ಬೆಳಗಾವಿ : 1924 ರಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದಲ್ಲಿ ಮಹಾತ್ಮ ಗಾಂಧೀಜಿಯವರು ಅಧ್ಯಕ್ಷತೆ ವಹಿಸಿಕೊಂಡಿದ್ದರು. ಇದರ ಭಾಗವಾಗಿ ಇಂದು ಕಾಂಗ್ರೆಸ್ ಬೆಳಗಾವಿಯಲ್ಲಿ ಗಾಂಧೀ ಭಾರತ್ ಸಮಾವೇಶ ಹಮ್ಮಿಕೊಂಡಿತ್ತು ಈ ವೇಳೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬೃಹತ್ ಗಾಂಧೀಜಿ ಪುತ್ಥಳಿಯನ್ನು ಅನಾವರಣಗೊಳಿಸಿದರು. ಈ ಕಾರ್ಯಕ್ರಮದಲ್ಲಿ ಬಿಜೆಪಿಯ ಶಾಸಕ ಎಸ್ ಟಿ ಸೋಮಶೇಖರ್ ಅವರು ಕೂಡ ಭಾಗಿಯಾಗಿದ್ದರು.
ಕಾರ್ಯಕ್ರಮ ಮುಗಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾನು ಮೂಲ ಕಾಂಗ್ರೆಸ್ಸಿಗ ಹಾಗಾಗಿ ಮಹಾತ್ಮ ಗಾಂಧೀಜಿ ಅನುಯಾಯಿಯಾಗಿ ಇಲ್ಲಿಗೆ ಬಂದಿದ್ದೇನೆ.ಗಾಂಧೀಜಿಗೂ ಬಿಜೆಪಿ ಅವರಿಗೂ ಅಜಗಜಾಂತರ ವ್ಯತ್ಯಾಸವಿದೆ. ಕಾಂಗ್ರೆಸ್ ಸೇರ್ಪಡೆ ಬಗ್ಗೆ ಇನ್ನೂ ಯೋಚನೆ ಮಾಡಿಲ್ಲ. ಸರ್ಕಾರಿ ಕಾರ್ಯಕ್ರಮಕ್ಕೆ ಆಹ್ವಾನ ಬಂದಿತ್ತು. ಹಾಗಾಗಿ ಇಲ್ಲಿಗೆ ಬಂದಿದ್ದೇನೆ ಎಂದರು. ಅಲ್ಲದೆ ಕಾರ್ಯಕ್ರಮದಲ್ಲಿ ಮೊದಲ ಸಾಲಿನ ಶಾಸಕರ ಕುರ್ಚಿಯಲ್ಲಿ ಸೋಮಶೇಖರ್ ಕುಳಿತಿದ್ದರು.
ಗಾಂಧೀಜಿಯ ಮೇಲೆ ಗೌರವ ಇಟ್ಟವರು ಕಾರ್ಯಕ್ರಮಕ್ಕೆ ಬರುತ್ತಾರೆ. ಮಹಾತ್ಮ ಗಾಂಧೀಜಿಗೂ ಬಿಜೆಪಿಗೂ ಅಜಗಜಾಂತರ ವ್ಯತ್ಯಾಸ ಇದೆ. ಪ್ರತಿಯೊಬ್ಬರೂ ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಿತ್ತು. ಎಲ್ಲದರಲ್ಲೂ ರಾಜಕಾರಣ ಮಾಡುವುದು ಸರಿಯಲ್ಲ. ಬಿಜೆಪಿಯವರು ಎಲ್ಲದರಲ್ಲೂ ರಾಜಕಾರಣ ಮಾಡಲು ಹೊರಟಿದ್ದಾರೆ ಎಂದು ಸುವರ್ಣ ಸೌಧದಲ್ಲಿ ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ಹೇಳಿಕೆ ನೀಡಿದರು.