ಕೊಪ್ಪಳ : ಭಟ್ಕಳದಲ್ಲಿ ಶೈಕ್ಷಣಿಕ ಪ್ರವಾಸದ ವೇಳೆ ವಿದ್ಯಾರ್ಥಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಶಾಲೆಯ ಮುಖ್ಯೋಪಾಧ್ಯಾಯ ಸೇರಿದಂತೆ 6 ಶಿಕ್ಷಕರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
ಭಟ್ಕಳದಲ್ಲಿ ಶೈಕ್ಷಣಿಕ ಪ್ರವಾಸಕ್ಕೆ ಹೋಗಿದ್ದ ವೇಳೆ ಮೂತ್ರ ವಿಸರ್ಜನೆಗೆ ತೆರಳಿದ್ದ ವಿದ್ಯಾರ್ಥಿ ತೆರೆದ ಬಾವಿಗೆ ಬಿದ್ದು ಮೃತಪಟ್ಟಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪವೆಸಗಿದ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಗಾಣದಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆರು ಶಿಕ್ಷಕರನ್ನು ಅಮಾನತು ಮಾಡಿ ಕೊಪ್ಪಳ ಡಿಡಿಪಿಐ ಶ್ರೀಶೈಲ್ ಬಿರಾದರ್ ಆದೇಶ ಹೊರಡಿಸಿದ್ದಾರೆ.
ಡಿಸೆಂಬರ್ 18 ರಂದು ಗಾಣಗಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂರು ವಿದ್ಯಾರ್ಥಿಗಳು ಮತ್ತು ಹದಿಮೂರು ಶಿಕ್ಷಕರು ಶೈಕ್ಷಣಿಕ ಪ್ರವಾಸಕ್ಕೆ ಹೋಗಿದ್ದರು. ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಮಾತ್ರೆಗಳನ್ನು ಖರೀದಿಸಲು ಬಸ್ ನಿಲ್ಲಿಸಿದಾಗ ವಿದ್ಯಾರ್ಥಿಗಳು ಮೂತ್ರ ವಿಸರ್ಜನೆಗೆ ಹೋಗಿದ್ದರು. ಆದರೆ ಬಾವಿ ಇರುವುದು ಗೊತ್ತಾಗದೇ ನಿರುಪಾದಿ ಹರಿಜನ್ ಎಂಬ ವಿದ್ಯಾರ್ಥಿ ಬಾವಿಗೆ ಬಿದ್ದು ಸಾವನ್ನಪ್ಪಿದ್ದ.