ಬೆಂಗಳೂರು : ಕರ್ನಾಟಕದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ಸುಗ್ರೀವಾಜ್ಞೆ ಜಾರಿಗೊಳಿಸುವಂತ ನಿರ್ಧಾರವನ್ನು ಸರ್ಕಾರ ಪ್ರಕಟಿಸಿತ್ತು. ಅದರಂತೆ ಸಚಿವ ಸಂಪುಟ ಸಭೆಯಲ್ಲೂ ಅನುಮೋದಿಸಿ, ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಲಾಗಿತ್ತು. ಇಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಂಕಿತ ಸೂಚಿಸಿದ್ದಾರೆ. ಇದರ ಬೆನ್ನಲ್ಲೇ ಸರ್ಕಾರವು ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ತಡೆಯ ಗೆಜೆಟ್ ಅಧಿಸೂಚನೆಯನ್ನು ಪ್ರಕಟಿಸಿದೆ.
ಇಂದು ರಾಜ್ಯ ಸರ್ಕಾರದಿಂದ ವಿಶೇಷ ರಾಜ್ಯ ಪತ್ರದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಯ ಸುಗ್ರೀವಾಜ್ಞೆಯನ್ನು ಪ್ರಕಟಿಸಲಾಗಿದೆ. ಅದರಲ್ಲಿ ಕರ್ನಾಟಕ ಕಿರು (Micro) ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಅಧ್ಯಾದೇಶ, 2025ರ ಫೆಬ್ರವರಿ ತಿಂಗಳ 12ನೇ ದಿನಾಂಕದಂದು ರಾಜ್ಯಪಾಲರ ಒಪ್ಪಿಗೆ ದೊರೆತಿದ್ದು, ಸಾಮಾನ್ಯ ತಿಳುವಳಿಕೆಗಾಗಿ ಇದನ್ನು 2025ರ ಕರ್ನಾಟಕ ಅಧ್ಯಾದೇಶ ಸಂಖ್ಯೆ : 02 ಎಂಬುದಾಗಿ ಕರ್ನಾಟಕ ರಾಜ್ಯಪತ್ರದ ವಿಶೇಷ ಸಂಚಿಕೆಯಲ್ಲಿ (ಭಾಗ IV-A) ಪ್ರಕಟಿಸಬೇಕೆಂದು ಆದೇಶಿಸಲಾಗಿದೆ ಎಂದು ಹೇಳಿದೆ.
ಕರ್ನಾಟಕ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಅಥವಾ ಸಾಲ ನೀಡಿಕೆ ಏಜೆನ್ಸಿಗಳು ಅಥವಾ ಸಂಸ್ಥೆಗಳು (organizations) ಅಥವಾ ಲೇವಾದೇವಿದಾರರು ನೀಡುವ ದುಬಾರಿ ಬಡ್ಡಿ ದರಗಳ ಅನುಚಿತ ತೊಂದರೆ ಮತ್ತು ಬಲವಂತದ ವಸೂಲಾತಿ ವಿಧಾನಗಳಿಂದ ಆರ್ಥಿಕವಾಗಿ ದುರ್ಬಲ ಗುಂಪುಗಳು ಮತ್ತು ವ್ಯಕ್ತಿಗಳು, ವಿಶೇಷವಾಗಿ ರೈತರು, ಮಹಿಳೆಯರು ಮತ್ತು ಮಹಿಳಾ ಸ್ವಸಹಾಯ ಗುಂಪುಗಳನ್ನು ರಕ್ಷಿಸಲು ಮತ್ತು ಮುಕ್ತಗೊಳಿಸಲು ಹಾಗೂ ಅದಕ್ಕೆ ಸಂಬಂಧಪಟ್ಟ ಅಥವಾ ಅದಕ್ಕೆ ಪ್ರಾಸಂಗಿಕವಾದ ವಿಷಯಗಳಿಗಾಗಿ ಒಂದು ಅಧ್ಯಾದೇಶ ಎಂದು ಹೇಳಿದೆ.