ಬೆಂಗಳೂರು: ರಾಜ್ಯ ಸರ್ಕಾರದ ಎಲ್ಲಾ ಇಲಾಖೆಯ ಸರ್ಕಾರಿ ನೌಕರರು ನವೆಂಬರ್.1ರೊಳಗೆ ಕೆಂಪು-ಹಳದಿ ಬಣ್ಣದ ಟ್ಯಾಗ್ ಧರಿಸುವುದು ಕಡ್ಡಾಯಗೊಳಿಸಿ ಆದೇಶಿಸಿದೆ. ಅಲ್ಲದೇ ನಿಯಮ ಪಾಲಿಸದೇ ಇದ್ದರೇ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದೆ.
ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ನಮ್ಮ ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣಗೊಳಿಸಿ 50 ವರ್ಷಗಳು ಪೂರೈಸಿರುವ ಸುಸಂದರ್ಭದಲ್ಲಿ ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ’ ಅಭಿಯಾನದಡಿ ಎಲ್ಲಾ ರಾಜ್ಯ ಸರ್ಕಾರಿ ನೌಕರರು ಕಂಪು-ಹಳದಿ ಬಣ್ಣಗಳನ್ನು ಒಳಗೊಂಡಿರುವ ಕೊರಳುದಾರ (ಟ್ಯಾಗ್) ಹೊಂದಿದ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಧರಿಸಬೇಕೆಂದು ಸಂಖ್ಯೆ: ಸಿಆಸುಇ 4 ರಾಸ 2024, ದಿನಾಂಕ:16,08,2024 ರ ಸುತ್ತೋಲೆಯಲ್ಲಿ ತಿಳಿಸಲಾಗಿತ್ತು ಎಂದಿದ್ದಾರೆ.
ಆದರೆ, ಹಲವು ಇಲಾಖೆಗಳು, ನಿಗಮ ಮಂಡಳಿ ನಿರ್ದೇಶನಾಲಯ ಹಾಗೂ ಆಯುಕ್ತಾಲಯ ಇತ್ಯಾದಿ ಸರ್ಕಾರಿ ಮತ್ತು ಸರ್ಕಾರಿ ಸ್ವಾಮ್ಯದ ಕಛೇರಿಗಳಲ್ಲಿ ಮೇಲ್ಕಂಡ ಸುತ್ತೋಲೆಯಲ್ಲಿನ ಸೂಚನೆಯನ್ನು ಪಾಲಿಸುತ್ತಿಲ್ಲವೆಂದು ಕಂಡುಬಂದಿರುತ್ತದೆ, ಆದ್ಯರಿಂದ, ನವೆಂಬರ್ 1, 2024 ರಂದು ಆಚರಿಸುವ ಕನ್ನಡ ರಾಜ್ಯೋತ್ಸವ ದಿನದೊಳಗಾಗಿ ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳು, ನಿಗಮ, ಮಂಡಳಿ, ನಿರ್ದೇಶನಾಲಯ, ಆಯುಕ್ತಾಲಯ ಇತ್ಯಾದಿ ಸರ್ಕಾರಿ ಮತ್ತು ಸರ್ಕಾರಿ ಸ್ವಾಮ್ಯದ ಕಛೇರಿಗಳಲ್ಲಿ ಕರ್ತವ್ಯ ನಿರ್ವಹಿಸುವ ಎಲ್ಲಾ ಅಧಿಕಾರಿ / ಸಿಬ್ಬಂದಿಗಳು ತಮ್ಮ ಇಲಾಖೆ / ಸಂಸ್ಥೆಯ ಗುರುತಿನ ಚೀಟಿಯನ್ನು ಧರಿಸಲು ಅನುವಾಗುವಂತೆ ಹಳದಿ ಮತ್ತು ಕೆಂಪು ಬಣ್ಣದ ಕೊರಳುದಾರವನ್ನು ಒದಗಿಸಲು ತಮ್ಮ ಇಲಾಖೆ / ಸಂಸ್ಥೆಯ ಸಕ್ಷಮ ಪ್ರಾಧಿಕಾರಗಳು ಕೂಡಲೇ ನಿಯಮಗಳನುಸಾರ ಕ್ರಮವಹಿಸುವಂತ ಹಾಗೂ ಎಲ್ಲಾ ರಾಜ್ಯ ಸರ್ಕಾರಿ ನೌಕರರು ಕಡ್ಡಾಯವಾಗಿ ಸದರಿ ಕೊರಳುದಾರವನ್ನು ಧರಿಸುವಂತೆ ಮತ್ತೊಮ್ಮೆ ತಿಳಿಸಿದ್ದಾರೆ.