ಬೆಂಗಳೂರು : ಜಾತಿ ಗಣತಿ ವರದಿ ಜಾರಿಯಾಗುವ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಅಪ್ಡೇಟ್ ನೀಡಿದ್ದು, ಜಾತಿ ಗಣತಿ ವರದಿಯು ವೈಜ್ಞಾನಿಕವಾಗಿ ನಡೆದಿದ್ದು, ಅದನ್ನು ಶತಾಯಗತಾಯ ಜಾರಿಗೊಳಿಸಲಾಗುವುದು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಸಾಮಾಜಿಕ ಜಾಲತಾಣ ಟ್ವೀಟ್ ನಲ್ಲಿ ಈ ಕುರಿತು ಮಾಹಿತಿ ಹಂಚಿಕೊಂಡಿರುವ ಅವರು, ನಮ್ಮ ಸರ್ಕಾರದ ಈ ಹಿಂದಿನ ಅವಧಿಯಲ್ಲಿ ನಡೆಸಲಾದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯು ಅತ್ಯಂತ ವೈಜ್ಞಾನಿಕವಾಗಿ ನಡೆದಿದೆ. ಹೀಗಾಗಿ ವರದಿ ಜಾರಿಯ ಬಗ್ಗೆ ಯಾವುದೇ ಅನುಮಾನ ಅಥವಾ ಗೊಂದಲಗಳಿಗೆ ಆಸ್ಪದವಿಲ್ಲ. ನೂರಕ್ಕೆ ನೂರರಷ್ಟು ವರದಿ ಜಾರಿಯಾಗುವುದು ಸತ್ಯ ಎಂದಿದ್ದಾರೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಿನ್ನೆ ಹಿಂದುಳಿದ ವರ್ಗ, ಜಾತಿ ಮತ್ತು ಸಮುದಾಯಗಳ ಮುಖಂಡರುಗಳ ಜೊತೆ ಬಜೆಟ್ ಪೂರ್ವ ಸಭೆ ನಡೆಸಿ, ಸಮುದಾಯಗಳ ಕುಂದುಕೊರತೆಗಳು ಹಾಗೂ ನಿರೀಕ್ಷೆಗಳನ್ನು ಆಲಿಸಿ, ಅವುಗಳ ಈಡೇರಿಕೆಗೆ ಬಜೆಟ್ ಮೂಲಕ ಗರಿಷ್ಠ ಪ್ರಯತ್ನ ನಡೆಸುವುದಾಗಿ ತಿಳಿಸಿದ್ದೇನೆ ಎಂದರು.
ಜಾತಿ ಗಣತಿ ವರದಿಯು ವೈಜ್ಞಾನಿಕವಾಗಿ ನಡೆದಿದ್ದು ಅದನ್ನು ನಮ್ಮ ಸರ್ಕಾರ ಖಂಡಿತವಾಗಿಯೂ ಜಾರಿಗೊಳಿಸುತ್ತದೆ, ಇದರಲ್ಲಿ ಯಾವುದೇ ಸಂಶಯ ಬೇಡ.ಜಾತಿ ಗಣತಿಯ ವರದಿ ವೈಜ್ಞಾನಿಕವಾಗಿ ತಯಾರಾಗಿದ್ದು ಸಮಾಜದ ಎಲ್ಲಾ ವರ್ಗಗಳ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸ್ಥಿತಿಗತಿ ತಿಳಿಯಲು ಅನುಕೂಲವಾಗಿದೆ. ಆ ಪ್ರಕಾರ ಸರ್ಕಾರದ ಕಾರ್ಯಕ್ರಮಗಳನ್ನು ರೂಪಿಸಲು ಸಹಕಾರಿಯಾಗುತ್ತದೆ.
ತಮಿಳು ನಾಡು ಮಾದರಿಯಲ್ಲಿ ಮೀಸಲಾತಿ ಹೆಚ್ಚಳಕ್ಕೆ ಸಭೆಯಲ್ಲಿ ಒತ್ತಾಯ ಬಂದಿದೆ. 1992 ರ ಇಂದಿರಾ ಸಹಾನಿ ಪ್ರಕರಣದಲ್ಲಿ ಮೀಸಲಾತಿ ಶೇಕಡಾ 50ರಷ್ಟು ಮೀರಬಾರದು ಎಂದು ಸುಪ್ರೀಂ ಕೋರ್ಟ್ ಹೇಳಿದೆ, ಕಳೆದ ಸರ್ಕಾರದಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ಎಂದು ( EWS) ಮೀಸಲಾತಿ ಕಲ್ಪಿಸಿದ್ದು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ. ಸಂವಿಧಾನದ ಆರ್ಟಿಕಲ್ (15) ಮತ್ತು(16)ರ ಪ್ರಕಾರ ಮೀಸಲಾತಿ ನೀಡಬೇಕಾಗಿರುವುದು ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದವರಿಗೆ ಮಾತ್ರ.
ಅಸಮಾನತೆ ಹೋಗಬೇಕು, ಜಾತಿ ವ್ಯವಸ್ಥೆಯಿಂದ ನಿರ್ಮಾಣವಾಗಿರುವ ಅಸಮಾನತೆಯಿಂದ ಬಹುಸಂಖ್ಯಾತ ಜನ ಅವಕಾಶ ವಂಚಿತರಾಗಿದ್ದಾರೆ. ಎಲ್ಲರಿಗೂ ಸಮಾನ ಅವಕಾಶ ನೀಡಬೇಕಿದೆ. ತಳ ಸಮುದಾಯವಿರಲಿ, ಮೇಲ್ವರ್ಗವಿರಲಿ ಎಲ್ಲರಿಗೂ ಸಮಾನತೆ ಇರಬೇಕು ಎಂಬ ಅಂಶವನ್ನು ಬಾಬಾ ಸಾಹೇಬ್ ಅಂಬೇಡ್ಕರ್ ಹೇಳಿದ್ದಾರೆ. ಹಿಂದುಳಿದ ಜಾತಿಗಳಲ್ಲೂ ತಾರತಮ್ಯ – ಅಸಮಾನತೆ ಇದೆ. ಇದನ್ನು ಒಂದೇ ಬಾರಿಗೆ ಹೋಗಲಾಡಿಸಲು ಸಾಧ್ಯವಿಲ್ಲ.
ಅಲೆಮಾರಿ ಜನಾಂಗಕ್ಕೆ ಉಚಿತ ಶಿಕ್ಷಣದ ಹಕ್ಕು ಒತ್ತಾಯ ಸಮಂಜಸವಾಗಿದೆ. ಸರ್ಕಾರ ಸರ್ವರಿಗೂ ಶಿಕ್ಷಣದ ಹಕ್ಕನ್ನು ನೀಡಿದೆ (RTE). ಅದರ ಪ್ರಕಾರ ಸರ್ಕಾರಿ ಶಾಲೆಗಳಲ್ಲಿ ಉಚಿತ ಶಿಕ್ಷಣ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿಯೂ ಅವಕಾಶ ಸಿಗಲು ಸರ್ಕಾರ ಅವಕಾಶ ಮಾಡಿಕೊಟ್ಟಿದೆ. ಈ ಬಾರಿಯ ಆಯವ್ಯಯದಲ್ಲಿ ಅಲೆಮಾರಿ ಜನಾಂಗಕ್ಕೆ ವಿಶೇಷ ಗಮನ ಹರಿಸಲಾಗುವುದು. ಇಷ್ಟು ಮಾತ್ರವಲ್ಲ ಅತಿ ಹಿಂದುಳಿದ ವರ್ಗದವರಿಗೂ ಕಾರ್ಯಕ್ರಮಗಳನ್ನು ಈ ಬಾರಿಯ ಆಯವ್ಯಯದಲ್ಲಿ ಅನುಷ್ಠಾನಗೊಳಿಸಲು ಪ್ರಯತ್ನಿಸುತ್ತೇನೆ. ಜೊತೆಗೆ ಹಣಕಾಸಿನ ಲಭ್ಯತೆಗೆ ಅನುಗುಣವಾಗಿ ಹಿಂದುಳಿದ ವರ್ಗಗಳಿಗೆ ಕಾರ್ಯಕ್ರಮಗಳನ್ನು ರೂಪಿಸಲಾಗುವುದು.
ಈ ಸಭೆಯಲ್ಲಿ, ಶಿಕ್ಷಣ ಸಚಿವರಾದ ಮಧು ಎಸ್. ಬಂಗಾರಪ್ಪ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹ್ಮದ್, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ಬಸವರಾಜ ರಾಯರೆಡ್ಡಿ, ವಿಧಾನ ಪರಿಷತ್ ಸದಸ್ಯರಾದ ನಾಗರಾಜ್ ಯಾದವ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಉನ್ನತ ಮಟ್ಟದ ಅಧಿಕಾರಿಗಳು, ಹಿಂದುಳಿದ ವರ್ಗ, ಜಾತಿ ಮತ್ತು ಸಮುದಾಯಗಳ ಮುಖಂಡರುಗಳು ಉಪಸ್ಥಿತರಿದ್ದರು.
ನಮ್ಮ ಸರ್ಕಾರದ ಈ ಹಿಂದಿನ ಅವಧಿಯಲ್ಲಿ ನಡೆಸಲಾದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯು ಅತ್ಯಂತ ವೈಜ್ಞಾನಿಕವಾಗಿ ನಡೆದಿದೆ. ಹೀಗಾಗಿ ವರದಿ ಜಾರಿಯ ಬಗ್ಗೆ ಯಾವುದೇ ಅನುಮಾನ ಅಥವಾ ಗೊಂದಲಗಳಿಗೆ ಆಸ್ಪದವಿಲ್ಲ. ನೂರಕ್ಕೆ ನೂರರಷ್ಟು ವರದಿ ಜಾರಿಯಾಗುವುದು ಸತ್ಯ. #ಕನ್ನಡಸುದ್ದಿ pic.twitter.com/vsiMTF8ry3
— Siddaramaiah (@siddaramaiah) February 19, 2025