ್ ಪ್ರದೇಶದಲ್ಲಿ ತೋಟಗಾರಿಕಾ ಬೆಳೆ ಹಾನಿ ಅಂದಾಜಿಸಲಾಗಿದೆ. ಒಟ್ಟು 1,05,937ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ ಅಂದಾಜಿಸಲಾಗಿದೆ ಎಂದರು.
ಬೆಳೆ ಹಾನಿಯ ಕುರಿತು ಜಂಟಿ ಸಮೀಕ್ಷೆ ನಡೆಯುತ್ತಿದ್ದು, 3-4ದಿನಗಳಲ್ಲಿ ಸಮೀಕ್ಷೆ ಕಾರ್ಯ ಪೂರ್ಣಗೊಳ್ಳಲಿದೆ. ಜಂಟಿ ಸಮೀಕ್ಷೆ ಕಾರ್ಯವನ್ನು ಒಂದು ವಾರದ ಒಳಗಾಗಿ ಪೂರ್ಣಗೊಳಿಸಿ ವರದಿಯನ್ನು ಸಲ್ಲಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಮನೆ ಹಾನಿ ಮತ್ತು ಪ್ರಾಣ ಹಾನಿ ಪ್ರಕರಣಗಳಲ್ಲಿ 48 ಗಂಟೆಗಳ ಒಳಗಾಗಿ ಪರಿಹಾರವನ್ನು ಒದಗಿಸಬೇಕು ಎಂಬುದಾಗಿ ಖಡಕ್ ಆದೇಶ ಮಾಡಿದರು.