ಬೆಂಗಳೂರು : ಮೈಕ್ರೋ ಫೈನಾನ್ಸ್ ಕಿರುಕುಳದ ಹೆಚ್ಚಳದ ಬೆನ್ನಲ್ಲೇ ಎಚ್ಚೆತ್ತಿರುವ ರಾಜ್ಯ ಸರ್ಕಾರವು ಇದೀಗ ಮೈಕ್ರೋ ಫೈನಾನ್ಸ್ ನಿಯಂತ್ರಣಕ್ಕೆ ಹೊಸ ಪ್ಲಾನ್ ಮಾಡಿದೆ. ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದ್ದು, ಸಂಜೆ 5 ಗಂಟೆ ಮೇಲೆ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಸಾಲ ವಸೂಲಾತಿಗೆ ಹೋಗುವಂತಿಲ್ಲ ಎಂದು ತಿಳಿಸಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಯುತ್ತಿದ್ದು, ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದು, ನಿಮ್ಮ ಸಿಬ್ಬಂದಿ ನಿಯಮ ಬಾಹಿರವಾಗಿ ವಸೂಲಿ ಮಾಡಲಾಗುತ್ತಿದೆ. ಕಾನೂನು ಕೈಗೆತ್ತಿಕೊಳ್ಳಲು ನಿಮಗೆ ಅನುಮತಿ ಕೊಟ್ಟವರು ಯಾರು,? ಸಾಲ ವಸೂಲಿಗೆ ರೌಡಿಗಳನ್ನು ಇಟ್ಟುಕೊಂಡಿದ್ದೀರಾ? ಸಾಲ ತೀರಿಸಲು ಸಾಧ್ಯವೇ ಎಂಬುದನ್ನೂ ಗಮನಿಸದೇ ಒಬ್ಬನೇ ವ್ಯಕ್ತಿಗೆ ನಿಯಮ ಬಾಹಿರವಾಗಿ ಸಾಲ ನೀಡುವುದು ಸರಿಯಲ್ಲ. ಸಾಲಗಾರರ ಮನೆ ಜಪ್ತಿ ಮಾಡುವ ಮೊದಲು ನೀವು ನ್ಯಾಯಾಲಯದಿಂದ ಅನುಮತಿ ಪಡೆದಿದ್ದೀರಾ? ಕಾನೂನು ಕೈಗೆತ್ತಿಕೊಳ್ಳಲು ನಿಮ್ಮ ಸಿಬ್ಬಂದಿಗೆ ಅನುಮತಿ ಕೊಟ್ಟವರು ಯಾರು? ಸಾಲ ವಸೂಲಿಗೆ ರೌಡಿಗಳನ್ನು ಬಳಸುತ್ತಿದ್ದೀರಾ ? ರಿಸರ್ವ್ ಬ್ಯಾಂಕಿನ ಷರತ್ತು ಮತ್ತು ನಿಬಂಧನೆಗಳನ್ನು ಸಾಲಗಾರರಿಗೆ ಅವರ ಆಡು ಭಾಷೆಯಲ್ಲಿ ಅರ್ಥ ಮಾಡಿಸಿದ್ದೀರಾ? RBI ನಿಯಮ ಮೀರಿ ಸಾಲ ಕೊಡುತ್ತಿದ್ದೀರಾ ? ಮರುಪಾವತಿಯ ಕೆಪಾಸಿಟಿ ಗಮನಿಸದೆ ಒಬ್ಬರೇ ಸಾಲಗಾರರಿಗೆ ಪದೇ ಪದೇ ಸಾಲ ಕೊಡುತ್ತಿರುವುದು ಏಕೆ? ಎಂದು ಸಾಲು ಸಾಲು ಪ್ರಶ್ನೆ ಮುಂದಿಟ್ಟಿದ್ದಾರೆ.
ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಾಲ ಕೊಡಬೇಡಿ ಎಂದು ನಾವು ಯಾರಿಗೂ ಹೇಳಿಲ್ಲ. ಆದರೆ ವಸೂಲಿ ಮಾಡುವಾಗ ಕಿರುಕುಳ ಕೊಡಬಾರದು. ಆರ್ ಬಿಐ ನಿಯಮದ ಪ್ರಕಾರ ನಡೆದುಕೊಳ್ಳಬೇಕು. ಸಂಜೆ 5 ಗಂಟೆ ಬಳಿಕ ವಸೂಲಾತಿಗೆ ಹೋಗಬಾರದು ಎಂದು ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಸಾಲ ವಸೂಲಾತಿಗೆ ಔಟ್ ಸೋರ್ಸ್, ರೌಡಿಶೀಟರ್ ಗಳನ್ನು, ಗುಂಡಾಗಳನ್ನು ಬಳಸಿಕೊಳ್ಳುವಂತಿಲ್ಲ. ಗಿರವಿ ಅಂಗಡಿಯರು, ಮೈಕ್ರೋ ಫೈನಾನ್ಸ್ ನವರು ಕಾನೂನು ಪಾಲಿಸಬೇಕು. ಕಾಣೂನು ಉಲ್ಲಂಘಿಸುವವ ವಿರುದ್ದ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಾಗುವುದು. ಇಂದು ನಡೆದ ಸಭೆಯಲ್ಲಿ ಎಚ್ಚರಿಕೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್, ಗೃಹ ಸಚಿವ ಡಾ.ಜಿ.ಪರಮೇಶ್ವರ್, ಕಾನೂನು ಸಚಿವ ಹೆಚ್.ಕೆ. ಪಾಟೀಲ್. ಕಂದಾಯ ಸಚಿವ ಕೃಷ್ಣ ಬೈರೇಗೌಡ, ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್ ಸೇರಿದಂತೆ ಹಲವರು ಭಾಗಿಯಾಗಿದ್ದರು.