ಮೈಸೂರು : ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಕಿಡಿಗೇಡಿಗಳಿಂದ ಕಲ್ಲುತೂರಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ FIR ದಾಖಲಾಗಿದ್ದು ಈಗಾಗಲೇ ಪೊಲೀಸರು 12 ಜನ ಆರೋಪಿ ಹಾಗೂ ಬಾಲಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಗಳನ್ನು ಜಡ್ಜ್ ಮುಂದೆ ಹಾಜರುಪಡಿಸಿದಾಗ 14 ದಿನಗಳ ಕಾಲ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ನೀಡಿದ್ದಾರೆ.
ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಫ್ಐಆರ್ ನಲ್ಲಿ ಹಲವು ಅಂಶಗಳು ದಾಖಲಾಗಿದ್ದು, ಕೆಲವು ಸ್ಫೋಟಕವಾದ ಅಂಶಗಳು ಇದೀಗ ಬಯಲಾಗಿವೆ. ಉದ್ರಿಕ್ತರು ಸಿಕ್ಕ ಸಿಕ್ಕ ಪೊಲೀಸರ ಮೇಲೆ ಹಾಗೂ ಸಾರ್ವಜನಿಕರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಸ್ವಲ್ಪ ಯಾಮಾರಿದರೂ ಕೂಡ ಪೊಲೀಸರ ಹೆಣ ಬೀಳುತ್ತಿದ್ದವು. ಅಕ್ರಮವಾಗಿ ಗುಂಪು ಕಟ್ಟಿಕೊಂಡು ಸರ್ಕಾರದ ಆಸ್ತಿ ಪಾಸ್ತಿಗೆ ಹಾನಿ ಮಾಡಿದ್ದಾರೆ. ಈ ವೇಳೆ ಪೊಲೀಸ್ ಇಲಾಖೆಗೆ ಸಂಬಂಧಿಸಿದ ವಾಹನಗಳಿಗೂ ಕೂಡ ಉದ್ರಿಕ್ತರು ಹಾನಿ ಮಾಡಿದ್ದಾರೆ.
ಕರ್ತವ್ಯ ನಿರ್ವಹಿಸುತ್ತಿದ್ದವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೈದು ಹಲ್ಲೆ ನಡೆಸಿದ್ದಾರೆ ಸರ್ಕಾರಿ ಕೆಲಸಕ್ಕೆ ಮುಸ್ಲಿಂ ಯುವಕರು ಅಡ್ಡಿಪಡಿಸಿದ್ದಾರೆ. ಎಂದು ಉದಯಗಿರಿ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ನಲ್ಲಿ ಉಲ್ಲೇಖವಾಗಿದೆ ಕಲ್ಲುತೂರಾಟ ಮಾಡಿದವರ ಮೇಲೆ ಕ್ರಮ ಜರುಗಿಸಬೇಕು ಎಂದು ದೂರು ಸಲ್ಲಿಕೆಯಾಗಿದೆ. ಉದಯಗಿರಿ ಪೊಲೀಸ್ ಠಾಣೆ ಪಿಎಸ್ಐ ಸುನಿಲ್ ಈ ಕುರಿತು ದೂರು ದಾಖಲಿಸಿದ್ದಾರೆ.
ಏನಿದು ಘಟನೆ?
ಮುಸ್ಲಿಂ ಸಮುದಾಯದ ಬಗ್ಗೆ ವ್ಯಕ್ತಿವೋರ್ವ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದಾನೆ ಎಂಬ ಕಾರಣಕ್ಕಾಗಿ ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಕಲ್ಲು ತೂರಾಟ ನಡೆಸಿದ ಘಟನೆ ಸೋಮವಾರ ರಾತ್ರಿ ನಡೆದಿದೆ.
ದೆಹಲಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ರಾಹುಲ್ ಗಾಂಧಿ, ಅಖಿಲೇಶ್ ಯಾದವ್ ಮತ್ತು ಅರವಿಂದ ಕೇಜಿವಾಲ್ ಅವರ ಭಾವಚಿತ್ರವನ್ನು ಹಾಕಿ ಅದರ ಮೇಲೆ ಪ್ರವಾದಿ ಮುಹಮ್ಮದ್ ಪೈಗಂಬರ್ ಅವರ ಕುರಿತ ಸಾಲುಗಳನ್ನು ಉಲ್ಲೇಖ ಮಾಡಿದ್ದ. ಇದರ ಜೊತೆಗೆ ಮಹಾತ್ಮಾಗಾಂಧಿ ಮತ್ತು ರಾಹುಲ್ ಗಾಂಧಿ ಇಬ್ಬರ ಕುರಿತ ಅವಹೇಳನಕಾರಿ ವೀಡಿಯೋ ಪೋಸ್ಟ್ ಮಾಡಿದ್ದ ಎಂದು ಆರೋಪಿಸಲಾಗಿದೆ.
ಈ ಪೋಸ್ಟ್ ವೈರಲ್ ಆಗುತ್ತಿದ್ದಂತೆಯೇ ಮುಸ್ಲಿಂ ಸಮುದಾಯದ ಪ್ರಮುಖರು ಸಾವಿರಾರು ಸಂಖ್ಯೆಯಲ್ಲಿ ಸೇರಿ ಪ್ರತಿಭಟಿಸಿದ್ದರು. ಆತನ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಕೂಡಲೇ ಆತನನ್ನು ಬಂಧಿಸಬೇಕು ಎಂದು ಪಟ್ಟು ಹಿಡಿದಿದ್ದರು. ಇದಲ್ಲದೆ ಶಾಂತಿನಗರ, ಮಹದೇವಪುರ ರಸ್ತೆ ಬಂದ್ ಮಾಡಿದ್ದರು.
ಮಧ್ಯರಾತ್ರಿಯಾದರೂ ಸನ್ನಿವೇಶ ನಿಯಂತ್ರಣಕ್ಕೆ ಬಂದಿರಲಿಲ್ಲ. ಈ ನಡುವೆ ಕೆಲವರು ಕಲ್ಲು ತೂರಾಟ ನಡೆಸಿದಾಗ ಪ್ರತಿಭಟನಾನಿರತರನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಅಶ್ರುವಾಯು ಸಿಡಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಅವಹೇಳನಕಾರಿ ಪೋಸ್ಟ್ ಮಾಡಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.