ಬೆಳಗಾವಿ ಸುವರ್ಣಸೌಧ : ಆನ್‌ಲೈನ್ ಬೆಟ್ಟಿಂಗ್ ಗೇಮ್‌ಗಳ ಸಂಸ್ಥೆಗಳ ನಿರ್ಬಂಧಕ್ಕೆ ರಾಜ್ಯ ಉಚ್ಚನ್ಯಾಯಾಲಯ ತಡೆಯಾಜ್ಞೆ ನೀಡಿದೆ. ಈ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸವೋಚ್ಛ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದೆ. ನ್ಯಾಯಾಲಯ ತಡೆಯಾಜ್ಞೆ ಇದೆ ಎಂದು ಸರ್ಕಾರ ಸುಮ್ಮನೆ ಕೂತಿಲ್ಲ. ಕಾನೂನು ಪ್ರಕಾರ ನಿರಂತರವಾಗಿ ಆನ್‌ಲೈನ್ ಬೆಟ್ಟಿಂಗ್ ಗೇಮ್ ಕಡಿವಾಣಕ್ಕೆ ಪ್ರಯತ್ನ ಮಾಡುತ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದರು.
ಮಂಗಳವಾರ ವಿಧಾನ ಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಶಾಸಕ ಎಸ್.ಜೆ.ಸೋಮಶೇಖರ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಗೃಹ ಸಚಿವರು ಉತ್ತರಿಸಿ ಮಾತನಾಡಿದರು.
ಹೆಚ್ಚಿನ ಪ್ರಮಾಣದಲ್ಲಿ ಯುವ ಪೀಳಿಗೆ ಆನ್‌ಲೈನ್ ಗೇಮ್‌ಗಳ ವ್ಯಸನಕ್ಕೆ ತುತ್ತಾಗುತ್ತಿದ್ದರೆ. ಆನ್‌ಲೈನ್ ಗೇಮ್ ದೊಡ್ಡ ಪಿಡುಗಾಗಿ ಪರಿಣಮಿಸಿದೆ. ಇದರ ತಡೆಗೆ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರಗಳು ಕಠಿಣ ಕಾನೂನುಗಳನ್ನು ಜಾರಿ ಮಾಡಬೇಕಿದೆ. ಬೆಂಗಳೂರು ನಗರದಲ್ಲಿ 5 ಹಾಗೂ ವಿಜಯನಗರದಲ್ಲಿ ಒಬ್ಬರು ಆನ್‌ಲೈನ್ ಬೆಟ್ಟಿಂಗ್ ಆಟದ ದಂಧೆಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಪ್ಟೆವೇರ್ ಉದ್ಯೋಗಿಗಳು ಇದರ ಚಟಕ್ಕೆ ಬಲಿಯಾಗುತ್ತಿರುವುದು ದುರದೃಷ್ಟಕರ ಎಂದರು.
ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಸೇರಿದಂತೆ ಹಲವು ಶಾಸಕರು ನ್ಯಾಯಾಲಯದ ತಡೆಯಾಜ್ಞೆ ತೆರವುಗೊಳಿಸಿ ಆನ್‌ಲೈನ್ ಗೇಮ್‌ಗಳನ್ನು ನಿಷೇಧಿಸಬೇಕು ಎಂದರು.