ವಿಜಯಪುರ : ಗ್ಯಾರಂಟಿ ಯೋಜನೆಗಳಲ್ಲಿ ಪ್ರಮುಖವಾದ ಶಕ್ತಿ ಯೋಜನೆ ನಿಲ್ಲಿಸುವ ಕುರಿತು ಇತ್ತೀಚಿಗೆ ಡಿಸಿಎಂ ಡಿಕೆ ಶಿವಕುಮಾರ್ ಸುಳಿವು ನೀಡಿದ್ದರು. ಈ ವಿಚಾರವಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಗ್ಯಾರಂಟಿ ಯೋಜನೆ ಕುರಿತು ಕೀಳಾಗಿ ಮಾತಾಡ್ಬೇಡಿ ಎಂದು ಖಡಕ್ ವಾರ್ನಿಂಗ್ ನೀಡಿದ್ದರು. ಇದೀಗ ಸಚಿವ ಜಮೀರ್ ಅಹ್ಮದ್ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ವಿಜಯಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ. ಲೋಕಸಭಾ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಮಗೆ ಸೀಟ್ ಬರಲಿಲ್ಲ. 18 ರಿಂದ 20 ಸೀಟು ಗೆಲ್ಲುತ್ತೇವೆ ಎಂದು ನಿರೀಕ್ಷೆ ಇತ್ತು. ಆದರೆ ಅದು ಹುಸಿಯಾಯಿತು. ಆಗ ರಾಜ್ಯದ ಜನರಿಗೆ ಗ್ಯಾರಂಟಿ ಯೋಜನೆಗಳಿಂದ ಲಾಭ ಆಗಲಿಲ್ಲ ಎಂದು ತಿಳಿಸಿದರು.
ಆ ವೇಳೆ ಗ್ಯಾರಂಟಿಗಳನ್ನು ತೆಗೆದುಹಾಕಿ ಎಂದು ಹೇಳಿದರು. ಆಗ ಸಿಎಂ ರಾಜಕೀಯ ಲಾಭಕ್ಕೆ ಗ್ಯಾರಂಟಿ ಜಾರಿ ಮಾಡಿಲ್ಲ ಅಂದರು. ಬಡವರಿಗೆ ಒಳ್ಳೆಯದಾಗಲಿ ಎಂದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದೇವೆ. ನಮ್ಮ ಸರ್ಕಾರ ನಾನು ಇರೋವರೆಗೂ ಸಿಎಂ ಸಿದ್ದರಾಮಯ್ಯ ಗ್ಯಾರೆಂಟಿ ಯೋಜನೆಗಳನ್ನು ನಿಲ್ಲಿಸಲ್ಲ ಎಂದಿದ್ದಾರೆ ಎಂದು ವಿಜಯಪುರದಲ್ಲಿ ಸಚಿವ ಜಮೀರ್ ಅಹ್ಮದ್ ಹೇಳಿಕೆ ನೀಡಿದರು.