ಬೆಂಗಳೂರು : ಕಳೆದ ಕೆಲವು ದಿನಗಳ ಹಿಂದೆ ಗಂಗಾವತಿ ಕ್ಷೇತ್ರದ ಶಾಸಕ ಜನಾರ್ದನ್ ರೆಡ್ಡಿ ಹಾಗೂ ಮಾಜಿ ಸಚಿವ ಶ್ರೀರಾಮುಲು ನಡುವೆ ಬಿರುಕು ಮೂಡಿದೆ. ಈ ನಡುವೆ ಶ್ರೀರಾಮುಲು ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಾರೆ ಎಂಬ ವದಂತಿ ಹರಿದಾಡಿತ್ತು. ಈ ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಶ್ರೀರಾಮುಲುಗೆ ಕಾಂಗ್ರೆಸ್ ಪಕ್ಷ ಸೇರುವಂತೆ ನಾನು ಹೇಳಿಲ್ಲ ಎಂದು ಸ್ಪಷ್ಟನೆ ನೀಡಿದರು.
ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಚುನಾವಣೆಗೆ ಮುಂಚಿತವಾಗಿ ಬಿಜೆಪಿಯ ಶ್ರೀರಾಮುಲು ಅವರನ್ನು ಕಾಂಗ್ರೆಸ್ ಸೇರುವಂತೆ ಆಹ್ವಾನಿಸಿದ್ದು ನಿಜ. ಆದರೆ, ಈಗ ನಾನು ಅವರಿಗೆ ಯಾವುದೇ ಆಹ್ವಾನ ನೀಡಿಲ್ಲ. ಮಾಜಿ ಸಚಿವ ಜನಾರ್ದನ ರೆಡ್ಡಿ ಬಾಯಿ ಚಪಲಕ್ಕೆ ಇಂತಹ ಆರೋಪ ಮಾಡುತ್ತಿದ್ದಾನೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಆ ರೀತಿ ಆಗ ಸುಮಾರು 50 ಜನಕ್ಕೆ ಕೇಳಿದ್ದೇನೆ. ಆದರೆ, ಈಗ ನನಗೆ ಶ್ರೀರಾಮುಲು ಸಿಕ್ಕಿಯೂ ಇಲ್ಲ, ನನ್ನ ಬಳಿ ಮಾತನಾಡಿಯೂ ಇಲ್ಲ. ಪಕ್ಷಕ್ಕೆ ಬರುವಂತೆ ಅವರಿಗೆ ನಾನು ಆಹ್ವಾನವನ್ನೂ ನೀಡಿಲ್ಲ. ಈ ವಿಚಾರದಲ್ಲಿ ನನ್ನ ಹೆಸರನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಜನಾರ್ದನ ರೆಡ್ಡಿ ಬಾಯಿ ಚಪಲಕ್ಕೆ ಈ ರೀತಿ ಮಾತನಾಡುತ್ತಿದ್ದಾನೆ ಎಂದರು. ನಾನು ಶ್ರೀರಾಮುಲು ಸಂಪರ್ಕದಲ್ಲಿರುವುದನ್ನು ಆತ ನೋಡಿದ್ದಾನೆಯೇ? ಆತ ಯಾರ ಜೊತೆ ಸಂಪರ್ಕದಲ್ಲಿ ಇದ್ದ ಎಂಬುದನ್ನು ಈಗ ಚರ್ಚೆ ಮಾಡುವುದು ಬೇಡ ಎಂದರು.