ಬೆಂಗಳೂರು : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಎರಡು ಮೂರು ದಿನಗಳಲ್ಲಿ ಸಿಎಂ ಸಿದ್ದರಾಮಯ್ಯ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇನ್ನು ಎರಡ್ಮೂರು ದಿನಗಳಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳದ ವಿರುದ್ದ ಸಿಎಂ ಸಿದ್ದರಾಮಯ್ಯ ಮಹತ್ವದ ನಿರ್ಧಾರ ತೆಗೆದುಕೊಳ್ಳುತ್ತಾರೆ. ಕಾನೂನುಗಳನ್ನು ಅಧ್ಯಯನ ನಡೆಸಿ ಕಾನೂನು ಪ್ರಕಾರ ಸುಗ್ರೀವಾಜ್ಞೆ ಜಾರಿಗೊಳಿಸಲಾಗುವುದು ಎಂದು ಹೇಳಿದ್ದಾರೆ.
ಈಗಾಗಲೇ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಹಾಗೂ ಎಸ್ ಪಿ ಗಳಿಗೆ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ತಮ್ಮ ಸಾಲಗಾರರಿಗೆ ನೀಡುವ ಕಿರುಕುಳ ನಿಲ್ಲಿಸಲು ಸರ್ಕಾರ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಈ ಕುರಿತು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಹಾಗೂ ಎಸ್ ಪಿ ಗಳಿಗೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ಅಲ್ಲದೆ ಜಿಲ್ಲಾಧಿಕಾರಿಗಳಿಗೆ ಹೆಚ್ಚಿನ ಅಧಿಕಾರ ನೀಡುವ ಕುರಿತು ಚಿಂತನೆ ನಡೆದಿದೆ ಎಂದು ತಿಳಿಸಿದರು.