ಬೆಂಗಳೂರು : ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕುಟುಂಬದವರು ರಾಮನಗರ ಜಿಲ್ಲೆ ಬಿಡದಿ ಹೋಬಳಿಯ ಕೇತಗಾನಹಳ್ಳಿ ವ್ಯಾಪ್ತಿಯಲ್ಲಿ ಸರ್ಕಾರದ ಜಮೀನು ಒತ್ತುವರಿ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆಗೆ ಇದೀಗ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತ ಆಮ್ಲನ್ ಆದಿತ್ಯ ಬಿಸ್ವಾನ್ ಅಧ್ಯಕ್ಷತೆಯಲ್ಲಿ SIT ರಚಿಸಲಾಗಿದೆ.
ಕರ್ನಾಟಕ ಭೂ ಕಂದಾಯ ಕಾಯ್ದೆ-1964 ಮತ್ತು ಕರ್ನಾಟಕ ಭೂ ಕಬಳಿಕೆ ನಿಷೇಧ ಕಾಯ್ದೆ-2011ರ ಅಡಿಯಲ್ಲಿ ಈ ವಿಶೇಷ ತನಿಖಾ ತಂಡ ರಚಿಸಿ ಕಂದಾಯ ಇಲಾಖೆಯು ಜನವರಿ 28ರಂದು ಆದೇಶ ಹೊರಡಿಸಿದೆ. ಭೂ ಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆಯ ಜಂಟಿ ನಿರ್ದೇಶಕ ನಿಸಾರ್ ಅಹಮ್ಮದ್, ಬೆಂಗಳೂರು ವಿಭಾಗದ ಹೆಚ್ಚುವರಿ ಪ್ರಾದೇಶಿಕ ಆಯುಕ್ತ ಇಸ್ಲಾವುದ್ದೀನ್ ಗದ್ಯಾಳ, ಕಂದಾಯ ಆಯುಕ್ತಾಲಯದ ತಹಶೀಲ್ದಾರ್ ಗಣಪತಿ ಶಾಸ್ತ್ರಿ ಅವರನ್ನು ಎಸ್‌ಐಟಿಯ ಸದಸ್ಯರನ್ನಾಗಿ ನೇಮಿಸಲಾಗಿದೆ. ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರ ಕಚೇರಿಯ ಗ್ರೇಡ್-2 ತಹಶೀಲ್ದಾರ್ ಶೀತಲ್ ಅವರನ್ನು ಎಸ್‌ಐಟಿಯ ಸದಸ್ಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ.
ಹೆಚ್.ಡಿ. ಕುಮಾರಸ್ವಾಮಿ ಮತ್ತು ಅವರ ಸಂಬಂಧಿ ಡಿ.ಸಿ. ತಮ್ಮಣ್ಣ ಇತರರು ಕೇತಗಾನಹಳ್ಳಿ ವ್ಯಾಪ್ತಿಯಲ್ಲಿ 14 ಎಕರೆ ಸರ್ಕಾರಿ ಜಮೀನು ಒತ್ತುವರಿ ಮಾಡಿದ ಆರೋಪದ ಮೇಲೆ ಎಸ್.ಆರ್. ಹಿರೇಮಠ ನೇತೃತ್ವದ ಸಮಾಜ ಪರಿವರ್ತನಾ ಸಮುದಾಯ ಸಿವಿಲ್ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದು, ನ್ಯಾಯಮೂರ್ತಿ ಕೆ. ಸೋಮಶೇಖರ್ ನೇತೃತ್ವದ ವಿಭಾಗೀಯ ಪೀಠದಲ್ಲಿ ಇತ್ತೀಚಿಗೆ ವಿಚಾರಣೆ ನಡೆಸಲಾಗಿತ್ತು.
ಭೂ ಒತ್ತುವರಿ ತೆರವಿಗೆ ಕ್ರಮ ವಹಿಸುವಲ್ಲಿ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಠಾರಿಯಾ ಅವರನ್ನು ನ್ಯಾಯಪೀಠ ತರಾಟೆಗೆ ತೆಗೆದುಕೊಂಡಿತ್ತು. ಕುಮಾರಸ್ವಾಮಿ ಉನ್ನತ ಹುದ್ದೆಯಲ್ಲಿದ್ದಾರೆ ಎಂದು ನೀವು ಕ್ರಮ ಕೈಗೊಳ್ಳುತ್ತಿಲ್ಲ. ನಿಮ್ಮನ್ನು 15 ದಿನ ಜೈಲಿಗೆ ಕಳಿಸಿದರೆ ಎಲ್ಲವೂ ಸರಿ ಹೋಗುತ್ತದೆ ಎಂದು ನ್ಯಾಯಪೀಠ ಎಚ್ಚರಿಕೆ ನೀಡಿತ್ತು.