ಧಾರವಾಡ : ಸಿಎಂ ಸಿದ್ದರಾಮಯ್ಯ ಹಾಗೂ ಅವರ ಕುಟುಂಬ ಸದಸ್ಯರ ವಿರುದ್ಧ ಕೇಳಿಬಂದಿರುವ ಮುಡಾ ನಿವೇಶನ ಅಕ್ರಮ ಹಂಚಿಕೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ಕೋರಿ ಸಲ್ಲಿಸಲಾಗಿರುವ ಅರ್ಜಿ ಕುರಿತ ತೀರ್ಪನ್ನು ಹೈಕೋರ್ಟ್ ಇದೀಗ ಪ್ರಕಟಿಸಿದ್ದು, ಸ್ನೇಹಮಯಿ ಕೃಷ್ಣ CBI ತನಿಖೆಗೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಇದೀಗ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಪೀಠ ವಜಾಗೊಳಿಸಿದೆ.
ವಿಚಾರಣೆ ಆರಂಭದ ವೇಳೆ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ, ಸಿಎಂ ವಿರುದ್ಧದ ಮುಡಾ ಕೇಸ್ ತನಿಖೆ ಸಿಬಿಐಗೆ ನೀಡಲು ನಕಾರ ವ್ಯಕ್ತಪಡಿಸಿದ್ದು, ಲೋಕಾಯುಕ್ತ ಪೊಲೀಸರ ತನಿಖೆ ಅಸಮರ್ಪಕ ಎನ್ನುವುದಕ್ಕೆ ಕಾರಣಗಳಿಲ್ಲ. ಲೋಕಾಯುಕ್ತ ತನಿಖೆ ತಾರತಮ್ಯಪೂರಿತ ಎಂಬುದಕ್ಕೆ ಆಧಾರಗಳಿಲ್ಲ ಎಂದು ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ.
ಮುಡಾ ನಿವೇಶನ ಹಂಚಿಕೆ ಅಕ್ರಮದ ಪ್ರಕರಣದ ಪ್ರಾಸಿಕ್ಯೂಷನ್ ಮತ್ತು ಪೊಲೀಸ್ ತನಿಖೆಗೆ ರಾಜ್ಯಪಾಲರು ನೀಡಿದ್ದ ಆದೇಶ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕೋರ್ಟ್‌ಗೆ 2024ರ ಆ.19ರಂದು ತಕರಾರು ಅರ್ಜಿ ಸಲ್ಲಿಸಿದ್ದರು. ಆ ಅರ್ಜಿಯನ್ನು ವಜಾಗೊಳಿಸಿ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ 2024ರ ಸೆ.24ರಂದು ಆದೇಶಿಸಿತ್ತು. ಈ ತೀರ್ಪಿನಲ್ಲಿ ಪ್ರಕರಣದ ತನಿಖೆ ನಡೆಯುವುದು ಅತ್ಯಗತ್ಯವಿದೆ ಎಂದು ಹೇಳಿತ್ತು.ಇದೀಗ ಸ್ನೇಹಮಯಿ ಕೃಷ್ಣ CBI ತನಿಖೆಗೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಇದೀಗ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಪೀಠ ವಜಾಗೊಳಿಸಿದೆ.
ಪ್ರಕರಣದ ಹಿನ್ನೆಲೆ?
ಮೈಸೂರಿನ ದೇವನೂರು 3ನೇ ಹಂತದ ಬಡಾವಣೆ ಅಭಿವೃದ್ಧಿಗೆ ಮುಡಾ ವಶಪಡಿಸಿಕೊಂಡಿದೆ ಎನ್ನಲಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾವರ್ತಿ ಅವರಿಗೆ ಸೇರಿದ ಮೈಸೂರಿನ ಕೆಸರೆ ಗ್ರಾಮದ ಸರ್ವೇ ನಂಬರ್ 464ರ 3 ಎಕರೆ 16 ಗುಂಟೆ ಜಮೀನಿನ ಬದಲಿಗೆ ಸುಮಾರು 56 ಕೋಟಿ ಮೌಲ್ಯದ 14 ನಿವೇಶನಗಳನ್ನು ಅಕ್ರಮವಾಗಿ ನೀಡಲಾಗಿದೆ. ಇದರಲ್ಲಿ ಸಿದ್ದರಾಮಯ್ಯ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದು, ಅಧಿಕಾರಿಗಳ ಮೇಲೆ ಪ್ರಭಾವ ಬೀರಿದ್ದಾರೆ. ಈ ಸಂಬಂಧ ತನಿಖೆ/ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ಕೋರಿ ಸ್ನೇಹಮಯಿ ಕೃಷ್ಣ ಸೇರಿ ಮೂವರು ಸಾಮಾಜಿಕ ಕಾರ್ಯಕರ್ತರು 2024ರ ಜೂನ್-ಜುಲೈನಲ್ಲಿ ರಾಜ್ಯಪಾಲರಿಗೆ ಅರ್ಜಿ ಸಲ್ಲಿಸಿದ್ದರು.
ಈ ಸಂಬಂಧ ಪ್ರಕರಣದ ತನಿಖೆ/ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿ ರಾಜ್ಯಪಾಲರು ಆ.17ರಂದು ಆದೇಶಿಸಿದ್ದರು. ಅದನ್ನು ಪ್ರಶ್ನಿಸಿ ಮುಖ್ಯಮಂತ್ರಿಗಳು ಆ.19ರಂದು ಸಲ್ಲಿಸಿದ್ದ ತಕರಾರು ಅರ್ಜಿಯನ್ನು ಹೈಕೋರ್ಟ್ ಸೆ.24ರಂದು ತಿರಸ್ಕರಿಸಿತ್ತು. ಈ ಆದೇಶ ಹೊರಬಿದ್ದ ಬೆನ್ನಲ್ಲೇ ಮುಡಾ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು. ಎಫ್‌ಐಆರ್ ದಾಖಲಾದ ದಿನವೇ ಅಂದರೆ ಸೆ.27ರಂದು ಇಡೀ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಸ್ನೇಹಮಯಿ ಕೃಷ್ಣ ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿದ್ದರು. ಅದರ ವಿಚಾರಣೆಯನ್ನು ಜ.27ರಂದು ಪೂರ್ಣಗೊಳಿಸಿದ್ದ ನ್ಯಾ.ಎಂ. ನಾಗಪ್ರಸನ್ನ ಅವರ ಪೀಠ ತೀರ್ಪು ಕಾಯ್ದಿರಿಸಿತ್ತು.