ಬೆಂಗಳೂರು: ರಾಜ್ಯದ ಸರ್ಕಾರಿ ನೌಕರರು ಬಡ್ತಿ ಸೇರಿದಂತೆ ವಿವಿಧ ಭತ್ಯೆ ಪಡೆಯಲು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ತೇರ್ಗಡೆಗೊಳಿಸುವುದು ಕಡ್ಡಾಯವಾಗಿದೆ. ಈ ಪರೀಕ್ಷೆ ಪಾಸ್ ಮಾಡಲು ಸರ್ಕಾರಿ ನೌಕರರಿಗೆ ದಿನಾಂಕ 31-12-2025ರವರೆಗೆ ಅವಧಿಯನ್ನು ವಿಸ್ತರಿಸಿ ಆದೇಶಿಸುವಂತೆ ರಾಜ್ಯ ಸರ್ಕಾರಕ್ಕೆ ಇ-ಆಡಳಿತ ಇಲಾಖೆಯು ಪತ್ರ ಬರೆದಿದೆ.
ಈ ಕುರಿತಂತೆ ಇಂದು ಇ-ಆಡಳಿತ ಕೇಂದ್ರದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಮಾಹಿತಿ ನೀಡಿದ್ದು, ರಾಜ್ಯ ಸರ್ಕಾರಿ ಅಧಿಕಾರಿಗಳು ಮತ್ತು ನೌಕರರುಗಳು ಹಾಗೂ ನಿಗಮ- ಮಂಡಳಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಸಹ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಗಳನ್ನು ತೆಗೆದುಕೊಳ್ಳಲು ಉಲ್ಲೇಖಿತ (1)ರ ಅನ್ವಯ ಸರ್ಕಾರವು ದಿನಾಂಕ: 31-12-2024 ರವರೆಗೆ ಸಮಯಾವಕಾಶ ವಿಸ್ತರಿಸಿ ಅಧಿಸೂಚನೆ ಹೊರಡಿಸಿರುತ್ತದೆ ಎಂದಿದ್ದಾರೆ.
ಸರ್ಕಾರಿ ನೌಕರರು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದು ಕಡ್ಡಾಯವಾಗಿದ್ದು, ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗದ ನೌಕರರು ಪರಿವೀಕ್ಷಣಾ ಅವಧಿ, ಮುಂಬಡ್ತಿ ಹಾಗೂ ವಾರ್ಷಿಕ ವೇತನ ಬಡ್ತಿ ಇತ್ಯಾದಿಗಳನ್ನು ಪಡೆಯಲು ಅನರ್ಹರಾಗುತ್ತಾರೆ. ಆದುದರಿಂದ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗದೆ ಇರುವ/ಪರೀಕ್ಷೆ ತೆಗೆದುಕೊಳ್ಳದೆ ಇರುವ ಸರ್ಕಾರಿ ನೌಕರರು ಪರೀಕ್ಷ ತೆಗೆದುಕೊಂಡು ಉತ್ತೀರ್ಣರಾಗಲು ಸೂಚಿಸಲಾಗಿರುತ್ತದೆ ಎಂದು ಹೇಳಿದ್ದಾರೆ.
ಆದರೆ, 2024ರ ಜನವರಿಯಿಂದ ಈವರೆಗೆ ಕಿಯೋನಿಕ್ಸ್ ಸಂಸ್ಥೆಯಿಂದ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ನಡೆಸಲು ಸಾಧ್ಯವಾಗದೇ ಇದ್ದ ಕಾರಣ, ಇನ್ನೂ ಸುಮಾರು 1.40 ಲಕ್ಷಕ್ಕೂ ಹೆಚ್ಚು ಸರ್ಕಾರಿ ಅಧಿಕಾರಿಗಳು ಮತ್ತು ನೌಕರರುಗಳು ಹಾಗೂ ನಿಗಮ-ಮಂಡಳಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಸಹ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ತೆಗೆದುಕೊಳ್ಳಬೇಕಾಗಿರುತ್ತದೆ ಎಂದು ತಿಳಿಸಿದ್ದಾರೆ.
ಮೇಲಿನ ಅಂಶಗಳ ಹಿನ್ನೆಲೆಯಲ್ಲಿ, ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ-ನೌಕರರು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ತೇರ್ಗಡೆ ಹೊಂದುವ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ದಿನಾಂಕ: 31-12-2025ರವರೆಗೆ ಅವಧಿಯನ್ನು ವಿಸ್ತರಿಸಿ ಆದೇಶ ಹೊರಡಿಸಲು ತಮ್ಮಲ್ಲಿ ಕೋರಿದ್ದಾಗಿ ಹೇಳಿದ್ದಾರೆ.